ಶೀಘ್ರ ಅರ್ಜಿಗಳ ವಿಲೇವಾರಿಗೆ ಸೂಚನೆ

11 vikram 1
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಉತ್ತಮವಾಗಿ ಅನುಷ್ಠಾನವಾಗುತ್ತಿವೆ. ಯುವನಿಧಿ, ಗೃಹಲಕ್ಷ್ಮೀ ಯೋಜನೆಯ ಬಾಕಿ ಅರ್ಜಿಗಳನ್ನು ಸೂಕ್ತವಾಗಿ ಪರಿಶೀಲಿಸಿ ಶೀಘ್ರ ವಿಲೇವಾರಿ ಮಾಡುವಂತೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಸ್. ಆರ್​. ಪಾಟೀಲ ಹೇಳಿದರು.

ನಗರದ ಜಿಪಂ ಸಭಾಂಗಣದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸ್ಥಿರತೆ ಹಾಗೂ ಅಭಿವೃದ್ಧಿ ದೃಷ್ಟಿಯಿಂದ ಜಾರಿಯಾದ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಅಧಿಕಾರಿಗಳು ಜಾಗೃತಿ ವಹಿಸಬೇಕು. ಜನರಿಗೆ ಸರಿಯಾದ ಮಾಹಿತಿ ನೀಡಿ ಸೌಜನ್ಯದಿಂದ ವರ್ತಿಸಬೇಕು. ಅನ್ನಭಾಗ್ಯ ಯೋಜನೆಯಡಿ ಸಹಾಯಧನ ಬದಲಿಗೆ ಅಕ್ಕಿ ನೀಡಲು ಸರ್ಕಾರ ನಿರ್ಧರಿಸಿದೆ. ಫೆಬ್ರವರಿ ತಿಂಗಳಿಂದ ಅಕ್ಕಿ ನೀಡಲು ಆದೇಶಿಸಿದೆ. ಏಪ್ರಿಲ್​ ಯೋಜನಾ ನಿಯಮದಂತೆ ಪ್ರತಿ ತಿಂಗಳು 10 ಕೆ.ಜಿ ಅಕ್ಕಿ ಕೊಡಲಾಗುತ್ತದೆ. ಜನರಿಗೆ ಸಮಿತಿ ಸದಸ್ಯರು ತಿಳಿವಳಿಕೆ ಮೂಡಿಸಬೇಕು ಎಂದರು.

ಜಿಪಂ ಸಿಇಒ ಭುವನೇಶ ಪಾಟೀಲ ಯೋಜನೆಯ ಪ್ರಗತಿ ಕುರಿತು ಮಾಹಿತಿ ಪಡೆದರು. ಉಪಾಧ್ಯಕ್ಷರಾದ ಮುರಗಯ್ಯ ವಿರಕ್ತಮಠ, ಅರವಿಂದ ಏಗನಗೌಡರ, ಅಬ್ದುಲ್​ ರಸೀದ ಬೋಳಾಯಿ, ರತ್ನಾ ತೇಗೂರಮಠ, ಸದಸ್ಯರು, ಅಧಿಕಾರಿಗಳು, ಇತರರು ಇದ್ದರು.

ಬಿ.ಎಸ್​. ಮೂಗನೂರಮಠ ಸ್ವಾಗತಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net