

ಜಮಖಂಡಿ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು ನಗರದ ವಿವಿಧ ಪೆಟ್ರೋಲ್ ಬಂಕ್‌ಗಳ ಎದುರು ಶನಿವಾರ ಪ್ರತಿಭಟನೆ ನಡೆಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಧರ್ಮಾನ ನ್ಯಾಮಗೌಡ ಮಾತನಾಡಿ, ಕರೊನಾದಂಥ ಸಂದಿಗ್ಧ ಪರಿಸ್ಥಿತಿಯಲ್ಲಿ ಸರ್ಕಾರ ಜನಸಾಮಾನ್ಯರ ಕಷ್ಟಕ್ಕೆ ಸ್ಪಂದಿಸದೆ ಅಗತ್ಯ ವಸ್ತುಗಳ ಬೆಲೆ ಏರಿಸುವ ಮೂಲಕ ತೀವ್ರ ಸಂಕಷ್ಟಕ್ಕೆ ಸಿಲುಕಿಸಿದೆ ಎಂದು ಆರೋಪಿಸಿದರು.
ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರವಿ ಯಡಹಳ್ಳಿ ಮಾತನಾಡಿ, ಪೆಟ್ರೋಲ್, ಡೀಸೆಲ್ ಬೆಲೆ ಮೇಲೆ ಹಿಡಿತ ಇಲ್ಲದ ಸರ್ಕಾರ, ಜನಸಾಮಾನ್ಯರಿಗೆ ಹೊರೆಯಾಗುವಂತೆ ಅಡುಗೆ ಅನಿಲ, ಅಡುಗೆ ಎಣ್ಣೆ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಸಿ ಜನಸಾಮಾನ್ಯರನ್ನು ತುಳಿಯುತ್ತಿದೆ ಎಂದರು.
ನಗರಸಭೆ ಅಧ್ಯಕ್ಷ ಸಿದ್ದು ಮಿಶಿ, ನಗರಸಭೆ ಸದಸ್ಯ ರಾಜು ಪಿಸಾಳ, ಪ್ರಕಾಶ ಕಣಬೂರ, ಉದಯ ಕಡಕೋಳ, ಮೀರಾ ಒಂಟಮೂರಿ, ರೋಹಿತ ಸೂರ್ಯವಂಶಿ, ಅಕ್ಬರ ಜಮಾದಾರ, ಕುಮಾರ ಆಲಗೂರ, ಬಸವರಾಜ ಹರಕಂಗಿ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.