

ತರೀಕೆರೆ: ಹಿಂದುಳಿದವರಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ರಾಜಕೀಯ ಶಕ್ತಿ ನೀಡಿದ ಕೀರ್ತಿ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರಿಗೆ ಸಲ್ಲಬೇಕು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.
ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಮಂಗಳವಾರ ತಾಲೂಕು ಆಡಳಿತದಿಂದ ಏರ್ಪಡಿಸಿದ್ದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 109ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ರಾಜ್ಯದಲ್ಲಿ ಹೊಸ ಪರಿವರ್ತನೆಗಳಿಗೆ ಕಾರಣರಾದ ಮಾಜಿ ಸಿಎಂ ಡಿ.ದೇವರಾಜ ಅರಸು ಅವರು 13ಅಂಶಗಳ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಜನಜನಿತರಾಗಿದ್ದಾರೆ ಎಂದರು.
ಸಿಎಂ ಎಸ್.ಸಿದ್ದರಾಮಯ್ಯ ಅವರೂ ಡಿ.ದೇವರಾಜ ಅರಸು ಹಾದಿಯಲ್ಲೇ ಸಾಗುತ್ತಿದ್ದು, ಹಲವು ಸೌಲಭ್ಯ ಜನರಿಗೆ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳು ಮಹಾನೀಯರ ಆದರ್ಶ ಪಾಲಿಸಿ ಜೀವನದಲ್ಲಿ ದೊಡ್ಡ ಗುರಿಯೊಂದಿಗೆ ಶ್ರೇಷ್ಠ ಸಾಧನೆ ಮಾಡಬೇಕು ಎಂದರು.
ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಪದವಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕರಿಸಲಾಯಿತು. ಭದ್ರಾ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್, ಪುರಸಭೆ ಮಾಜಿ ಅಧ್ಯಕ್ಷ ಎಂ.ನರೇಂದ್ರ, ಬಿಸಿಎಂ ಅಧಿಕಾರಿ ಎಲ್.ಧರ್ಮರಾಜ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್, ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಕೆ.ಯತಿರಾಜ್ ಮತ್ತಿತರರಿದ್ದರು.