

ಮೈಸೂರು: ನಾಡಹಬ್ಬ ದಸರಾ ಉತ್ಸವಕ್ಕೆ ರಾಜ್ಯಪಾಲರು, ಮುಖ್ಯಮಂತ್ರಿ ಸೇರಿದಂತೆ ಹಲವು ಗಣ್ಯರನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ನೇತೃತ್ವದಲ್ಲಿ ಜಿಲ್ಲಾಡಳಿತ ಬುಧವಾರ ಆಹ್ವಾನಿಸಿತು.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ರಾಜಭವನದಲ್ಲಿ ಭೇಟಿಯಾಗಿ ಸನ್ಮಾನಿಸಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು. ಬಳಿಕ ವಿಧಾನಸೌಧದ ಮುಖ್ಯಮಂತ್ರಿ ಕಚೇರಿಗೆ ತೆರಳಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಫಲಪುಷ್ಪಗಳನ್ನು ನೀಡಿ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಯಿತು. ನಂತರ ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ, ಹೈಕೋರ್ಟ್ ಹಂಗಾಮಿ ಮುಖ್ಯನ್ಯಾಯಮೂರ್ತಿ ಅಲೋಕ್ ಆರಾಧೆ ಅವರಿಗೆ ದಸರೆಗೆ ಆಹ್ವಾನ ನೀಡಲಾಯಿತು. ಈ ಸಂದರ್ಭ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ದಸರಾ ಸ್ವಾಗತ ಉಪಸಮಿತಿ ಕಾರ್ಯಾಧ್ಯಕ್ಷೆ ಎಂ.ಜೆ. ರೂಪಾ, ಕಾರ್ಯದರ್ಶಿ ಕೆ. ಕುಬೇರಪ್ಪ ಹಾಗೂ ಇತರರು ಇದ್ದರು.