

ಮಂಡ್ಯ: ಯುವ ಸಮೂಹ ಉತ್ತಮ ದಿಕ್ಕನ್ನು ಆಯ್ಕೆ ಮಾಡಿಕೊಂಡು ಗುರಿ ತಲುಪಿದರೆ ದೇಶ ಅಭಿವೃದ್ಧಿ ಪಥದಲ್ಲಿ ಸಾಗುತ್ತದೆ. ಆದರಿಂದ ಯುವ ಸಮೂಹ ದೇಶದ ಅಭಿವೃದ್ಧಿಯ ಸಂಕೇತ. ಅವರಿಗೆ ಉತ್ತಮ ಯೋಜನೆಗಳನ್ನು ಸರ್ಕಾರ ರೂಪಿಸಬೇಕು ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ಅಭಿಪ್ರಾಯಪಟ್ಟರು.
ನಗರದ ಮಂಡ್ಯ ವಿಶ್ವವಿದ್ಯಾಲಯದ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಯುವನಿಧಿ ಯೋಜನೆಯಡಿ ಡಿಪ್ಲೊಮಾ ಹಾಗೂ ಪದವಿ ಉತ್ತೀರ್ಣರಾಗಿ 180 ದಿನ ಉದ್ಯೋಗ ದೊರೆಯದಿದ್ದರೆ ಕ್ರಮವಾಗಿ 1,500 ಹಾಗೂ 3 ಸಾವಿರ ರೂಗಳನ್ನು ಎರಡು ವರ್ಷ ನೀಡಲಾಗುತ್ತಿದೆ. ಈ ಹಣವನ್ನು ವಿದ್ಯಾರ್ಥಿಗಳು ಬಳಸಿಕೊಂಡು ಮುಂದಿನ ಸ್ಪರ್ಧಾತ್ಮಕ ಪರೀಕ್ಷೆಗೆ ಪುಸ್ತಕ ಖರೀದಿಸುತ್ತಿದ್ದಾರೆ ಎಂದರು.
ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ಯುವಕರು ದೇಶದ ಸಂಪತ್ತು. ಅವರು ಪ್ರಶ್ನೆ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು. ಆಗ ಮಾತ್ರ ಯೋಜನೆಗಳ ಮೌಲ್ಯಮಾಪನ ಸಾಧ್ಯ. ಪಂಚ ಗ್ಯಾರಂಟಿಗಳು ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದರವರಿಗೆ ದನಿ ಹಾಗೂ ವರವಾಗಿದೆ ಎಂದರು.
ಜಿಪಂ ಸಿಇಒ ಕೆ.ಆರ್.ನಂದಿನಿ, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಚಿಕ್ಕವೀರಯ್ಯ, ಉಪಾಧ್ಯಕ್ಷ ಹನುಮಂತು, ಮಂಡ್ಯ ತಾಲೂಕು ಗ್ಯಾರಂಟಿ ಯೋಜನೆ ಅಧ್ಯಕ್ಷ ಎಚ್.ಕೆ.ರುದ್ರಪ್ಪ ಇತರರಿದ್ದರು.
ಎಲ್ಇಡಿ ವಾಹನಕ್ಕೆ ಚಾಲನೆ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿರುವ ಎಲ್.ಇ.ಡಿ ವಾಹನ ಹಾಗೂ ಬೀದಿ ನಾಟಕದ ಮೂಲಕ ಗ್ಯಾರಂಟಿ ಯೋಜನೆಗಳ ಪ್ರಚಾರ ಕಾರ್ಯಕ್ರಮಕ್ಕೆ ಡಾ.ಪುಷ್ಪಾ ಅಮರನಾಥ್ ವಿಶ್ವವಿದ್ಯಾನಿಲಯದ ಆವರಣದಲ್ಲಿ ಚಾಲನೆ ನೀಡಿದರು. ವಾರ್ತಾ ಮತ್ತು ಸಾರ್ವಜನಿಕ ಇಲಾಖೆ ಸಹಾಯಕ ನಿರ್ದೇಶಕಿ ಎಸ್.ಎಚ್.ನಿರ್ಮಲಾ ಇತರರಿದ್ದರು.