

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಹಾಗೂ ಶ್ರೀಲಂಕಾದ ದಕ್ಷಿಣ ಭಾಗದಿಂದ ತಮಿಳುನಾಡಿನವರೆಗೆ ಮೋಡ ಇರುವ ಪರಿಣಾಮ ರಾಜ್ಯದಲ್ಲಿ ಮುಂದಿನ ಎರಡು ದಿನ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ.
ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸೋಮವಾರ ವರ್ಷಧಾರೆಯಾಗಿದೆ. ಕೆಲವೆಡೆ ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣ ಕಾಣಿಸಿಕೊಂಡು, ತುಂತುರು ಮಳೆ ಸುರಿದಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮುಂದಿನ ಎರಡು ದಿನ ಗುಡುಗು ಸಹಿತ ಮಳೆಯಾದರೆ, ಬೆಂಗಳೂರು, ಬೆಂ,ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಹಾಸನ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಬೆಳಗಾವಿ, ಕಲಬುರಗಿ ಮತ್ತು ವಿಜಯಪುರದಲ್ಲಿ ತುಂತುರು ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಜ.10ರವರೆಗೆ ರಾಜ್ಯಾದ್ಯಂತ ಮೋಡ ಕವಿದ ವಾತಾವರಣ ಇರಲಿದೆ. ನಂತರ, ಒಣಹವೆ ಕಾಣಿಸಿಕೊಳ್ಳಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.