

ತುಮಕೂರು: ರಾಜಧಾನಿ ಬೆಂಗಳೂರು ನಗರಕ್ಕೆ ಪರ್ಯಾಯವಾಗಿ ಬೆಳೆಯುತ್ತಿರುವ ತುಮಕೂರು ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡಲು ಕೈಜೋಡಿಸಬೇಕು ಎಂದು ಸಿಎಂ,ಡಿಸಿಎಂಗೆ ಜಿಲ್ಲಾ ಉಸ್ತುವಾರಿ ಸಚಿವರು ಆದ ಗೃಹ ಸಚಿವ ಡಾ.ಜಿ.ಪರಮೇಶ್ವರ ಮನವಿ ಮಾಡಿದರು.
ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಪಂ ವತಿಯಿಂದ ಆಯೋಜಿಸಿದ್ದ ವಿವಿಧ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ವಿವಿಧ ಇಲಾಖೆಗಳ 1.46 ಲಕ್ಷ ಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಮಾತುಗಳನ್ನಾಡಿದ ಪರಂ, ತುಮಕೂರು ಜಿಲ್ಲೆಯು ಅಭಿವೃದ್ಧಿ ಕಡೆ ದಾಪುಗಾಲು ಇಡುತ್ತಿದೆ. ಏಷ್ಯಾದ ಅತಿದೊಡ್ಡ ಕೈಗಾರಿಕಾ ಘಟಕವನ್ನು ಸ್ಥಾಪಿಸಲು 20 ಸಾವಿರ ಎಕರೆ ಭೂಮಿ ಮೀಸಲಿಡಲಾಗಿದೆ. ಜಿಲ್ಲೆಗೆ ಮೆಟ್ರೋ ರೈಲು ವಿಸ್ತರಣೆಗೆ ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ. ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ ಸಿಎಂ ಅಡಿಗಲ್ಲು ಹಾಕಿದ್ದು ಜಿಲ್ಲೆಯಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಬೇಕು. ಇದರಿಂದ ರಾಜ್ಯದ 24 ಜಿಲ್ಲೆಗಳ ಜನರಿಗೆ ಅನುಕೂಲಾಗಲಿದೆ ಎಂದು ಒತ್ತಾಯಿಸಿದರು.