

ಉಡುಪಿ: ಗ್ರಾಮೀಣ ಭಾಗದ ಜನರಿಗೆ ಕುಡಿಯುವ ನೀರನ್ನು ಒದಗಿಸುವ ಮನೆ ಮನೆಗೆ ನಳ ಸಂಪರ್ಕ ಕಲ್ಪಿಸುವ ಜಲ ಜೀವನ್ ಮಿಷನ್ ನ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಂಡು ನಿಗದಿತ ಕಾಲಾವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಪಂಚಾಯತ್ ಸಿಇಓ ಪ್ರಸನ್ನ ಎಚ್. ತಿಳಿಸಿದರು.
ಬುಧವಾರ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಸರಬರಾಜು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯ ಅದ್ಯಕ್ಷತೆ ವಹಿಸಿ ಮಾತನಾಡಿದರು.
ಯೋಜನೆಯಡಿ ಜಿಲ್ಲೆಯಲ್ಲಿ 2,47,190 ಮನೆಗಳಿಗೆ ನಳ ಸಂಪರ್ಕ ಕಲ್ಪಿಸುವ ಗುರಿ ಹೊಂದಲಾಗಿದ್ದು, ಈಗಾಗಲೇ 3 ಹಂತಗಳಲ್ಲಿ ಕಾಮಗಾರಿಗಳನ್ನು ಕೈಗೊಂಡು 1,90,974 ಮನೆಗಳಿಗೆ ನಲ್ಲಿ ನೀರಿನ ಸೌಲಭ್ಯವನ್ನು ಕಲ್ಪಿಸಲಾಗಿದೆ. ಬಾಕಿ ಉಳಿದ ಮನೆಗಳಿಗೆ ತ್ವರಿತವಾಗಿ ನೀರಿನ ಸಂಪರ್ಕವನ್ನು ಕಲ್ಪಿಸಬೇಕು ಎಂದರು.
3 ಹಂತಗಳಲ್ಲಿ ಕೈಗೊಂಡಿರುವ ಕಾಮಗಾರಿಗಳಲ್ಲಿ ಮೊದನೇ ಹಂತದಲ್ಲಿ 17 ಕಾಮಗಾರಿಗಳನ್ನು ಜಾಗದ ಸಮಸ್ಯೆ ಸೇರಿದಂತೆ ಮತ್ತಿತರೆ ಕಾರಣಗಳಿಂದ ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ. ಗ್ರಾಮ ಪಂಚಾಯಿತಿ ಅಭಿವೃಧ್ದಿ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಿ, ಶ್ರೀದಲ್ಲಿ ಪೂರ್ಣಗೊಳಿಸಬೇಕು. ಕಾಮಗಾರಿಗಳನ್ನು ಕೈಗೊಳ್ಳಲು ಕೆಲವು ಗುತ್ತಿಗೆದಾರರು ರ್ನಿಲಕ್ಷ್ಯ ವಹಿಸಿ ವಿನಾಕಾರಣ ವಿಳಂಬ ಮಾಡಿದರೆ ಅಂತಹವರ ಮೇಲೆ ನಿರ್ದಾಕ್ಷಿಣ್ಯವಾಗಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದರು.
ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಉದಯಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಕೃಷಿ ಇಲಾಖೆ ಉಪ ನಿರ್ದೇಶಕ ಚಂದ್ರಶೇಖರ್ ನಾಯಕ್,ಡಿಡಿಪಿಐ ಗಣಪತಿ ಕೆ. ಮತ್ತಿತರರು ಉಪಸ್ಥಿತರಿದ್ದರು.