

ಮಡಿಕೇರಿ:
ಕೇರಳದಲ್ಲಿ ಕೊರೋನಾ ರೂಪಾಂತರಿ ಜೆಎನ್1 ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಕೊಡಗಿನಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರೂ ಆಗಿರುವ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್. ಎಸ್. ಭೋಸರಾಜು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.
ಭಾನುವಾರ ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿಗಳ ಜತೆ ದೂರವಾಣಿ ಮೂಲಕ ಮಾತನಾಡಿ ಜಿಲ್ಲೆಯ ಪ್ರಸ್ತುತ ಪರಿಸ್ಥಿತಿ ಬಗ್ಗೆ ಸಮಗ್ರ ಮಾಹಿತಿ ಪಡೆದುಕೊಂಡರು. ಕೊಡಗು ಗಡಿಗೆ ಹೊಂದಿಕೊAಡಿರುವ ಕೇರಳ ರಾಜ್ಯದಲ್ಲಿ ರೂಪಾಂತರಿ ಕೊರೋನಾ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳಬೇಕು. ಜಿಲ್ಲೆಯ ಆರೋಗ್ಯ ಇಲಾಖೆ ಸನ್ನದ್ಧವಾಗಿದ್ದು ಎಲ್ಲಾ ರೀತಿಯ ಪರಿಸ್ಥಿತಿಗಳನ್ನ ನಿಭಾಯಿಸಲು ಸಜ್ಜಾಗಿರಬೇಕು.
ಜನ ಸಾಮಾನ್ಯರಿಗೆ ಯಾವುದೇ ತೊಂದರೆ ಆಗದಂತೆಯೂ ಕ್ರಮಗಳನ್ನ ಕೈಗೊಳ್ಳಬೇಕು. ಕೊರೋನಾ ಪ್ರಕರಣಗಳು ಕಂಡು ಬಂದಲ್ಲಿ ನಿಯಮಾನುಸಾರ ಅಗತ್ಯ ಚಿಕಿತ್ಸೆ ಹಾಗೂ ಇನ್ನುಳಿದ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳಬೇಕು. ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಈಗಿನಿಂದಲೇ ಅಗತ್ಯ ವ್ಯವಸ್ಥೆಗಳನ್ನ ಹಾಗೂ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದ್ದಾರೆ.