

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಹಿಜಾಬ್ ನಿಷೇಧವನ್ನು ವಾಪಸ್ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುವ ಮೂಲಕ ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತರ ತುಷ್ಟೀಕರಣ ನೀತಿಯನ್ನು ಪರಮೋಚ್ಛ ಹಂತಕ್ಕೆ ಒಯ್ದಿದ್ದಾರೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಟೀಕಿಸಿದರು.
ಹುಬ್ಬಳ್ಳಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ನಿಷೇಧದ ವಿಚಾರಣೆಯು ನ್ಯಾಯಾಲಯದಲ್ಲಿದೆ. ಈ ಸಂದರ್ಭದಲ್ಲಿ ನಿಷೇಧವನ್ನು ವಾಪಸ್ ಪಡೆಯುತ್ತೇವೆ ಎಂದು ಸಿದ್ದರಾಮಯ್ಯನವರು ಹೇಳುವುದರ ಔಚಿತ್ಯ ಏನು ಎಂಬುದನ್ನು ನಾವು ಪ್ರಶ್ನಿಸಬೇಕಾಗುತ್ತದೆ. ವಿದ್ಯಾರ್ಥಿಗಳ ನಡುವೆ ಜಾತಿ, ಮತ, ಪಂಥ ಭೇದ ಇರುವುದಿಲ್ಲ. ಸಿದ್ದರಾಮಯ್ಯ ಅವರು ಕೆಲವರಿಗೆ ಹಿಜಾಬ್ ಧರಿಸಿ ಹೋಗಿ ಎಂದು ಹೇಳುವ ಮೂಲಕ ವಿದ್ಯಾರ್ಥಿಗಳ ನಡುವೆ ವಿಷಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ ಎಂದರು.
ರಾಜ್ಯದಲ್ಲಿ ಭೀಕರ ಬರಗಾಲವಿದೆ. ಬಹಳಷ್ಟು ಸಮಸ್ಯೆಗಳಿವೆ. ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಲು ಸರ್ಕಾರದ ಬಳಿ ಹಣವಿಲ್ಲ. ಪರೀಕ್ಷೆ ಬರೆಯಲು ಹೋಗುವ ಹಿಂದು ಮಹಿಳೆಯರಿಗೆ ಮಾಂಗಲ್ಯ, ಕಾಲುಂಗರ ತೆಗೆದಿಟ್ಟು ಹೋಗಿ ಎಂದು ಹೇಳಿದವರು ಇವರೇ. ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಿ ಹೋಗಿ ಎಂದು ಹೇಳುತ್ತಾರೆ. ಅಲ್ಪಸಂಖ್ಯಾತರಿಗೆ ಬಜೆಟ್ನಲ್ಲಿ 10 ಸಾವಿರ ಕೋಟಿ ರೂ. ನೀಡುತ್ತೇವೆ ಎಂದು ಹೇಳಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂಥ ಪ್ರಯತ್ನಗಳಿಗೆ ಕಾಂಗ್ರೆಸ್ ಕೈ ಹಾಕಿದೆ. ಇವು ಇನ್ನೊಂದು ರೀತಿಯಲ್ಲಿ ಮೈನಸ್ ಆಗುತ್ತದೆ ಎಂಬ ಕಲ್ಪನೆ ಸಿದ್ದರಾಮಯ್ಯರಿಗೆ ಇರಲಿ ಎಂದು ಹೇಳಿದರು.