

ಶಿವಮೊಗ್ಗ: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ಹೊರಗುಳಿದ ಅರ್ಹ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಯೋಜನೆ ಲಾಭವನ್ನು ತಲುಪಿಸುವ ಕಾರ್ಯವನ್ನು ಜವಾಬ್ದಾರಿಯಿಂದ ನಿರ್ವಹಿಸುವುದಾಗಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಸಿ.ಎಸ್.ಚಂದ್ರಭೂಪಾಲ ಹೇಳಿದರು.
ಶಕ್ತಿ ಯೋಜನೆಯಡಿ ಜಿಲ್ಲೆಯಲ್ಲಿ ಇದುವರೆಗೆ ಮಹಿಳೆಯರು 1.82 ಕೋಟಿ ಬಾರಿ ಉಚಿತವಾಗಿ ಪ್ರಯಾಣ ಮಾಡಿದ್ದಾರೆ. ಸರ್ಕಾರದಿಂದ ಶಿವಮೊಗ್ಗ ಡಿಪೋಗೆ 62.25 ಕೋಟಿ ರೂ. ಪಾವತಿಸಲಾಗಿದೆ. ಗೃಹಜ್ಯೋತಿ ಮೂಲಕ 4.63 ಲಕ್ಷ ಮನೆಗೆ ಉಚಿತ ವಿದ್ಯುತ್ ಒದಗಿಸಲಾಗುತ್ತಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಅನ್ನಭಾಗ್ಯ ಯೋಜನೆ ಪ್ರಯೋಜನ 3.56 ಲಕ್ಷ ಮಂದಿಗೆ ಸಿಕ್ಕಿದೆ. ಐದು ಕೆಜಿ ಅಕ್ಕಿ ಬದಲು ಇವರಿಗೆ 20.21 ಕೋಟಿ ರೂ. ಪಾವತಿ ಮಾಡಲಾಗಿದೆ. ಗೃಹಲಕ್ಷ್ಮಿ ಯೋಜನೆಗೆ 3.83 ಲಕ್ಷ ಮಹಿಳೆಯರು ನೋಂದಣಿ ಮಾಡಿಕೊಂಡಿದ್ದಾರೆ. ಇವರ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು ಒಟ್ಟು 76 ಕೋಟಿ ರೂ. ಜಮಾ ಮಾಡಲಾಗುತ್ತಿದೆ. ಯುವನಿಧಿ ಮೂಲಕ 5,139 ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 1.22 ಕೋಟಿ ರೂ. ನೀಡಲಾಗುತ್ತಿದೆ ಎಂದು ತಿಳಿಸಿದರು.
ಸವಲತ್ತನ್ನು ಅರ್ಹರಿಗೆ ತಲುಪಿಸುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಾಧಿಕಾರ ಹಾಗೂ ಏಳು ತಾಲೂಕುಗಳಿಗೆ ಉಸ್ತುವಾರಿ ಸಮಿತಿ ರಚನೆ ಮಾಡಲಾಗಿದೆ. ಆ ಮೂಲಕ ಸಾರ್ವಜನಿಕರಲ್ಲೂ ಅರಿವು ಮೂಡಿಸಲಾಗುತ್ತಿದೆ ಎಂದು ಹೇಳಿದರು.
ಪ್ರಾಧಿಕಾರದ ಶಿವಮೊಗ್ಗ ತಾಲೂಕು ಅಧ್ಯಕ್ಷ ಎಚ್.ಎಂ.ಮಧು, ಸೊರಬ ತಾಲೂಕು ಉಸ್ತುವಾರಿ ಉಪಾಧ್ಯಕ್ಷ ಇಕ್ಕೇರಿ ರಮೇಶ್, ತೀರ್ಥಹಳ್ಳಿ ಉಪಾಧ್ಯಕ್ಷ ಆರ್.ಶಿವಣ್ಣ, ಸದಸ್ಯರಾದ ಯು.ಶಿವಾನಂದ, ಅರ್ಚನಾ ನಿರಂಜನ, ಎಂ.ರಾಹುಲ್ ಸುದ್ದಿಗೋಷ್ಠಿಯಲ್ಲಿದ್ದರು.