

ಮೈಸೂರು: ನಗರದ ಗನ್‌ಹೌಸ್ ವೃತ್ತದಲ್ಲಿ ಶ್ರೀ ಸುತ್ತೂರು ಮಠದ ಡಾ.ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಅವರ ಪ್ರತಿಮೆಯನ್ನು ರಾತ್ರೋ ರಾತ್ರಿ ಪ್ರತಿಷ್ಠಾಪಿಸಿರುವುದಕ್ಕೆ ಮೈಸೂರು ರಾಜಮನೆತನದ ಪ್ರಮೋದಾದೇವಿ ಒಡೆಯರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಗನ್‌ಹೌಸ್ ವೃತ್ತದಲ್ಲಿ ಮೈಸೂರು ರಾಜಮನೆತನದ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಪ್ರತಿಮೆಯನ್ನು ನಿರ್ಮಾಣ ಮಾಡಲು ಮೈಸೂರು ರಾಜಮನೆತನದವರು ಉದ್ದೇಶಿಸಿದ್ದರು. ಈ ಜಾಗದಲ್ಲಿ ಡಾ.ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಪ್ರತಿಮೆ ನಿರ್ಮಾಣ ಮಾಡಲು ಮುಂದಾದ ಸಂದರ್ಭ 15-7-2022 ರಂದು ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರಿಗೆ ಪ್ರಮೋದಾದೇವಿ ಒಡೆಯರ್ ಪತ್ರ ಬರೆದ್ದರು.
‘ಗನ್‌ಹೌಸ್ ವೃತ್ತದಲ್ಲಿ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಪ್ರತಿಮೆ ನಿರ್ಮಾಣ ಮಾಡಲು ಜನರು ಬಯಸಿದ್ದು, ಈ ಹಿನ್ನೆಲೆಯಲ್ಲಿ ರಾಜೇಂದ್ರ ಶ್ರೀಗಳ ಪ್ರತಿಮೆ ಸ್ಥಾಪಿಸುವ ನಿರ್ಧಾರವನ್ನು ಮರು ಪರಿಶೀಲಿಸಬೇಕು ಎಂದು’ ಎಂದು ಪ್ರಮೋದಾದೇವಿ ಒಡೆಯರ್ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದರು. ಆದರೆ, ಶುಕ್ರವಾರ ರಾತ್ರಿ ದಿಢೀರಾಗಿ ಗನ್‌ಹೌಸ್ ವೃತ್ತದಲ್ಲಿ ರಾಜೇಂದ್ರ ಶ್ರೀಗಳ ಪ್ರತಿಮೆ ಸ್ಥಾಪಿಸಿರುವುದಕ್ಕೆ ಪ್ರಮೋದಾದೇವಿ ಒಡೆಯರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
‘ಗನ್‌ಹೌಸ್ ಬಳಿ ತಡರಾತ್ರಿ ಕ್ರೇನ್ ಉಪಯೋಗಿಸಿ ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಅವರ ಪ್ರತಿಮೆ ಸ್ಥಾಪಿಸಲು ಮುಂದಾಗಿರುವ ವಿಷಯ ಅತ್ಯಂತ ದುರದೃಷ್ಟಕರ ಸಂಗತಿ. ಈ ಕುರಿತು ಪ್ರಬುದ್ಧ ಸಂಸ್ಥೆಯಿಂದ ಇಂತಹ ಘಟನೆ ನಿಜಕ್ಕೂ ಸಮಂಜಸವಲ್ಲ’ ಎಂದು ಪ್ರಮೋದಾದೇವಿ ಒಡೆಯರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.