

ಪಿರಿಯಾಪಟ್ಟಣ: ಇಂದಿರಾ ಕ್ಯಾಂಟೀನ್‌ನಲ್ಲಿ ಗುಣಮಟ್ಟ ಮತ್ತು ಸ್ವಚ್ಛತೆಯನ್ನು ಕಾಯ್ದುಕೊಳ್ಳುವ ಜವಾಬ್ದಾರಿ ಪುರಸಭೆ ಅಧಿಕಾರಿಗಳದ್ದಾಗಿದೆ ಎಂದು ತಾಲೂಕು ಆಶ್ರಯ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್ ತಿಳಿಸಿದರು.
ಪಟ್ಟಣದಲ್ಲಿ ಶನಿವಾರ ನೂತನ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ ಅವರು ಮಾತನಾಡಿ, ಮೈಸೂರಿನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಿಲ್ಲೆಯಲ್ಲಿ ಒಟ್ಟು 7 ಇಂದಿರಾ ಕ್ಯಾಂಟೀನ್ ಗಳಿಗೆ ಇಂದು ಏಕಕಾಲದಲ್ಲಿ ಅಧಿಕೃತವಾಗಿ ಚಾಲನೆ ನೀಡಿದ್ದಾರೆ ಎಂದರು.
2013-18ರ ಅವಧಿಯಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಗಳಾಗಿದ್ದಾಗ ಆರ್ಥಿಕವಾಗಿ ಹಿಂದುಳಿದವರು, ಬಡವರು, ಕೂಲಿ ಕಾರ್ಮಿಕರಿಗೆ ಅತಿ ಕಡಿಮೆ ದರದಲ್ಲಿ ಊಟ ತಿಂಡಿ ದೊರಕಬೇಕು ಎನ್ನುವ ಉದ್ದೇಶದಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಿ ಬಡವರ ಹಸಿವು ನೀಗಿಸುವ ಪ್ರಯತ್ನ ಮಾಡಿದರು. ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ರಾಜಕೀಯ ಪ್ರತಿಷ್ಠೆಯಿಂದಾಗಿ ಇಂದಿರಾ ಕ್ಯಾಂಟೀನ್‌ಗಳನ್ನು ಕಡೆಗಣಿಸಲಾಗಿತ್ತು. 2023ರಲ್ಲಿ ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿಯಾದ ಬಳಿಕ ಇಂದಿರಾ ಕ್ಯಾಂಟೀನ್‌ಗಳಿಗೆ ಪುನಶ್ಚೇತನ ನೀಡುವ ಕಾರ್ಯ ಮಾಡಿದ್ದಾರೆ ಎಂದರು.
ಪಟ್ಟಣದಲ್ಲಿ ಹೆಚ್ಚು ಜನಸಂದಣಿ ಇರುವ ಬಿ.ಎಂ. ರಸ್ತೆಯಲ್ಲಿ ಇಂದಿರಾ ಕ್ಯಾಂಟೀನ್ ಆರಂಭಗೊಂಡಿರುವುದು ಸಂತಸದ ವಿಷಯ. ಆಹಾರದ ಗುಣಮಟ್ಟ ಮತ್ತು ಕ್ಯಾಂಟೀನ್ ಆವರಣವನ್ನು ಸ್ವಚ್ಛತೆಯಿಂದ ಇಟ್ಟುಕೊಳ್ಳುವುದು ಪುರಸಭೆಯ ಜವಾಬ್ದಾರಿಯಾಗಿದೆ. ಅತಿ ಕಡಿಮೆ ದರದಲ್ಲಿ ಊಟ-ತಿಂಡಿ ದೊರಕುತ್ತಿದ್ದು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯುವ ಜತೆಗೆ ಸ್ವಚ್ಛತೆ ಕಾಪಾಡಲು ಸಹಕರಿಸಬೇಕೆಂದು ಮನವಿ ಮಾಡಿದರು.
ಪುರಸಭೆ ಮುಖ್ಯಾಧಿಕಾರಿ ಕೆ.ಯು.ಮುತ್ತಪ್ಪ, ಪುರಸಭೆ ಅಧ್ಯಕ್ಷ ಪ್ರಕಾಶ್ ಸಿಂಗ್, ಸದಸ್ಯರಾದ ಎಚ್.ಕೆ.ಮಂಜುನಾಥ್, ಪಿ.ಸಿ.ಕೃಷ್ಣ, ಮಂಜುನಾಥ್ ಸಿಂಗ್, ಪಿ.ಎನ್.ವಿನೋದ್, ರವಿ, ನಿರಂಜನ್, ಮಲ್ಲಿಕಾರ್ಜುನ್, ತಮ್ಮಣ್ಣಯ್ಯ, ರಾಜೇಶ್ ಮುಖಂಡರಾದ ಡಿ.ಟಿ.ಸ್ವಾಮಿ, ಪುಟ್ಟರಾಜು, ಪಿ.ಎಸ್.ಹರೀಶ್, ಲೋಹಿತ್, ಭೀಮಣ್ಣ ಮತ್ತಿತರರು ಇದ್ದರು.