

ಮಡಿಕೇರಿ: ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು, ಶಿಕ್ಷಕರು ಮನಸ್ಸು ಮಾಡಿದ್ದಲ್ಲಿ ವಿದ್ಯಾರ್ಥಿಗಳಲ್ಲಿ ಪರಿಣಾಮಕಾರಿ ಪರಿವರ್ತನೆಯನ್ನು ತರಲು ಸಾಧ್ಯವಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಹೇಳಿದರು.
ಕೊಡಗು ಜಿಲ್ಲಾ ಪದವಿ ಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಕೊಡಗು ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾಗಿದೆ. ಶಿಕ್ಷಕರು ಮನಸ್ಸು ಮಾಡಿದ್ದಲ್ಲಿ ವಿದ್ಯಾರ್ಥಿಗಳಲ್ಲಿ ಪರಿವರ್ತನೆ ತರಲು ಸಾಧ್ಯವಿದೆ. ಆ ಮೂಲಕ ಬಲಿಷ್ಠ ರಾಷ್ಟ್ರ ನಿರ್ಮಾಣವನ್ನು ಸಾಧಿಸಬಹುದಾಗಿದೆ. ಹಾಗೆಯೇ ವಿದ್ಯಾರ್ಥಿಗಳು ಸಮಸ್ಯೆಗಳನ್ನು ಸವಾಲಾಗಿ ಸ್ವೀಕರಿಸಿ ಮುಂದೆ ಬರಬೇಕೆಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪುಟ್ಟರಾಜು ಮಾತನಾಡಿ, ಕಳೆದ ಸಾಲಿನಲ್ಲಿ ಜಿಲ್ಲೆಯು ವಾರ್ಷಿಕ ಫಲಿತಾಂಶದಲ್ಲಿ ಮೂರನೇ ಸ್ಥಾನ ಪಡೆದಿದೆ. ಇದಕ್ಕಾಗಿ ಶ್ರಮಿಸಿದ ಎಲ್ಲಾ ಪ್ರಾಂಶುಪಾಲರು ಹಾಗೂ ಉಪನ್ಯಾಸಕರನ್ನು ಅಭಿನಂದನೆ. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಜಿಲ್ಲೆಯು ಪ್ರಥಮ ಅಥವಾ ದ್ವಿತೀಯ ಸ್ಥಾನಗಳಿಸಲು ಪ್ರಯತ್ನಿಸಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮದ ಅಂಗವಾಗಿ ಕಳೆದ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕಲಾ, ವಾಣಿಜ್ಯ, ವಿಜ್ಞಾನ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ, ದ್ವಿತೀಯ, ತೃತೀಯ ಸ್ಥಾನವನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಕ ಬಹುಮಾನಗಳನ್ನು ನೀಡಲಾಯಿತು. ಶೇ.೧೦೦ ರಷ್ಟು ಫಲಿತಾಂಶ ಪಡೆದ ೧೭ ಕಾಲೇಜಿನ ಪ್ರಾಂಶುಪಾಲರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ನಂತರ ಪ್ರಾಂಶುಪಾಲರ ಸಂಘದ ವತಿಯಿಂದ ಸೇವೆಯಿಂದ ನಿವೃತ್ತಿಗೊಂಡ ಪ್ರಾಂಶುಪಾಲ ಸತೀಶ್ ಬಾಬು, ಪುರುಷೋತ್ತಮ, ಜಗದೀಶ್ ಬಾಬು ಹಾಗೂ ಮಾಲತಿ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಪ್ರಾಂಶುಪಾಲರ ಸಂಘದ ಅಧ್ಯಕ್ಷ ಹಾಗೂ ಮೂರ್ನಾಡು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ದೇವಕ್ಕಿ, ಭಾಗಮಂಡಲ ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ದಿವಾಕರ್, ಪ್ರಾಂಶುಪಾಲರ ಸಂಘದ ರಾಜ್ಯ ಪ್ರತಿನಿಧಿ ಮಂದಪ್ಪ, ಪರೀಕ್ಷಾ ಸಂಚಾಲಕರಾದ ಹರೀಶ್ ತಮಾನ್ ಕರ್, ತಾಲೂಕು ಉಪಾಧ್ಯಕ್ಷರುಗಳಾದ ಸುಮಂತ್ ಕಿಲಿನ ಹಾಗೂ ಎನ್.ಕೆ.ಪ್ರಭು ಇತರರು ಉಪಸ್ಥಿತರಿದ್ದರು.