ರಾಯಣ್ಣ ಚೆನ್ನಮ್ಮ ಬ್ರಿಗೇಡ್ ಸ್ಥಾಪಿಸುವ ಸುಳಿವು ನೀಡಿದ ಈಶ್ವರಪ್ಪ

k.s.Eshwarappa
ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ
Published on

ಶಿವಮೊಗ್ಗ: ಒಂದು ದಶಕದ ಹಿಂದೆ ಕೆಜೆಪಿ-ಬಿಜೆಪಿ ಸಂಘರ್ಷದ ನಡುವೆ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸ್ಥಾಪಿಸುವ ಮೂಲಕ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಇದೀಗ ರಾಯಣ್ಣ ಚೆನ್ನಮ್ಮ ಬ್ರಿಗೇಡ್(ಆರ್‌ಸಿಬಿ) ಸ್ಥಾಪಿಸುವ ಬಗ್ಗೆ ಸುಳಿವು ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಅ.6ರಂದು 30ರಿಂದ 40 ಪ್ರಮುಖರ ನೇತೃತ್ವದಲ್ಲಿ ಪೂರ್ವಭಾವಿ ಸಭೆ ಕರೆದಿರುವುದಾಗಿ ಹೇಳಿದ್ದಾರೆ.

ಇತ್ತೀಚೆಗೆ ಬಾಗಲಕೋಟೆ ಜಿಲ್ಲೆ ಜಮಖಂಡಿಯಲ್ಲಿ ನಡೆದ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ನನಗೂ ಮತ್ತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೈಗೆ ಖಡ್ಗ ಕೊಟ್ಟು ಹಿಂದುಳಿದವರಿಗಾಗಿ ಬ್ರಿಗೇಡ್ ಸ್ಥಾಪಿಸುವಂತೆ ಸಲಹೆ ನೀಡಿದ್ದಾರೆ. ಆ ನಿಟ್ಟಿನಲ್ಲಿ ಅಂದು ಬೆಳಗ್ಗೆ 11ಕ್ಕೆ ಹುಬ್ಬಳ್ಳಿಯ ಸ್ವಾತಿ ಹೋಟೆಲ್‌ನಲ್ಲಿ ಪೂರ್ವಭಾವಿ ಸಭೆ ನಡೆಸಲಾಗುವುದು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಈಗಾಗಲೇ ರಾಜ್ಯಾದ್ಯಂತ ಬ್ರಿಗೇಡ್ ಸ್ಥಾಪನೆ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಜಮಖಂಡಿಯಲ್ಲಿ ನಡೆದಿದ್ದ ಸಭೆಯಲ್ಲಿ ಹಲವು ಮಠಾಧೀಶರು, ಸಮಾಜ ಸೇವಕರು, ಪ್ರಮುಖರು ಪಾಲ್ಗೊಂಡಿದ್ದರು. ಆ ಸಭೆ ಸಾನ್ನಿಧ್ಯ ವಹಿಸಿದ್ದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ನನ್ನಲ್ಲಿ ರಾಯಣ್ಣನ ರಕ್ತ, ಯತ್ನಾಳ್ ಅವರಲ್ಲಿ ಚೆನ್ನಮ್ಮನ ರಕ್ತ ಹರಿಯುತ್ತಿದ್ದು ಇಬ್ಬರ ನೇತೃತ್ವದಲ್ಲಿ ಬ್ರಿಗೇಡ್ ಕಟ್ಟಬೇಕೆಂದು ಸೂಚನೆ ಕೊಟ್ಟಿದ್ದಾರೆ ಎಂದರು.
ಪೂರ್ವಭಾವಿ ಸಭೆಯಲ್ಲಿ ಕೆಲ ಪ್ರಮುಖರು ಮಾತ್ರ ಪಾಲ್ಗೊಳ್ಳುವರು. ಹಿಂದುಳಿದವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸಭೆ ಆಯೋಜನೆ ಮಾಡಲಾಗಿದೆ. ಯಾವುದೇ ಸಾಧು ಸಂತರನ್ನು ಸಭೆಗೆ ಆಹ್ವಾನಿಸಿಲ್ಲ. ಈ ಸಭೆಯಲ್ಲಿ ಚರ್ಚೆ ನಡೆಸಿ ಮುಂದೆ ಸಾಧು ಸಂತರಿಂದ ಸಲಹೆ ಪಡೆಯಲಾಗುವುದು. ಈ ಬ್ರಿಗೇಡ್ ಕೇವಲ ರಾಜಕೀಯ ಮಾತ್ರವಲ್ಲದೆ ಸೀಮಿತವಾಗಿರುವುದಿಲ್ಲ. ಬದಲಾಗಿ ಧಾರ್ಮಿಕವಾಗಿಯೂ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾರ್ಯ ಮಾಡಲಿದೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net