

ಬೆಂಗಳೂರು: ವಿದೇಶಗಳಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರ ಆರೋಗ್ಯವನ್ನು ಕಡ್ಡಾಯವಾಗಿ ತಪಾಸಣೆ ನಡೆಸಬೇಕು ಎಂದು ಬೆಂ.ಗ್ರಾಮಾಂತರ ಜಿಲ್ಲೆ ಅಪರ ಜಿಲ್ಲಾಧಿಕಾರಿ ಜಗದೀಶ್ ಕೆ.ನಾಯಕ್ ಸೂಚಿಸಿದರು.
ದೇವನಹಳ್ಳಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬರುವ ಪ್ರಯಾಣಿಕರಿಗೆ ಸೌಲಭ್ಯ ಒದಗಿಸುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ಪ್ರಯಾಣಿಕರ ಆರೋಗ್ಯ ತಪಾಸಣೆಯಲ್ಲಿ ಈಗಾಗಲೇ 3 ಗುಂಪು ಮಾಡಿಕೊಳ್ಳಲಾಗಿದೆ. ನೆಗಡಿ, ಕೆಮ್ಮು, ಜ್ವರದ ಲಕ್ಷಣ ಕಂಡುಬಂದವರಿಗೆ ಎ ಗುಂಪು, 60 ವರ್ಷ ಮೇಲ್ಪಟ್ಟಿರುವ ಮಧುಮೇಹ, ರಕ್ತದೊತ್ತಡ, ಅಸ್ತಮಾ ಸೇರಿ ಇನ್ನಿತರ ಕಾಯಿಲೆಯಿಂದ ಬಳುತ್ತಿರುವ ಪ್ರಯಾಣಿಕರನ್ನು ಬಿ ಗುಂಪು ಹಾಗೂ 60 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ಕರೊನಾ ಸೋಂಕಿನ ಲಕ್ಷಣಗಳಿರುವ ಪ್ರಯಾಣಿಕರನ್ನು ಸಿ ಗುಂಪು ಎಂದು ವರ್ಗೀಕರಿಸಲಾಗಿದೆ. ಶಂಕಿತ ಪ್ರಯಾಣಿಕರನ್ನು 14 ದಿನ ವೈದ್ಯರ ಮೇಲ್ವಿಚಾರಣೆಯಲ್ಲಿ ತೀವ್ರ ನಿಗಾದಲ್ಲಿ ಇಡಲಾಗುವುದು ಎಂದು ತಿಳಿಸಿದರು.
ರಾಜ್ಯ ಸರ್ಕಾರ ವಿಪತ್ತು ತುರ್ತು ಪರಿಸ್ಥಿತಿ ಎಂದು ಘೋಷಿಸಿದ ಹಿನ್ನೆಲೆಯಲ್ಲಿ ಈಗಾಗಲೇ ವೈರಸ್ ಹರಡದಂತೆ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ 24 ಗಂಟೆ ಕಾರ್ಯನಿರ್ವಹಿಸುತ್ತಿದೆ ಎಂದರು.
ಉಪವಿಭಾಗಾಧಿಕಾರಿ ಮಂಜುನಾಥ್ ಸೇರಿ ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಜಿಲ್ಲಾಮಟ್ಟದ ಅಧಿಕಾರಿಗಳ ತಂಡ: ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳನ್ನೊಳಗೊಂಡ ತಂಡ ರಚಿಸಲಾಗಿದೆ. ಅಧಿಕಾರಿ ಹಾಗೂ ಸಿಬ್ಬಂದಿಗೆ ನಿಗದಿಪಡಿಸಿದ ದಿನಾಂಕ ಮತ್ತು ಸಮಯದಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖುದ್ದು ಹಾಜರಿದ್ದು, ವಿಮಾನ ನಿಲ್ದಾಣದಿಂದ ಬರುವ ಪ್ರಯಾಣಿಕರಲ್ಲಿ ಕರೊನಾ ವೈರಸ್ ಕುರಿತ ಆರೋಗ್ಯ ತಪಾಸಣೆಗೆ ದೇವನಹಳ್ಳಿಯ ಆಕಾಶ್ ಮೆಡಿಕಲ್ ಕಾಲೇಜಿಗೆ ಕಾಯ್ದಿರಿಸಿದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಆಂಬುಲೆನ್ಸ್ ಮೂಲಕ ಕರೆದೊಯ್ಯುವ ವ್ಯವಸ್ಥೆ ಮಾಡಲಾಗಿದೆ. ಕರೊನಾ ಶಂಕಿತರಿಗೆ ಮೆಡಿಕಲ್ ಕಾಲೇಜಿನಲ್ಲಿ ಈಗಾಗಲೇ ಅಗತ್ಯ ಸೌಕರ್ಯ ಕಲ್ಪಿಸಲಾಗಿದೆ.
ವಿಮಾನ ನಿಲ್ದಾಣದಿಂದ ಬರುವ ಪ್ರಯಾಣಿಕರಿಗೂ ಆರೋಗ್ಯ ತಪಾಸಣೆ ಕಡ್ಡಾಯವಾಗಿದೆ. ದೇವನಹಳ್ಳಿ ತಾಲೂಕಿನ ಪ್ರಸನ್ನಹಳ್ಳಿಯ ಆಕಾಶ್ ಮೆಡಿಕಲ್ ಕಾಲೇಜಿನಲ್ಲಿ ಇದಕ್ಕಾಗಿಯೇ ಪ್ರತ್ಯೇಕ ವಿಶೇಷ ಸೌಲಭ್ಯ ಕಲ್ಪಿಸಲಾಗಿದೆ. ಜಗದೀಶ್ ಕೆ.ನಾಯಕ್, ಅಪರ ಜಿಲ್ಲಾಧಿಕಾರಿ ಬೆಂ.ಗ್ರಾಮಾಂತರ