ಆಡಳಿತ ನಡೆಸುವ ಪ್ರೌವೃತ್ತಿ ಬೆಳೆಸಿಕೊಳ್ಳಲಿ: ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸಲಹೆ

International Women's Day Mandya
Published on

ಮಂಡ್ಯ: ಮಹಿಳೆಯರು ಆಡಳಿತ ನಡೆಸುವ ಪ್ರೌವೃತ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸಲಹೆ ನೀಡಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಹೆಣ್ಣು ಪೂಜನೀಯ ಸ್ಥಾನ ಅಲಂಕರಿಸಿದ್ದಾರೆ. ಮಹಿಳೆಯರ ಅಭಿವೃದ್ಧಿಯಿಂದ ಕುಟುಂಬ ಹಾಗೂ ದೇಶವೇ ಅಭಿವೃದ್ಧಿಗೊಳ್ಳುತ್ತದೆ ಎಂದು ಹೇಳಿದರು.

ವಿಧಾನಸಭೆ ಹಾಗೂ ಲೋಕಸಭೆಯಲ್ಲೂ ಮಹಿಳೆಯರಿಗೆ ಮೀಸಲಾತಿ ನೀಡುವ ದಿನ ದೂರವಿಲ್ಲ. ಆದ್ದರಿಂದ ಆಡಳಿತ ನಡೆಸಲು ಸಜ್ಜಾಗಬೇಕು. ಹೆಣ್ಣು ತಾಳ್ಮೆಯ ಪ್ರತಿರೂಪ ಎನ್ನುತ್ತಾರೆ. ಎದುರಾಗುವ ಸಮಸ್ಯೆಗಳನ್ನು ತಾಳ್ಮೆಯಿಂದ ಬಗೆಹರಿಸುತ್ತಾರೆ. ನಮ್ಮ ಸರ್ಕಾರ ನೀಡಿರುವ ಗ್ಯಾರಂಟಿ ಯೋಜನೆಗಳು ಮಹಿಳೆಯರಿಗೆ ಆರ್ಥಿಕವಾಗಿ ಶಕ್ತಿ ತುಂಬಿದೆ. ಸದಾ ಮನೆ ಹಾಗೂ ದೇಶವನ್ನು ಬೆಳಗುವ ದೀಪವಾಗಿ ಯಾವುದೇ ಕ್ಷೇತ್ರವಾದರೂ ಹಿಂಜರಿಯದೆ ಕಾರ್ಯ ನಿರ್ವಹಿಸಿ ಯಶಸ್ವಿಯಾಗಬೇಕು ಎಂದರು.

ಒಂದು ಕುಟುಂಬವನ್ನು ನಿರ್ವಹಣೆ ಮಾಡುವ ಸಾಮರ್ಥ್ಯ ಕೇವಲ ಹೆಣ್ಣು ಮಕ್ಕಳಿಂದ ಮಾತ್ರ ಸಾಧ್ಯ. ನರೇಗಾ ಯೋಜನೆಯಡಿ ಕಳೆದ ವರ್ಷ ಪ್ರಗತಿಯಲ್ಲಿ ಕರ್ನಾಟಕ 28ನೇ ಸ್ಥಾನದಲ್ಲಿದೆ. ಈ ಬಾರಿ ಮೊದಲೇ ಸ್ಥಾನವನ್ನು ನಾವು ಅಲಂಕರಿಸಬೇಕು. ಈಗಾಗಲೇ ಜಿಪಂ ಸಿಇಒಗೆ ಸೂಚನೆ ನೀಡಿದ್ದೇನೆ. ಆದ್ದರಿಂದ ನೀವು ಸಹಕರಿಸಿ ಎಂದು ವಿನಂತಿಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ರವಿಕುಮಾರ್ ಗಣಿಗ, ಮಹಿಳೆಯರು ದೇಶದ ಶಕ್ತಿ. ಅವರ ಬಲವರ್ಧನೆಗಾಗಿ ಗೃಹಲಕ್ಷಿ ಯೋಜನೆಯಡಿ ಮಾಸಿಕ 2 ಸಾವಿರ ರೂ ನೀಡಲಾಗುತ್ತಿದೆ. ಈ ಯೋಜನೆಯನ್ನು ಅನೇಕ ರಾಜ್ಯಗಳಲ್ಲಿ ನಕಲು ಮಾಡಲಾಗುತ್ತಿದೆ. ಗೃಹಲಕ್ಷಿ ಯೋಜನೆಯಡಿ ಎಷ್ಟೋ ಬಡ ಜನರ ಬದುಕು ಕಟ್ಟಿಕೊಂಡಿರುವ ನಿದರ್ಶನ ಕಾಣಬಹುದಾಗಿದೆ. ಮಹಿಳೆಯರ ಏಳಿಗೆಗೆ ಸರ್ಕಾರ ಸದಾ ಆದ್ಯತೆ ನೀಡುತ್ತದೆ ಎಂದು ಹೇಳಿದರು.

ಜಿಲ್ಲಾಧಿಕಾರಿ ಡಾ.ಕುಮಾರ, ಜಿಪಂ ಸಿಇಒ ಕೆ.ಆರ್.ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ರೂಪಶ್ರೀ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಜಮೂರ್ತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಓಂ ಪ್ರಕಾಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕಿ ಎಸ್.ಎಚ್.ನಿರ್ಮಲಾ ಇತರರಿದ್ದರು.

ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ವಿವಿಧ ಕ್ರೀಡಾಕೂಟದಲ್ಲಿ ವಿಜೇತರಾದ ಮಹಿಳೆಯರಿಗೆ ಬಹುಮಾನ ನೀಡಿ ಗೌರವಿಸಲಾಯಿತು. ಗ್ರಾಮ ಪಂಚಾಯಿತಿ ಒಕ್ಕೂಟದಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕಿಯರನ್ನು ಸನ್ಮಾನಿಸಲಾಯಿತು. ಅಂಬೇಡ್ಕರ್ ಭವನದ ಆವರಣದಲ್ಲಿ ವಿವಿಧ ಬಗೆಯ ಮಳಿಗೆ ತೆರೆದು ಸರ್ಕಾರದ ಯೋಜನೆ ಬಗ್ಗೆ ಮಾಹಿತಿ ನೀಡಲಾಯಿತು.

International Women's Day

ಯೋಜನೆಗಳ ಸದುಪಯೋಗ ಮಾಡಿಕೊಳ್ಳಿ

ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಪುರುಷರಿಗಿಂತಲೂ ದೊಡ್ಡ ಮಟ್ಟದಲ್ಲಿ ಸಾಧನೆ ಮಾಡುತ್ತಿರುವುದು ದೇಶದ ಹೆಮ್ಮೆಯ ಸಂಗತಿ. ಮಹಿಳೆಯರು ಮಹಿಳೆಯರಿಗಾಗಿ ಒತ್ತಾಸೆಯಾಗಿ ನಿಂತು ಸರ್ಕಾರದ ಯೋಜನೆಗಳ ಸದುಪಯೋಗಪಡೆದುಕೊಳ್ಳಬೇಕು ಎಂದು ಕೇಂದ್ರ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿವಿಮಾತು ಹೇಳಿದರು.

ಜಿಲ್ಲೆಯ ಹಲವು ಹಳ್ಳಿಗಳಲ್ಲಿ ಗ್ರಾಮೀಣ ಪದ್ಧತಿಯನ್ನು ಒಳಗೊಂಡಂತಹ ಹಾಗೂ ಆಧುನಿಕ ಸ್ಪರ್ಧೆಗಳನ್ನು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಹಿಳೆಯರಿಗೆ ಜಿಲ್ಲೆಯಲ್ಲಿ ಏರ್ಪಡಿಸಿರುವುದು ನಿಜಕ್ಕೂ ಶ್ಲಾಘನೀಯ. ಪ್ರತಿ ಹಳ್ಳಿಗಳಲ್ಲಿ ಮಹಿಳೆಯರು ವಾರಕ್ಕೊಮ್ಮೆ ಗುಂಪು ಸೇರಿ ಸರ್ಕಾರದ ಯೋಜನೆಗಳ ಬಗ್ಗೆ ಚರ್ಚೆಯನ್ನು ನಡೆಸಿ ಅದರ ಬಗ್ಗೆ ಅರಿವು ಮೂಡಿಸಿ. ಕೇಂದ್ರ ಹಾಗೂ ರಾಜ್ಯ ಸರ್ಕಾವು ಮಹಿಳೆಯರಿಗಾಗಿ ಜಾರಿಗೊಳಿಸಿರುವ ಯೋಜನೆಗಳನ್ನು ಶೇ.100ರಷ್ಟು ಪಡೆದುಕೊಳ್ಳಿ ಎಂದು ಸಲಹೆ ನೀಡಿದರು.

ಕೃಷಿ ಹಾಗೂ ತೋಟಗಾರಿಕೆ ಇಲಾಖೆ ವತಿಯಿಂದ ಕೃಷಿಕರಿಗೆ ನೀಡಿರುವ ಹಲವಾರು ಯೋಜನೆಗಳ ಸದ್ಭಳಕೆಯನ್ನು ಪಡೆದುಕೊಳ್ಳಿ. ಕೇಂದ್ರ ಸರ್ಕಾರದ ಜಲಜೀವನ್ ಮಿಷನ್, ಮುದ್ರಾ ಯೋಜನೆ, ನರೇಗಾ ಯೋಜನೆಯನ್ನು ಜಿಲ್ಲೆಯಲ್ಲಿ ಅಧಿಕಾರಿಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ. ಕೆಲವು ಅನಿವಾರ್ಯ ಹಾಗೂ ಕಷ್ಟದ ಸಂದರ್ಭದಲ್ಲಿ ಮಹಿಳೆಯರು ಸ್ತ್ರೀ ಶಕ್ತಿ ಸಂಘಗಳು ಮತ್ತು ಮೈಕ್ರೋ ಫೈನಾನ್ಸ್‌ಗಳಂತ ಸಂಸ್ಥೆಗಳಲ್ಲಿ ಸಾಲ ಪಡೆಯಬೇಕಾಗುತ್ತದೆ. ಅದರೆ ಸಾಲ ಪಡೆಯುವಾಗ ಮತ್ತು ವ್ಯವಹಾರಿಸುವಾಗ ಎಚ್ಚರಿಕೆಯಿಂದಿರಬೇಕು ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net