

ಶಿರಸಿ: ಉತ್ತರಕನ್ನಡ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಮತ್ತು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ವಿುಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕಾರವಾರದ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಿಗೆ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ಸೂಚನೆ ನೀಡಿದೆ. ಆಸ್ಪತ್ರೆಯ ಹೋರಾಟದ ಕುರಿತಂತೆ ಇದು ಮೊದಲ ಮೆಟ್ಟಿಲಾಗಿದೆ ಎಂದು ಹೋರಾಟಗಾರ ಅನಂತಮೂರ್ತಿ ಹೆಗಡೆ ಹೇಳಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯಲ್ಲಿ ಒಂದೂ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆ ಇಲ್ಲದ ಕಾರಣ, ಜಿಲ್ಲೆಯಲ್ಲಿ ಒಂದು ಸುಸಜ್ಜಿತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಆಗಬೇಕೆಂಬುದು ಬಹುದಿನದ ಬೇಡಿಕೆಯಾಗಿತ್ತು. ಅದರಂತೆ ಬಿಜೆಪಿ ಸರ್ಕಾರದಲ್ಲಿ ಕುಮಟಾದಲ್ಲಿ ಸ್ಥಳವನ್ನು ಗುರುತಿಸಿ, ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ವಣಕ್ಕೆ ಮುಂದಾಗಿತ್ತು. ಆದರೆ ನಂತರ ಬದಲಾದ ಸರ್ಕಾರ ಜಿಲ್ಲೆಯ ಜನರ ಬಹುದಿನದ ಬೇಡಿಕೆಯನ್ನು ಮೂಲೆಗೆ ತಳ್ಳಿತ್ತು.
ಈ ಹಿನ್ನೆಲೆಯಲ್ಲಿ ಜಿಲ್ಲೆಯ ಜನರ ಸಹಕಾರದೊಂದಿಗೆ ಏಳು ದಿನಗಳ ಕಾಲ 140 ಕಿ.ಮೀ ಗಳ ಪಾದಯಾತ್ರೆ ಮಾಡಿ, ಉತ್ತರಕನ್ನಡ ಜಿಲ್ಲೆಯ ಘಟ್ಟದ ಮೇಲೊಂದು ಮತ್ತು ಘಟ್ಟದ ಕೆಳಗೊಂದು ಮೆಡಿಕಲ್ ಕಾಲೇಜು ಮತ್ತು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಈ ಕೂಡಲೇ ಮಂಜೂರು ಮಾಡಬೇಕು ಆಗ್ರಹಿಸಿದ್ದೆವು. ಹೋರಾಟವನ್ನು ಕೈ ಬಿಡದೆ ಮೆಡಿಕಲ್ ಕಾಲೇಜು ಮತ್ತು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಆಗಬೇಕೆಂಬ ಕೂಗನ್ನು ಜೀವಂತವಾಗಿರಿಸಿದ್ದರ ಪರಿಣಾಮ, ಹೋರಾಟದ ಮನವಿಯನ್ನಾಧರಿಸಿ ವೈದ್ಯಕೀಯ ಶಿಕ್ಷಣ ಸಚಿವರ ಸೂಚನೆಯಂತೆ, ವೈದ್ಯಕೀಯ ಶಿಕ್ಷಣ ಇಲಾಖೆ ಸರ್ಕಾರದ ಮುಖ್ಯಕಾರ್ಯದರ್ಶಿ ಅವರು ಸೂಕ್ತ ಕ್ರಮ ಕೈಗೊಳ್ಳುವಂತೆ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ನಿರ್ದೇಶಕರಿಗೆ ಸೂಚಿಸಿದ್ದು, ಅದರಂತೆ ಅವರು ಕಾರವಾರದ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಅರ್ಜಿದಾರರ ಮನವಿಯನ್ನು ಪರಿಶೀಲಿಸಲಾಗಿ, ಮೆಡಿಕಲ್ ಕಾಲೇಜು ಮತ್ತು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಬೇಕಾದ ಸೂಕ್ತ ಕ್ರಮವನ್ನು ಕೈಗೊಂಡು ಮತ್ತು ಕೈಗೊಂಡ ಕ್ರಮದ ಬಗ್ಗೆ ಮಾಹಿತಿಯನ್ನು ನೇರವಾಗಿ ಅರ್ಜಿದಾರರಿಗೆ ನೀಡಿ ಅದರ ಒಂದು ಪ್ರತಿಯನ್ನು 15 ದಿನಗಳೊಳಗೆ ನಿರ್ದೇಶನಾಲಯಕ್ಕೆ ಸಲ್ಲಿಸಲು ಸೂಚಿಸಿದೆ.
ಒಂದು ವರ್ಷದ ಹಿಂದೆ ನಡೆಸಿದ ಹೋರಾಟಕ್ಕೆ ಸರ್ಕಾರ ಈಗಲಾದರೂ ಗಮನ ಹರಿಸಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಸರ್ಕಾರದ ಹಂತದಲ್ಲಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ನಿರ್ವಣದ ಕುರಿತಾಗಿ ಬೆಳವಣಿಗೆ ಆಗುತ್ತಿರುವುದು ಒಳ್ಳೆಯದು, ಸಂಪೂರ್ಣ ಫಲ ಸಿಗುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ಅವರು ತಿಳಿಸಿದ್ದಾರೆ.