ಸಾರ್ವಜನಿಕರೊಂದಿಗೆ ಸಹನೆಯಿಂದ ವರ್ತಿಸಲು ಸೂಚನೆ

saleem
Published on

ಹುಬ್ಬಳ್ಳಿ: ಇಲ್ಲಿಯ ನವನಗರದಲ್ಲಿರುವ ಪೊಲೀಸ್ ಆಯುಕ್ತಾಲಯ ಕಚೇರಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ ಅವರು ಭಾನುವಾರ ಭೇಟಿ ನೀಡಿ, ಹು-ಧಾ ಪೊಲೀಸ್ ಕಮಿಷನರೇಟ್ ಕಾರ್ಯವೈಖರಿ, ಅಪರಾಧ ಪ್ರಮಾಣಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ನೇರವಾಗಿ ಪೊಲೀಸ್ ಕಮಿಷನರ್ ಕಚೇರಿಗೆ ಭೇಟಿ ನೀಡಿ ಕಡತಗಳನ್ನು ಪರಿಶೀಲನೆ ನಡೆಸಿದರು. ನಂತರ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿ, ಅಗತ್ಯ ಮಾಹಿತಿ ಸಂಗ್ರಹಿಸಿದರು.

ಠಾಣೆಗೆ ಬರುವ ಸಾರ್ವಜನಿಕರೊಂದಿಗೆ ಸಹನೆಯಿಂದ ವರ್ತಿಸಬೇಕು. ಅನ್ಯಾಯಕ್ಕೊಳಗಾದವರಿಗೆ ನ್ಯಾಯ ಒದಗಿಸಲು ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದು ಸೂಚನೆ ನೀಡಿದರು.

ಸಿಎಆರ್ ಮೈದಾನದ ಆವರಣದಲ್ಲಿರುವ ಪೊಲೀಸ್ ಕ್ವಾರ್ಟರ್ಸ್‌ಗೆ ನಂತರ ಭೇಟಿ ನೀಡಿ ಕ್ವಾಟರ್ಸ್‌ಗಳಲ್ಲಿರುವ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು. ಅಲ್ಲದೆ, ವಾಸವಿರುವ ಸಿಬ್ಬಂದಿ ಕುಟುಂಬದವರೊಂದಿಗೆ ಚರ್ಚಿಸಿ ಕುಂದು-ಕೊರತೆ ಆಲಿಸಿದರು. ಅಗತ್ಯ ಸೌಲಭ್ಯ ಒದಗಿಸಲು ಹಿರಿಯ ಅಧಿಕಾರಿಗಳಿಗೆ ಸೂಚಿಸಿದರು.

ಗೋಕುಲ ರೋಡ್ ಠಾಣೆಗೆ ಭೇಟಿ ನೀಡಿ ಅಧಿಕಾರಿಗಳು ಮತ್ತು ಸಿಬ್ಬಂದಿಯೊಂದಿಗೆ ವಿಚಾರ ವಿನಿಮಯ ನಡೆಸಿದರು. ಇಲಾಖೆಯ ಸೂಚನೆಗಳನ್ನು ಕಡ್ಡಾಯವಾಗಿ ಪಾಲನೆ ಮಾಡಲು ಹೇಳಿದರು. ಸಿಬ್ಬಂದಿ ಕೊರತೆ ನೀಗಿಸಲು ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು. ಧಾರವಾಡದ ಜಿಲ್ಲಾ ಪೊಲೀಸ್ ಕಚೇರಿಗೆ ತೆರಳಿ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಧಾರವಾಡದಲ್ಲಿರುವ ಸಿಐಡಿ ಕಚೇರಿ, ಗ್ರಾಮೀಣ ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಸಿಐಡಿ ಎಸ್ಪಿ ರಶ್ಮಿ ಪರಡಿ, ಧಾರವಾಡ ಎಸ್ಪಿ ಆರ್ಯನ್ ಗುಂಜನ್, ಡಿಸಿಪಿಗಳಾದ ಮಹಾನಿಂಗ ನಂದಗಾವಿ, ರವೀಶ ಸಿ.ಆರ್., ಎಸಿಪಿಗಳಾದ ಶಿವಪ್ರಕಾಶ ನಾಯಕ, ಉಮೇಶ ಚಿಕ್ಕಮಠ, ಪೊಲೀಸ್ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net