ಗ್ಯಾರಂಟಿಗೆ ಹಣ ಎಲ್ಲಿಂದ ತರುತ್ತೀರಿ, ಶ್ವೇತಪತ್ರ ಹೊರಡಿಸಲು ಮಾಜಿ ಸಚಿವ ಈಶ್ವರಪ್ಪ ಆಗ್ರಹ

Published on

ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿರುವ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಹಣವನ್ನು ಎಲ್ಲಿಂದ ಹೊಂದಿಸುತ್ತದೆ ಎಂಬುದರ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ವೇತಪತ್ರ ಹೊರಡಿಸಬೇಕು ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಒತ್ತಾಯಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿ ಅಧಿಕಾರಕ್ಕೆ ಬಂದಿದೆ. ಮೊದಲ ಕ್ಯಾಬಿನೆಟ್ನಲ್ಲಿಯೇ ಎಲ್ಲ ಗ್ಯಾರಂಟಿ ಜಾರಿಗೆ ತರುತ್ತೇವೆ ಎಂದಿದ್ದರು. ಒಂದೂವರೆ ತಿಂಗಳಾದರೂ ಘೋಷಣೆಗಳನ್ನು ಜಾರಿಗೆ ತರದೇ ರಾಜ್ಯದ ಜನರಿಗೆ ಮೋಸ ಮಾಡಿದ್ದಾರೆ. ಇದೀಗ ಮಾಧ್ಯಮಗಳ ಮುಂದೆ ಉಡಾಫೆ ಹೇಳಿಕೆ ಕೊಡುತ್ತ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ವಿದ್ಯುತ್ ದರ ಹೆಚ್ಚಳಕ್ಕೆ ಕೆಇಆರ್ಸಿ ಸ್ವಾಭಾವಿಕವಾಗಿ ತನ್ನ ಪ್ರಸ್ತಾವನೆ ಸಲ್ಲಿಸಿದೆ. ಅದನ್ನು ನಮ್ಮ ಸರ್ಕಾರ ತಿರಸ್ಕಾರ ಮಾಡಿತ್ತು. ಇದೀಗ ಕಾಂಗ್ರೆಸ್ ಅದಕ್ಕೆ ಒಪ್ಪಿಗೆ ಸೂಚಿಸಿದೆ. ಈ ದಿಸೆಯಲ್ಲಿ ವಿದ್ಯುತ್ ದರ ಹೆಚ್ಚಳ ಆಗಿದೆ. ಹೀಗಾಗಿ ಯಾರ ಅವಧಿಯಲ್ಲಿ ಕೆಇಆರ್ಸಿ ಪ್ರಸ್ತಾವನೆಗೆ ಒಪ್ಪಿಗೆ ನೀಡಲಾಗಿದೆ ಎಂಬುದನ್ನು ಸರ್ಕಾರ ಬಹಿರಂಗ ಪಡಿಸಲಿ, ಅದನ್ನು ಬಿಟ್ಟು ರಾಜಕೀಯ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು ಎಂದರು.

ಕಾಂಗ್ರೆಸ್ ಎಂದರೆ ಸುಳ್ಳಿನ ಪಕ್ಷ, ಸುಳ್ಳು ಹೇಳುವುದನ್ನು ನಿಲ್ಲಿಸದಿದ್ದರೆ ಘೋಷಣೆ ಮಾಡಿರುವ ಗ್ಯಾರಂಟಿಗಳ ಅನುಷ್ಠಾನವಾಗುವವರೆಗೆ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ವಿಧಾನಮಂಡಲದ ಒಳಗಡೆ ಹಾಗೂ ಹೊರಗಡೆ ಹೋರಾಟ ಮಾಡುತ್ತೇವೆ ಎಂದು ಈಶ್ವರಪ್ಪ ಹೇಳಿದರು.

ಚುನಾವಣೆಯಲ್ಲಿ ಬಿಜೆಪಿ ಸೋತ ನಂತರ ಕಾರ್ಯಕರ್ತರು ನಿರಾಶೆಯಲ್ಲಿದ್ದಾರೆ. ಹೀಗಾಗಿ ರಾಜ್ಯಾದ್ಯಂತ ಏಳು ತಂಡಗಳಲ್ಲಿ ಪ್ರವಾಸ ಕೈಗೊಂಡು ಕಾರ್ಯಕರ್ತರಲ್ಲಿ ಉತ್ಸಾಹ ತುಂಬುವ ಕೆಲಸ ಮಾಡಲಾಗುತ್ತಿದೆ. ಈ ಮೂಲಕ ಲೋಕಸಭೆ ಚುನಾವಣೆಗೆ ಬಿಜೆಪಿ ಸಕಲ ರೀತಿಯಲ್ಲಿ ಸಿದ್ಧತೆ ನಡೆಸುತ್ತಿದೆ ಎಂದು ಹೇಳಿದರು.

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಾತನಾಡಿ, ಕಾಂಗ್ರೆಸ್ ಸುಳ್ಳು ಹೇಳುವುದನ್ನು ನಿಲ್ಲಿಸಬೇಕು, ಕೇಂದ್ರ ನೀಡುತ್ತಿರುವ ಐದು ಕೆಜಿ ಅಕ್ಕಿ ಜತೆಗೆ 10 ಕೆಜಿ ಕೊಡುತ್ತದೆಯೋ ಅಥವಾ ಐದು ಕೆಜಿ ಕೊಡುವರೋ ಎಂಬುದನ್ನು ಸಿಎಂ ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net