ಸ್ವಾತಂತ್ರ್ಯ ದಿನಾಚರಣೆಗೆ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿಕೆ

Independence Day pre meeting Mandya
Published on

ಮಂಡ್ಯ: ಜಿಲ್ಲಾಡಳಿತದ ವತಿಯಿಂದ ಆ.15ರಂದು ಅರ್ಥಪೂರ್ಣವಾಗಿ ಸ್ವಾತಂತ್ರ್ಯ ದಿನವನ್ನು ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ಧ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಂದು ಬೆಳಗ್ಗೆ 9 ಗಂಟೆಗೆ ಸರ್‌ಎಂವಿ ಜಿಲ್ಲಾ ಕ್ರೀಡಾಂಗಣದಲ್ಲಿ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಶಿಷ್ಟಾಚಾರದ ಪ್ರಕಾರ ಎಲ್ಲರನ್ನೂ ಕಾರ್ಯಕ್ರಮಕ್ಕೆ ಆಹ್ವಾನಿಸಿ ಎಂದರು.

ಜಿಲ್ಲೆಯ ಪ್ರತಿ ನಾಗರಿಕರು ಆಚರಿಸಬೇಕಿರುವ ಹಬ್ಬವಾಗಿದ್ದು, ಸಾರ್ವಜನಿಕರು ಮತ್ತು ಸಂಘಟನೆಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಯಾವುದೇ ಲೋಪ ಉಂಟಾಗದಂತೆ ಅಚ್ಚುಕಟ್ಟಾಗಿ ನಡೆಸಲು ಸ್ವಾಗತ, ವೇದಿಕೆ, ಸ್ವಚ್ಛತೆ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಿ ಅಧಿಕಾರಿಗಳಿಗೆ ಜವಾಬ್ದಾರಿ ವಹಿಸಲಾಗುವುದ ಎಂದು ಹೇಳಿದರು.

ಜಿಲ್ಲೆಯ ಪ್ರೌಢಶಾಲೆ, ಕಾಲೇಜು, ಎನ್.ಸಿ.ಸಿ ವಿಭಾಗ, ಪೊಲೀಸ್, ಅಬಕಾರಿ ಸೇರಿ ಸುಮಾರು 30 ತಂಡ ಪಥ ಸಂಚಲನದಲ್ಲಿ ಭಾಗವಹಿಸಲಿವೆ. ಇವರಿಗೆ ಆ.11, 12 ಹಾಗೂ 13 ರಂದು ಅಭ್ಯಾಸ ಮಾಡಿಕೊಳ್ಳಲು ವ್ಯವಸ್ಥೆ ಕಲ್ಪಿಸಿ. ಪಥ ಸಂಚಲನ ಶಿಸ್ತು ಬದ್ಧವಾಗಿರಬೇಕು. ಪ್ರೌಢ ಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳು ಸೇರಿ ಒಟ್ಟು 5 ರಿಂದ 6 ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ಸಿದ್ಧತೆ ಮಾಡಿಕೊಳ್ಳಿ. ದೇಶಭಕ್ತಿ ಹಾಡುಗಳನ್ನು ಆಯ್ಕೆ ಮಾಡಿ. ಮುಖ್ಯವಾಗಿ ಹಾಡುಗಳು ಪುನಾರವರ್ತನೆಯಾಗದಂತೆ ನೋಡಿಕೊಳ್ಳಿ ಎಂದರು.

ಜಿಲ್ಲಾಮಟ್ಟದ ಅಧಿಕಾರಿಗಳು ತಮ್ಮ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ ಕಡ್ಡಾಯವಾಗಿ ಬೆಳಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಸಿಬ್ಬಂದಿಯೊಂದಿಗೆ ಹಾಜರಾಗಬೇಕು. ಸರ್ಕಾರಿ ಕಚೇರಿಗಳಿಗೆ ದೀಪಾಲಂಕಾರ ಮಾಡಿಸಿಕೊಂಡು ಕಾರ್ಯಕ್ರಮಕ್ಕೆ ವಿಶೇಷ ಮೆರಗು ನೀಡಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್.ನಂದಿನಿ, ಆಹಾರ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಕುಮಾರ್, ಸರ್ಕಾರಿ ನೌಕರರ ಸಂಘದ ಜಿಲಾಧ್ಯಕ್ಷ ನಾಗೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net