

ಸೋಮವಾರಪೇಟೆ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನದಿಂದ ಭಾರತದ ಪ್ರಜಾಪ್ರಭುತ್ವ ಗಟ್ಟಿಯಾಗಿದೆ ಎಂದು ತಹಸೀಲ್ದಾರ್ ಕೆ.ಕೆ.ಕೃಷ್ಣಮೂರ್ತಿ ಅಭಿಪ್ರಾಯಪಟ್ಟರು.
ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರನಾ ಸಮಿತಿ ವತಿಯಿಂದ ಪಟ್ಟಣದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ 76ನೇ ಗಣರಾಜ್ಯೋತ್ಸವದ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ, ಗಣರಾಜ್ಯೋತ್ಸವ ಸಂದೇಶ ನೀಡಿ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಸಂವಿಧಾನ ಮೌಲ್ಯ ಹಾಗೂ ಆಶಯಗಳನ್ನು ಗೌರವಿಸಿ, ಉಳಿಸಿ, ಬೆಳೆಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಬೇಕೆಂದು ಹೇಳಿದರು.
ಸಾಮಾಜಿಕ ನ್ಯಾಯ ಪ್ರತಿಪಾದಕರಾಗಿದ್ದ ಅಂಬೇಡ್ಕರ್, ಸಂವಿಧಾನದಲ್ಲಿ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವದ ತತ್ವಗಳನ್ನು ಅಳವಡಿಸಿದರು. ಇದು ಭಾರತದ ಪ್ರಜಾಪ್ರಭುತ್ವ ಚೌಕಟ್ಟಿಗೆ ಭದ್ರ ಅಡಿಪಾಯವಾಯಿತು. ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವ ಸೇರಿದಂತೆ ಭಾರತೀಯ ಸಂವಿಧಾನದಲ್ಲಿ ಪ್ರತಿಪಾದಿಸಲಾದ ಮೌಲ್ಯಗಳ ಜ್ಞಾಪನೆಯಾಗಿ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ ಎಂದು ಹೇಳಿದರು.
ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡಿದ್ದ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಬಿ.ಎಂ.ಬೆಳ್ಳಿಯಪ್ಪ ಮಾತನಾಡಿ, ಪ್ರತಿಯೊಬ್ಬರಿಗೂ ಸಂವಿಧಾನದ ಅರಿವು ಮತ್ತು ಜಾಗೃತಿ ಅವಶ್ಯ. ನಮ್ಮ ಸಂವಿಧಾನದ ಆಶಯಗಳು ವಿಶ್ವದಲ್ಲಿಯೇ ಶ್ರೇಷ್ಠವಾಗಿದ್ದು, ಸಮಾಜವಾದ, ಜಾತ್ಯಾತೀತ, ಪ್ರಜಾಸತ್ತಾತ್ಮಕ ಗಣರಾಜ್ಯವಾಗಿದೆ. ಯಾವುದೇ ಆಮಿಷಗಳಿಗೆ ಒಳಗಾಗದೆ ನಿರ್ಭೀತಿಯಿಂದ ಮತದಾನ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಬೇಕು. ಅದರಲ್ಲೂ ಯುವ ಮತದಾರರು ಮತದಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕಾಗಿದೆ. ರಾಷ್ಟ್ರಧ್ವಜ, ರಾಷ್ಟ್ರಗೀತೆಗೆ ಗೌರವ ನೀಡಬೇಕು. ರಾಷ್ಟ್ರೀಯ ಸ್ಮಾರಕಗಳು, ಸರ್ಕಾರಿ ಆಸ್ತಿಗಳನ್ನು ಸಂರಕ್ಷಿಸುವುದೂ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಬೇಕೆಂದರು.
ಚೌಡ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಿ.ಎಸ್.ಗೀತಾ ಅಧ್ಯಕ್ಷತೆ ವಹಿಸಿದ್ದರು. ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಜಯಂತಿ ಶಿವಕುಮಾರ್, ಉಪಾಧ್ಯಕ್ಷೆ ಮೋಹಿನಿ, ಸದಸ್ಯರಾದ ಬಿ.ಆರ್.ಮಹೇಶ್, ಪಿ.ಕೆ,ಚಂದ್ರು, ಚೌಡ್ಲು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನತೀಶ್ ಮಂದಣ್ಣ, ಸದಸ್ಯರಾದ ಸಿ.ಬಿ.ಸುರೇಶ್ ಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಮ್ಮ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸತೀಶ್, ಸೋಮವಾರಪೇಟೆ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಕೆ.ಎ.ಆದಂ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ಇತ್ತೀಚೆಗೆ ಸೇನೆಯಲ್ಲಿ ಅಪಘಾತ ಸಂದರ್ಭ ಮರಣವನ್ನಪ್ಪಿದ ಲ್ಯಾನ್ಸ್ ಹವಾಲ್ದಾರ್ ದಿವಿನ್ ಅವರ ತಾಯಿ ಜಲಜಾಕ್ಷಿ ಅವರನ್ನು ಗೌರವಿಸಲಾಯಿತು. ವಿವಿಧ ಇಲಾಖೆಗಳಲ್ಲಿ ಉತ್ತಮ ಸೇವೆ ಸಲ್ಲಿಸಿದ ನೌಕರರಾದ ಜಾಧವ್, ಲಕ್ಷ್ಮೀಕುಮಾರ್ ಹಾಗೂ ಪಾತುನಾ ಅವರುಗಳನ್ನು ಸನ್ಮಾನಿಸಲಾಯಿತು.
ಸಭಾ ಕಾರ್ಯಕ್ರಮಕ್ಕೆ ಮೊದಲು ಪೋಲೀಸ್, ಜೈ ಜವಾನ್ ಮಾಜಿ ಸೈನಿಕರ ಸಂಘ, ಗೃಹರಕ್ಷಕ ದಳ, ಸ್ಕೌಟ್ಸ್ ಹಾಗೂ ಶಾಲಾ ವಿದ್ಯಾರ್ಥಿಗಳ ತಂಡದಿಂದ ಆಕರ್ಷಕ ಪಥಸಂಚಲನ ನಡೆಯಿತು.