ಅರ್ಹ ಫಲಾನುಭವಿಗಳ ಪಟ್ಟಿ ತಯಾರಿಸಲು ಸೂಚನೆ

14 vikram 10
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ ವಿವಿಧ ಇಲಾಖೆಗಳು ನೀಡುವ ಫಲಾನುಭವಿ ಆಧಾರಿತ ಮತ್ತು ಸಮುದಾಯ ಆಧಾರಿತ ಯೋಜನೆಗಳನ್ನು ಅಲ್ಪಸಂಖ್ಯಾತರಿಗೆ ತಲುಪಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳು ಗ್ರಾಮ ಪಂಚಾಯಿತಿ ಹಾಗೂ ವಾರ್ಡ್​ ಮಟ್ಟದಲ್ಲಿ ಸ್ಥಳಿಯ ಸಂಸ್ಥೆಗಳೊಂದಿಗೆ ಸಭೆ ನಡೆಸಿ ಅರ್ಹರ ಪಟ್ಟಿ ತಯಾರಿಸಲು ಜಿಲ್ಲಾಧಿಕಾರಿ ದಿವ್ಯ ಪ್ರಭು ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೆಲ ಇಲಾಖೆ ಅಧಿಕಾರಿಗಳು ಮಾರ್ಚವರೆಗೂ ಅರ್ಹರನ್ನು ಗುರುತಿಸುವ ಕಾರ್ಯ ಮಾಡುತ್ತಾರೆ. ಇದು ಸರಿ ಅಲ್ಲ. ಪ್ರತಿ ಇಲಾಖೆಯಿಂದ ಜಿಲ್ಲಾ ಹಂತದಲ್ಲಿ ಕೊಡುವ ಲಾನುಭವಿ ಆಧಾರಿತ ಮತ್ತು ಸಮುದಾಯ ಆಧಾರಿತ ಯೋಜನೆಗಳ ಪ್ರಯೋಜನ ಪಡೆದಿರುವವರ ವಿವರಗಳನ್ನು ದಾಖಲಿಸಿ ನಿರ್ವಹಿಸಬೇಕು. ಇದರಿಂದ ನಕಲಿ ಅಥವಾ ಯೋಜನೆ ಲಾಭ ಪಡೆದವರನ್ನು ನಿಯಂತ್ರಿಸಿ, ಹೊಸಬರಿಗೆ ಅವಕಾಶ ನೀಡಬಹುದು ಎಂದರು.
ವಿವಿಧ ಇಲಾಖೆಗಳಲ್ಲಿನ ಅಲ್ಪಸಂಖ್ಯಾತರಿಗೆ ಸಿಗಬೇಕಾದ ಸೌಲಭ್ಯ ಮತ್ತು ಯೋಜನೆಗಳಲ್ಲಿ ಪ್ರಗತಿ ಸಾಧಿಸದಿರುವುದಕ್ಕೆ ಫಲಾನುಭವಿಗಳು ಅರ್ಜಿ ಹಾಕದಿರುವುದು ಕಾರಣ. ಹೀಗಾಗಿ ಅಲ್ಪ ಸಂಖ್ಯಾತ ಸಮುದಾಯಗಳು ಹೆಚ್ಚಾಗಿ ವಾಸಿಸುವ ಪ್ರದೇಶಗಳಲ್ಲಿ ನಗರ ಹಾಗೂ ಗ್ರಾಮಗಳ ಮಟ್ಟದಲ್ಲಿ ಮಾಹಿತಿ ಕಾರ್ಯಾಗಾರ ಆಯೋಜಿಸಬೇಕು ಎಂದರು.
ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಜಿಲ್ಲಾ ನಗರಾಭಿವೃದ್ಧಿ ಕೋಶದ ಪ್ರಭಾರ ನಿರ್ದೇಶಕ ಅಜೀಜ್​ ದೇಸಾಯಿ, ಲೀಡ್​ ಬ್ಯಾಂಕ್​ ಜಿಲ್ಲಾ ವ್ಯವಸ್ಥಾಪಕ ಪ್ರಭುದೇವ್​ ಎನ್​.ಜಿ., ಡಿವೈಎಸ್​ಪಿ ಎಸ್​.ಎಂ.ನಾಗರಾಜ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ.ಕಿರಣಕುಮಾರ, ಆಹಾರ ಇಲಾಖೆ ಜಂಟಿ ನಿರ್ದೇಶಕ ಚನ್ನಬಸಪ್ಪ ಕೊಡ್ಲಿ, ವಿವಿಧ ಇಲಾಖೆ ಅಧಿಕಾರಿಗಳು, ಇತರರು ಇದ್ದರು.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಗೋಪಾಲ ಲಮಾಣಿ ಸ್ವಾಗತಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net