

ಮಡಿಕೇರಿ: ಕರ್ನಾಟಕ ಶಿಲ್ಪಕಲೆಯ ತವರೂರು ಆಗಿದ್ದು, ನಾಡಿನ ಶಿಲ್ಪಕಲೆಗೆ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಅವರ ಕೊಡುಗೆ ಅಪಾರ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ, ಜಿಲ್ಲಾ ವಿಶ್ವಕರ್ಮ ಒಕ್ಕೂಟ ಇವರ ಸಹಕಾರದಲ್ಲಿ ನಗರದ ಭಾರತೀಯ ವಿದ್ಯಾಭವನದಲ್ಲಿ ಆಯೋಜಿಸಿದ್ದ ’ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಅವರ ಸಂಸ್ಮರಣಾ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಭಾರತೀಯ ಇತಿಹಾಸದಲ್ಲಿ ಕಲೆಗೆ ತನ್ನದೇ ಆದ ಇತಿಹಾಸ ಇದೆ. ಆ ಹಿನ್ನೆಲೆಯಲ್ಲಿ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿರವರು ಬೇಲೂರು, ಹಳೆಬೀಡು, ಸೋಮನಾಥಪುರ ಮತ್ತಿತರ ಕಡೆಗಳಲ್ಲಿ ಕೆತ್ತಿರುವ ಕೆತ್ತನೆಗಳೆ ಸಾಕ್ಷಿ ಎಂದ ಅವರು, ಆಧುನಿಕ ಜಗತ್ತಿನಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಬೆಳೆದಂತೆ ಶಿಲ್ಪಕಲಾ ಕ್ಷೇತ್ರದಲ್ಲಿಯೂ ಸಾಕಷ್ಟು ಬದಲಾವಣೆ ಕಾಣಬಹುದು. ಆ ನಿಟ್ಟಿನಲ್ಲಿ ಅಮರಶಿಲ್ಪಿ ಜಕಣಾಚಾರಿರವರು ನಾಡಿಗೆ ನೀಡಿರುವ ಅಮರಶಿಲ್ಪದ ಕೊಡುಗೆಯನ್ನು ಉಳಿಸಿಕೊಂಡು ಹೋಗುವಂತಾಗಬೇಕು ಎಂದು ಕರೆ ನೀಡಿದರು.
ಜಿಲ್ಲಾ ವಿಶ್ವಕರ್ಮ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ನಾಗರಾಜು ಮಾತನಾಡಿ, ವಿಶ್ವಕರ್ಮ ಸಮಾಜದಲ್ಲಿ ಕಬ್ಬಿಣ, ಮರಗೆಲಸ, ಶಿಲ್ಪಕಲೆ, ಚಿನ್ನಬೆಳ್ಳಿ ಹೀಗೆ ಐದು ರೀತಿಯ ಕುಲಕಸುಬುಗಳನ್ನು ನಿರ್ವಹಿಸುತ್ತಿದ್ದರು. ಆದರೆ, ಕಾಲ ಬದಲಾದಂತೆ ವೃತ್ತಿ ಕೌಶಲವೂ ಬದಲಾಗುತ್ತಿದೆ ಎಂದ ಅವರು, ಭಾರತೀಯ ಇತಿಹಾಸ ಮತ್ತು ಸಂಸ್ಕೃತಿಯಲ್ಲಿ ಶಿಲ್ಪಕಲೆಗೆ ಹೆಚ್ಚಿನ ಮಹತ್ವವಿದೆ. ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಅವರು ಬೇಲೂರು ಹಳೆಬೀಡಿನಲ್ಲಿ ಕಲ್ಲಿನಿಂದ ಶಿಲ್ಪಕಲೆಯನ್ನು ಕೆತ್ತಿ ಇಡೀ ವಿಶ್ವವೇ ವೀಕ್ಷಿಸುವಂತೆ ಮಾಡಿದ್ದಾರೆ ಎಂದು ವಿವರಿಸಿದರು.
ಜಿಲ್ಲಾ ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷ ದೇವದಾಸ್ ಮಾತನಾಡಿ, ವಿಶ್ವಕರ್ಮ ಸಮಾಜದವರು ವಿವಿಧ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಕಲೆಗಳ ಪ್ರದರ್ಶನಕ್ಕೆ ಅವಕಾಶ ಮಾಡಬೇಕು. ಆ ನಿಟ್ಟಿನಲ್ಲಿ ಮಡಿಕೇರಿ ನಗರದಲ್ಲಿ ಕನಿಷ್ಟ ೧೦ ಸೆಂಟು ಜಾಗ ನೀಡಬೇಕು ಎಂದು ಮನವಿ ಮಾಡಿದರು.
ರಾಜ್ಯ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ನಾಮ ನಿರ್ದೇಶಕ ಎಚ್.ಎನ್.ಸುಬ್ರಮಣ್ಯ ಮಾತನಾಡಿ, ವಿಶ್ವಕರ್ಮ ಸಮಾಜದ ಜನರು ಆರ್ಥಿಕವಾಗಿ ಸಬಲರಾಗಲು ಇನ್ನೂ ಹೆಚ್ಚಿನ ನೆರವು ಒದಗಿಸುವಂತಾಗಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ವಿವಿಧ ವೃತ್ತಿ ಕೌಶಲ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ವಿಶ್ವಕರ್ಮ ಸಮಾಜದ ಮಂಜುನಾಥ್, ಅನಿಲ್ ಬಡಿಗೇರ್, ಸುನಿಲ್, ಪುಟ್ಟಣ್ಣ ಆಚಾರ್ಯ, ಮೋಹನ್ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಉಪ ವಿಭಾಗಾಧಿಕಾರಿ ಯತೀಶ್ ಉಲ್ಲಾಳ್, ಸಂಪಾಜೆ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಕುಮಾರ, ತಹಶೀಲ್ದಾರ್ ಪಿ.ಎಸ್.ಮಹೇಶ್, ತಾಲೂಕು ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷರಾದ ಜಗದೀಶ್ ಆಚಾರ್ಯ, ಬಿ.ಸಿ.ಶಂಕರಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ, ಮಣಜೂರು ಮಂಜುನಾಥ್ ಇತರರು ಇದ್ದರು.