ನ.೧೫ ರಿಂದ ತೀವ್ರತರ ಅತಿಸಾರ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮ

ceo sabhe
Published on

ಮಡಿಕೇರಿ: ವಿವಿಧ ಇಲಾಖೆಗಳಿಗೆ ತಾರೀಖುವಾರು ನಿಗದಿಪಡಿಸಿರುವ ಚಟುವಟಿಕೆಗಳನ್ನು ಸಮರ್ಪಕವಾಗಿ ಕೈಗೊಂಡು ಅವುಗಳ ಮಾಹಿತಿಯನ್ನು ಆರೋಗ್ಯ ಇಲಾಖೆಗೆ ಸಲ್ಲಿಸುವಂತೆ ಕೊಡಗು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಸೂಚಿಸಿದರು.


ಆರೋಗ್ಯ ಇಲಾಖೆ ಮತ್ತು ವಿವಿಧ ಇಲಾಖೆಗಳ ಜತೆಗೆ ನಗರದ ಜಿ.ಪಂ.ಕಚೇರಿಯಲ್ಲಿ ಆಯೋಜಿಸಿದ್ದ ತೀವ್ರತರ ಅತಿಸಾರ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


ತೀವ್ರತರ ಅತಿಸಾರ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮ ನ.೧೫ ರಿಂದ ೨೮ ರವರೆಗೆ ನಡೆಯಲಿದ್ದು, ಈ ಸಂದರ್ಭದಲ್ಲಿ ನಿಯಮಾನುಸಾರ ಇಲಾಖೆಗಳು ನಿಗದಿಪಡಿಸಿರುವ ಚಟುವಟಿಕೆಗಳನ್ನು ಅದೇ ದಿನಾಂಕಗಳಂದು ಕೈಗೊಳ್ಳಬೇಕು. ತೀವ್ರತರ ಅತಿಸಾರ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮದ ಪೋಸ್ಟರ್‌ಗಳನ್ನು ಎಲ್ಲಾ ಅಂಗನವಾಡಿಗಳಲ್ಲಿಯೂ ಪ್ರಚುರಪಡಿಸಬೇಕು ಎಂದರು.


ಆರ್‌ಸಿಎಚ್ ಅಧಿಕಾರಿ ಡಾ.ಮಧುಸೂದನ್ ತೀವ್ರತರ ಅತಿಸಾರ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮದ ಉದ್ದೇಶದ ಬಗ್ಗೆ ಮಾಹಿತಿ ನೀಡಿ, ಕಾರ್ಯಕ್ರಮದ ಅಂಗವಾಗಿ ಒಆರ್‌ಎಸ್ ಮತ್ತು ಜಿಂಕ್ ಮಾತ್ರೆಗಳನ್ನು ಆಶಾ ಕಾರ್ಯಕರ್ತೆಯರು ಪ್ರತಿ ಗ್ರಾಮದ ೦-೫ ವರ್ಷದ ಒಳಗಿನ ಮಕ್ಕಳಿರುವ ಮನೆಗೆ ನೀಡಲಿದ್ದಾರೆ. ಅಲ್ಲದೆ ಕೈತೊಳೆಯುವ ಬಗ್ಗೆ ಪ್ರಾತ್ಯಕ್ಷಿಕೆಯನ್ನು ನೀಡಲಿದ್ದಾರೆ. ಶಾಲೆಗಳಲ್ಲಿ ಶಿಕ್ಷಣ ಇಲಾಖೆಯ ಅಗತ್ಯ ಸಹಕಾರ ನೀಡಬೇಕು. ಜಿಲ್ಲೆಯಲ್ಲಿ ಯಾವುದೇ ಮಗು ನಿರ್ಜಲೀಕರಣದಿಂದಾಗಿ ಸಾವಿಗೀಡಾಗಬಾರದು. ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮಗಳನ್ನು ಗ್ರಾಮ ಮಟ್ಟದಲ್ಲಿಯೇ ಕೈಗೊಳ್ಳಲಾಗುತ್ತಿದೆ ಎಂದು ವಿವರಿಸಿದರು.


ಜಿಲ್ಲೆಯಲ್ಲಿ ಮತ್ತು ಜಿಲ್ಲಾ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಾಕಷ್ಟು ಪ್ರಮಾಣದ ಒಆರ್‌ಎಸ್ ಮತ್ತು ಜಿಂಕ್ ಮಾತ್ರಗಳ ದಾಸ್ತಾನು ಇದೆ. ಜಿಲ್ಲೆಯಾದ್ಯಂತ ವಿವಿಧ ಹಂತಗಳಲ್ಲಿ ಮಾಹಿತಿ, ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಗಳು ಪ್ರಗತಿಯಲ್ಲಿದೆ ಎಂದು ತಿಳಿಸಿದರು.


ಬಳಿಕ ಮಾತನಾಡಿದ ಜಿ.ಪಂ.ಸಿಇಒ ವರ್ಣಿತ್ ನೇಗಿ, ಕೈತೊಳೆಯುವ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಯಶಸ್ವಿಯಾಗಿ ನಡೆಸಬೇಕು. ಬಾಲ್ಯದಿಂದಲೇ ಮಕ್ಕಳಿಗೆ ಸ್ವಚ್ಛತೆಯ ಕುರಿತಾಗಿ ಅರಿವು ನೀಡುವಂತಾಗಬೇಕು. ಈ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಮತ್ತು ಆರೋಗ್ಯ ಇಲಾಖೆ ಸಮನ್ವಯತೆಯಿಂದ ಕೆಲಸ ನಿರ್ವಹಿಸಬೇಕು. ಬಿಸಿಎಂ, ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿಯೂ ಸಹ ಕಡ್ಡಾಯವಾಗಿ ಕಾರ್ಯಕ್ರಮ ಆಚರಿಸಬೇಕು. ವಿಶ್ವ ಆರೋಗ್ಯ ಸಂಸ್ಥೆಯಿಂದ ಕೈತೊಳೆಯುವ ಕುರಿತಾಗಿ ಬಿಡುಗಡೆ ಮಾಡಿರುವ ವಿಡಿಯೋವನ್ನು ಹೆಚ್ಚಾಗಿ ಎಲ್ಲರಿಗೂ ತಲುಪಿಸಬೇಕು. ನಗರಸಭಾ ವ್ಯಾಪ್ತಿಯಲ್ಲಿ ಕಸವಿಲೇವಾರಿ ವಾಹನಗಳ ಮುಖಾಂತರ ಈ ಬಗ್ಗೆ ಹೆಚ್ಚಿನ ಪ್ರಚಾರ ನೀಡುವಂತೆ ನಗರಸಭೆಯ ಅಧಿಕಾರಿಗಳಿಗೆ ಸೂಚಿಸಿದರು.


ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಮಾತನಾಡಿ, ಅನಿಮಿಯ ಮುಕ್ತ ಭಾರತ ಅಭಿಯಾನದ ಅಂಗವಾಗಿ ನ.೧೫ ರಿಂದ ರಕ್ತಹೀನತೆ ಮುಕ್ತ ಪೌಷ್ಟಿಕ ಕರ್ನಾಟಕ ಕಾರ್ಯಕ್ರಮ ಆರಂಭವಾಗಲಿದೆ. ವಿವಿಧ ಹಂತಗಳಲ್ಲಿ ಕಾರ್ಯಕ್ರಮ ಜರುಗಲಿದೆ. ೦-೧೯ ವರ್ಷದೊಳಗಿನ ಮಕ್ಕಳಲ್ಲಿ ಈ ಸಮಸ್ಯೆ ಹೆಚ್ಚಾಗಿ ಕಂಡುಬರುವುದರಿಂದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಕಾರ್ಯಕ್ರಮ ಜರುಗಲಿದೆ ಎಂದು ತಿಳಿಸಿದರು.


ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net