

ಮಡಿಕೇರಿ: ಜಲಜೀವನ್ ಮಿಷನ್ ಯೋಜನೆಯಡಿ ಕೈಗೊಳ್ಳಲಾಗಿರುವ ಕಾಮಗಾರಿಯನ್ನು ಜೂನ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಎಂಜಿನಿಯರ್‌ಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಾಕೀತು ಮಾಡಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಲಜೀವನ್ ಮಿಷನ್ ಯೋಜನೆಯಡಿ ಪ್ರತೀ ಕುಟುಂಬಕ್ಕೂ ನಲ್ಲಿ ನೀರು ಕಲ್ಪಿಸುವುದು ಸರ್ಕಾರದ ಉದ್ದೇಶವಾಗಿದೆ. ಆ ನಿಟ್ಟಿನಲ್ಲಿ ಇದರ ಗಂಭೀರತೆ ಅರ್ಥ ಮಾಡಿಕೊಂಡು ಬಾಕಿ ಇರುವ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಲೋಕಸಭಾ ಸದಸ್ಯರು ನಿರ್ದೇಶನ ನೀಡಿದರು.
ಜಲಜೀವನ್ ಮಿಷನ್ ಯೋಜನೆಯು ಕೇಂದ್ರ ಸರ್ಕಾರದ ಮಹಾತ್ವಕಾಂಕ್ಷೆ ಯೋಜನೆಯಾಗಿದ್ದು, ಪ್ರತೀ ಕುಟುಂಬಕ್ಕೂ ಶುದ್ದ ಕುಡಿಯುವ ನೀರು ಒದಗಿಸುವಲ್ಲಿ ಆದ್ಯತೆ ನೀಡಬೇಕು. ಜಲಜೀವನ್ ಮಿಷನ್ ಯೋಜನೆ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಆಗಾಗ ಭೇಟಿ ನೀಡಿ ಸ್ಥಳ ಪರಿಶೀಲಿಸುವಂತಾಗಬೇಕು ಎಂದು ಸಂಸದರು ಸಲಹೆ ಮಾಡಿದರು.
ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ ಮಾತನಾಡಿ, ಚೆಂಬೆಬೆಳ್ಳೂರು ಸೇರಿದಂತೆ ವಿವಿಧ ಕಡೆಗಳಲ್ಲಿ ಜಲಜೀವನ್ ಮಿಷನ್ ಯೋಜನೆ ಪೂರ್ಣಗೊಳಿಸಿ, ಶುದ್ಧ ಕುಡಿಯುವ ನೀರು ಒದಗಿಸುವಂತಾಗಬೇಕು. ಜೆಜೆಎಂ ಬಗ್ಗೆ ಹಲವು ಬಾರಿ ಪ್ರಸ್ತಾಪಿಸಲಾಗಿದೆ. ಆದರೂ ಸಹ ಪರಿಪೂರ್ಣವಾಗಿ ಕಾಮಗಾರಿ ಆಗದಿರುವುದು ಬೇಸರ ತರಿಸಿದೆ ಎಂದರು.
ಇದಕ್ಕೆ ಧ್ವನಿಗೂಡಿಸಿದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ನಾಗೇಶ್ ಕುಂದಲ್ಪಾಡಿ, ಜಲಜೀವನ್ ಮಿಷನ್ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಬೇಕು ಎಂದು ಸಲಹೆ ಮಾಡಿದರು.
ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಮಾತನಾಡಿ, ಮೂರು ಹಂತದಲ್ಲಿ ಕೆಲಸ ನಡೆದಿದ್ದು, ಜೆಜೆಎಂ ಕುಡಿಯುವ ನೀರು ಪೂರೈಕೆಗೆ ಅನುದಾನ ಒದಗಿಸಲಾಗಿದೆ ಎಂದು ತಿಳಿಸಿದರು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಭಾಸ್ಕರ್ ಮಾಹಿತಿ ನೀಡಿ, ಜೆಜೆಎಂ ಯೋಜನೆ ಮೂರು ಹಂತದಲ್ಲಿ ಕೈಗೊಳ್ಳಲಾಗಿದೆ. ಮೊದಲ ಹಂತದಲ್ಲಿ ೧೮೮ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಸುಮಾರು ೧೩,೫೧೭ ಲಕ್ಷ ರೂ. ಅಂದಾಜು ಮೊತ್ತದಲ್ಲಿ ಕಾಮಗಾರಿ ಕೈಗೊಳ್ಳಲಾಗಿದೆ. ೧೮೫ ಕಾಮಗಾರಿಗಳು ಪೂರ್ಣಗೊಂಡಿದೆ. ಎರಡನೇ ಹಂತದಲ್ಲಿ ೧೨೯ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ೮೫ ಕಾಮಗಾರಿಗಳು ಪೂರ್ಣಗೊಂಡಿದೆ. ಸುಮಾರು ೯೦೯೨ ಲಕ್ಷ ರೂ. ಅಂದಾಜು ಮಾಡಲಾಗಿದೆ. ಮೂರನೇ ಹಂತದಲ್ಲಿ ೪೫೭ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ೩೪೮ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ೧೦೭ ಕಾಮಗಾರಿಗಳು ಪ್ರಗತಿಯಲ್ಲಿದೆ. ಒಟ್ಟಾರೆ ಸುಮಾರು ೩೫,೮೬೯ ಲಕ್ಷ ರೂ ಅಂದಾಜಿನಲ್ಲಿ ಒಟ್ಟು ೨೩,೨೧೮ ಲಕ್ಷ ರೂ ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ವಿವರಿಸಿದರು.
ಮಡಿಕೇರಿ ಪಾರಂಪರಿಕ ತ್ಯಾಜ್ಯ ನಿರ್ವಹಣೆ ಸಂಬಂಧಿಸಿದಂತೆ ಈಗಾಗಲೇ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಆದರೆ ಇದುವರೆಗೆ ಯಾವುದೇ ಕೆಲಸಗಳು ಆಗದಿರುವುದಕ್ಕೆ ಅತೃಪ್ತಿ ವ್ಯಕ್ತಪಡಿಸಿದ ಲೋಕಸಭಾ ಸದಸ್ಯರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಆದಷ್ಟು ತ್ವರಿತವಾಗಿ ಕಾಮಗಾರಿ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಗಂಗಾಧರ ನಾಯಕ್, ಐಟಿಡಿಪಿ ಇಲಾಖಾ ಅಧಿಕಾರಿ ಹೊನ್ನೇಗೌಡ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಯೋಗೇಶ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳಿದ್ದರು.
ಕಸ ಕರಗಿಸಲು ಕ್ರಮಕೈಗೊಳ್ಳಿ
ಸಮಿತಿ ಸದಸ್ಯರಾದ ನಾಗೇಶ್ ಕುಂದಲ್ಪಾಡಿ ಮಾತನಾಡಿ, ಇಲಾಖೆ ಅಧಿಕಾರಿಗಳಿಗೆ ಇಚ್ಛಾಶಕ್ತಿ ಮತ್ತು ಬದ್ಧತೆ ಇದ್ದಲ್ಲಿ ಅಭಿವೃದ್ಧಿ ಕೆಲಸಗಳು ಆಗುತ್ತವೆ. ಆದರೆ ಗುಡ್ಡವಾಗಿ ಬೆಳೆಯುತ್ತಿರುವ ಕಸ ಕರಗಿಸಲು ಅನುಮತಿ ಪಡೆಯಲು ಹಿಂದೇಟು ಹಾಕಿದರೆ ಹೇಗೆ ಎಂದು ತೀವ್ರ ಅಸಮಾದಾನ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಪಾರಂಪರಿಕ ಕಸ ಕರಗಿಸುವ ಸಂಬಂಧ ೫ ಬಾರಿ ಟೆಂಡರ್ ಆಗಿದ್ದು, ಯಾರೂ ಸಹ ಮುಂದೆ ಬಂದಿರಲಿಲ್ಲ. ಆ ನಿಟ್ಟಿನಲ್ಲಿ ವಿರಾಜಪೇಟೆ ಮತ್ತು ಕುಶಾಲನಗರ ಸೇರಿಸಿಕೊಂಡು ಕಸ ವಿಲೇವಾರಿಗೆ ಪ್ರಯತ್ನಿಸಲಾಗಿದೆ ಎಂದರು.
ಮೊಬೈಲ್ ನೆಟ್ವರ್ಕ್ ಸರಿಪಡಿಸಿ
ಭಾರತ ಸಂಚಾರ ನಿಗಮ ನಿಯಮಿತದಲ್ಲಿ ಬೇಡಿಕೆ ಇರುವ ಕಡೆ ಟವರ್‌ಗಳ ನಿರ್ಮಾಣ, ನಿರಂತರ ಅಂತರ್ಜಾಲ ಸಂಪರ್ಕ ಕಲ್ಪಿಸುವುದು ಸೇರಿದಂತೆ ಅಗತ್ಯ ಕ್ರಮವಹಿಸುವಂತೆ ಬಿಎಸ್‌ಎನ್‌ಎಲ್ ಎಂಜಿನಿಯರ್‌ಗಳಿಗೆ ಯದುವೀರ್ ಸೂಚಿಸಿದರು.
ಟವರ್ ನಿರ್ಮಾಣಕ್ಕೆ ಜಾಗ ಗುರುತಿಸುವುದು ಜೊತೆಗೆ ಅನುಮತಿ ಪಡೆಯುವುದು ಹೀಗೆ ಹಲವು ಕೆಲಸಗಳನ್ನು ಬಿಎಸ್‌ಎನ್‌ಎಲ್ ಅಧಿಕಾರಿಗಳು ನಿರ್ವಹಿಸಬೇಕು. ಕಚೇರಿಯಲ್ಲಿ ಸಾರ್ವಜನಿಕರಿಗೆ ಸರಿಯಾದ ಮಾಹಿತಿ ನೀಡಬೇಕು ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಮಿತಿ ಸದಸ್ಯರಾದ ರಾಕೇಶ್, ಪೊನ್ನಂಪೇಟೆ ತಾಲ್ಲೂಕಿನ ಬಿರುನಾಣಿ, ಟಿ.ಶೆಟ್ಟಿಗೇರಿ, ಬಿ.ಶೆಟ್ಟಿಗೇರಿ, ಹುದಿಕೇರಿ, ಬೇಳೂರು, ಕೂತಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಇಂದೂ ಸಹ ಮೊಬೈಲ್ ನೆಟ್‌ವರ್ಕ್ ಇಲ್ಲದೆ ಪರಿತಪಿಸುವಂತಾಗಿದೆ. ಈ ಬಗ್ಗೆ ಗಮನಹರಿಸಬೇಕು ಎಂದು ಕೋರಿದರು.
ಗೊಬ್ಬರ ದಾಸ್ತಾನಿಗೆ ಸೂಚನೆ
ಮುಂಗಾರು ಸಂದರ್ಭದಲ್ಲಿ ಬಿತ್ತನೆ ಬೀಜ ಹಾಗೂ ರಸ ಗೊಬ್ಬರಕ್ಕೆ ತೊಂದರೆ ಉಂಟಾಗದಂತೆ ದಾಸ್ತಾನು ಮಾಡಿಕೊಳ್ಳಬೇಕು. ಭತ್ತ ಹಾಗೂ ಮುಸುಕಿನ ಜೋಳ ಬಿತ್ತನೆ ಬೀಜ ಕೊರತೆಯಾಗದಂತೆ ಗಮನಹರಿಸಬೇಕು ಎಂದು ಸಂಸದರು ನಿರ್ದೇಶನ ನೀಡಿದರು.
ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಚಂದ್ರಶೇಖರ್ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಂಗಾಮಿಗೆ ಯೂರಿಯಾ, ಡಿಐಪಿ, ಎಂಒಪಿ, ಕಾಂಪ್ಲೆಕ್ಸ್, ಎಸ್‌ಎಸ್‌ಪಿ ಸೇರಿದಂತೆ ರಸಗೊಬ್ಬರ ಬೇಡಿಕೆಗೆ ತಕ್ಕಂತೆ ಅಗತ್ಯ ದಾಸ್ತಾನು ಮಾಡಿಕೊಳ್ಳಲಾಗಿದೆ. ಭತ್ತ ಹಾಗೂ ಮುಸುಕಿನ ಜೋಳ ಬಿತ್ತನೆ ಬೀಜ ಸಂಬಂಧಿಸಿದಂತೆ ೧೭೦೦ ಕ್ವಿಂಟಾಲ್ ಬಿತ್ತನೆ ಬೀಜವನ್ನು ಪೂರೈಸಲು ಕ್ರಮವಹಿಸಲಾಗಿದೆ ಎಂದರು.
ಹಕ್ಕು ಪತ್ರ ವಿತರಿಸಲು ಮನವಿ
ಸಮಿತಿ ಸದಸ್ಯರಾದ ಆರ್.ಕೆ.ಚಂದ್ರು ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಅನಾದಿಕಾಲದಿಂದಲೂ ಆದಿವಾಸಿಗಳು ಬದುಕು ನಡೆಸುತ್ತಿದ್ದು, ಸಾಕಷ್ಟು ಕುಟುಂಬಗಳಿಗೆ ಅರಣ್ಯ ಹಕ್ಕುಪತ್ರ ವಿತರಿಸಲಾಗಿದೆ. ಹಕ್ಕು ಪತ್ರ ವಿತರಿಸಿರುವವರಿಗೆ ಆರ್‌ಟಿಸಿ ವಿತರಿಸುವಂತಾಗಬೇಕು. ಜೊತೆಗೆ ಹಕ್ಕುಪತ್ರ ವಿತರಿಸಲು ಇನ್ನೂ ಸಾಕಷ್ಟು ಕುಟುಂಬಗಳಿಗೆ ಬಾಕಿ ಇದೆ ಎಂದು ಗಮನ ಸೆಳೆದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಅರಣ್ಯ ಹಕ್ಕು ಕಾಯ್ದೆಯಡಿ ಅರ್ಹರಿಗೆ ಹಕ್ಕುಪತ್ರ ವಿತರಿಸಲಾಗಿದೆ. ಹಕ್ಕುಪತ್ರ ಪಡೆದಿರುವವರು ಕೃಷಿ ಚಟುವಟಿಕೆ ಮಾಡಬಹುದಾಗಿದೆ ಎಂದು ಹೇಳಿದರು.
ಕಾಡಾನೆ ಹಾವಳಿ ನಿಯಂತ್ರಣ ಮನವಿಕಾಡಾನೆ ಹಾವಳಿ ನಿಯಂತ್ರಣ ಆಗಬೇಕು ಎಂದು ಇದೇ ಸಂದರ್ಭದಲ್ಲಿ ಕೇಳಿ ಬಂದಿತು. ಈ ಬಗ್ಗೆ ಸಂಸದರು ವನ್ಯಜೀವಿ ಹಾಗೂ ಮಾನವ ಸಂಘರ್ಷ ತಪ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸಚಿವರ ಜೊತೆ ಚರ್ಚಿಸಲಾಗಿದೆ. ಕಾಡಾನೆ ಹಾವಳಿ ತಪ್ಪಿಸುವ ನಿಟ್ಟಿನಲ್ಲಿ ಕಂದಕಗಳ ನಿರ್ಮಾಣ, ರೈಲ್ವೆ ಬ್ಯಾರಿಕೇಡ್‌ಗಳ ಅಳವಡಿಕೆ, ಮತ್ತಿತರ ಕಾರ್ಯ ಮಾಡಲಾಗಿದೆ ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಾಷಾ ವಿವರಿಸಿದರು.