

ಮಡಿಕೇರಿ:
ಈಗಾಗಲೇ ಅನುಮೋದನೆ ದೊರೆತಿರುವ ಮಡಿಕೇರಿ ಗಾಂಧಿ ಸ್ಮಾರಕ ಉದ್ಯಾನವನದ ಕಾಮಗಾರಿಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಎನ್. ಎಸ್. ಬೋಸರಾಜು ಸೂಚನೆ ನೀಡಿದರು. ಬುಧವಾರ ಸಂಜೆ ಗಾಂಧಿ ಸ್ಮಾರಕ ಉದ್ಯಾನ ಅಭಿವೃದ್ದಿ ಕಾಮಗಾರಿಗಳ ಪರಿಶೀಲನೆ ನಡೆಸಿದ ನಂತರ ಅಧಿಕಾರಿಗಳ ಜತೆ ಚರ್ಚೆ ಮಾಡಿದರು.
ಅ. 2 ರೊಳಗಾಗಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಈಗಾಗಲೇ ಅನುಮತಿ ನೀಡಲಾಗಿದೆ. ಇದಕ್ಕೆ ಅಗತ್ಯವಿರುವ ಅನುದಾನ ಒದಗಿಸಲಾಗಿದ್ದು ಅದಕ್ಕೆ ಅನುಮೋದನೆ ನೀಡಲಾಗಿದೆ. ಕಾಮಗಾರಿಯನ್ನು ಕ್ಷಿಪ್ರ ಗತಿಯಲ್ಲಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನ ಕೈಗೊಳ್ಳಬೇಕು. ಅನುಮೋದನೆ ದೊರೆತಿರುವ ಕಾಮಗಾರಿ ಪೂರ್ಣಗೊಳಿಸಿದ ನಂತರ ಹೆಚ್ಚಿನ ಅನುದಾನದ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಹೆಚ್ಚಿನ ಅನುದಾನದ ನಿರೀಕ್ಷೆಯಲ್ಲಿ ಪ್ರಸ್ತುತ ಕಾಮಗಾರಿಯನ್ನು ಕುಂಠಿತಗೊಳಿಸುವ ಕ್ರಮ ಆಗಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕ ಡಾ. ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟ್‌ರಾಜಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಸರ್ವೋದಯ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಅಂಬೆಕಲ್ಲು ಕುಶಾಲಪ್ಪ, ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್, ಸರ್ವೋದಯ ಸಮಿತಿ ಸದಸ್ಯರು ಇದ್ದರು.