ಡಿಸೆಂಬರಲ್ಲಿ ರಾಜ್ಯ ಮಟ್ಟದ ಹೊನಲು ಬೆಳಕಿನ ಕಬಡ್ಡಿ ಕ್ರೀಡಾಕೂಟ

Jagaluru, Dussehra Games, Kabaddi,
Published on

ಜಗಳೂರು: ಕ್ರೀಡೆಗೆ ಸ್ಫೂರ್ತಿ ನೀಡಲು ಡಿಸೆಂಬರ್ ತಿಂಗಳಲ್ಲಿ ರಾಜ್ಯ ಮಟ್ಟದ ಹೊನಲು ಬೆಳಕಿನ ಕಬಡ್ಡಿ ಕ್ರೀಡಾಕೂಟ ನಡೆಸಲಾಗುವುದು ಎಂದು ಶಾಸಕ ಎಸ್.ವಿ.ರಾಮಚಂದ್ರ ಭರವಸೆ ನೀಡಿದರು.

ಇಲ್ಲಿನ ಹೊರವಲಯದ ತಾಲೂಕು ಕ್ರೀಡಾಂಗಣದಲ್ಲಿ ಭಾನುವಾರ, ಏರ್ಪಡಿಸಿದ್ದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿ, ಕ್ರೀಡೆಯಿಂದ ಮನುಷ್ಯನ ಮಾನಸಿಕ ಮತ್ತು ದೈಹಿಕ ಆರೋಗ್ಯ ಉತ್ತಮವಾಗಿರುತ್ತದೆ. ಆದ್ದರಿಂದ ಯುವಕರು ಕ್ರೀಡೆಯನ್ನು ಮೈಗೂಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಳೆದ ಎರಡು ವರ್ಷಗಳಿಂದ ಕೋವಿಡ್ ಹಿನ್ನೆಲೆಯಲ್ಲಿ ಕ್ರೀಡೆಗೆ ಪ್ರೋತ್ಸಾಹ ಸಿಗದೇ ಕ್ರೀಡಾ ಕ್ಷೇತ್ರ ನಲುಗಿ ಹೋಗಿತ್ತು. ಈಗ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ಹೆಚ್ಚು ಕ್ರೀಡಾಕೂಟಗಳನ್ನು ಆಯೋಜಿಸಿ ಯುವಕರಲ್ಲಿ ಉತ್ಸಾಹ ತುಂಬಲಾಗುವುದು ಎಂದರು.

ಕ್ರೀಡಾಂಗಣ ಅಭಿವೃದ್ಧಿಪಡಿಸಿ: ಪಟ್ಟಣದಲ್ಲಿರುವ ತಾಲೂಕು ಕ್ರೀಡಾಂಗಣ ಅಭಿವೃದ್ಧಿಗೆ ಕ್ರೀಡಾ ಇಲಾಖೆ ಮುಂದಾಗಬೇಕಿದೆ. ವಿಶಾಲವಾದ ಜಾಗವಿದ್ದರೂ ಮೂಲ ಸೌಕರ್ಯಗಳ ಕೊರತೆಯಿಂದ ನೆನಗುದಿಗೆ ಬಿದ್ದಿದೆ. ಕ್ರೀಡೆಗಳನ್ನು ಆಯೋಜಿಸಲು ಸಾಧ್ಯವಾಗುತ್ತಿಲ್ಲ. ಕ್ರೀಡಾಂಗಣ ಅಭಿವೃದ್ಧಿಗೆ ತಕ್ಷಣವೇ ಕ್ರಮ ಕೈಗೊಳ್ಳಿ ಎಂದು ಶಾಸಕ ಎಸ್‌ವಿ.ರಾಮಚಂದ್ರ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದೇ ವೇಳೆ ಕಬಡ್ಡಿಯಲ್ಲಿ ಪ್ರಥಮ ಸ್ಥಾನ ಪಡೆದ ಮಾಲತಿ ಕಾಲೇಜು ಹಾಗೂ ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳಿಗೆ ಪ್ರಶಸ್ತಿ ನೀಡಿ ಶುಭ ಹಾರೈಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net