

ಬೆಳಗಾವಿ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜ. 17ರಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ನೇತೃತ್ವದಲ್ಲಿ ಬಿಜೆಪಿಯ ‘ಜನಸೇವಕ’ ಸಮಾರಂಭ ಜರುಗಲಿದೆ. ಕಾರ್ಯಕ್ರಮಕ್ಕೆ ಎಲ್ಲ ರೀತಿಯಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ.
ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬುಧವಾರ ಸ್ಥಳ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದ ಅವರು, ನಾನು ಜಿಲ್ಲಾ ಉಸ್ತುವಾರಿ ಸಚಿವನಾದ ಬಳಿಕ ಮೊದಲ ಬಾರಿಗೆ ಬೆಳಗಾವಿಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಆಗಮಿಸುತ್ತಿದ್ದಾರೆ. ಹೀಗಾಗಿ ನನ್ನ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ ಎಂದರು.
ಬೃಹತ್ ಸಮಾರಂಭ: ಜಿಲ್ಲೆಯ ವಿವಿಧ ಭಾಗಗಳಿಂದ 4 ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಸಚಿವ ಸಂಪುಟದ ಎಲ್ಲ ಸಚಿವರು, ಈ ಭಾಗದ ಶಾಸಕರು, ಸಂಸದರು ಹಾಗೂ ಕೇಂದ್ರದ ಅನೇಕ ಸಚಿವರು ಆಗಮಿಸಲಿದ್ದಾರೆ. ಮೊದಲ ಬಾರಿಗೆ ಬೆಳಗಾವಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಪಕ್ಷದ ಸಮಾರಂಭ ಜರುಗಲಿದ್ದು, ಯಶಸ್ವಿಯಾಗಿ ಪೂರ್ಣಗೊಳಿಸಲಾಗುವುದು ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಎಲ್ಲ ಶಾಸಕರಿಗೂ ಅವಕಾಶ: ಬೆಳಗಾವಿ ಲೋಕಸಭಾ ಮತ್ತು ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಬಳಿಕ ಏಪ್ರಿಲ್‌ನಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ಆಗಬಹುದು. ಬಳಿಕ ಮೇ ಅಥವಾ ಜೂನ್‌ನಲ್ಲಿ ಸಚಿವ ಸಂಪುಟ ಪುನಾರಚನೆಯಾಗಲಿದೆ. ಆ ವೇಳೆ ಸರ್ಕಾರ ರಚನೆಗೆ ಕಾರಣರಾದ ಎಲ್ಲ ಶಾಸಕರಿಗೂ ಒಂದೊಂದು ಅವಕಾಶ ಸಿಗಲಿದೆ ಎಂದು ರಮೇಶ ತಿಳಿಸಿದರು.
ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ, ಶಾಸಕ ಮಹೇಶ ಕುಮಠಳ್ಳಿ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಸದಸ್ಯರು, ಪಕ್ಷದ ಕಾರ್ಯಕರ್ತರು ಇದ್ದರು.
ನನ್ನ ರಾಜಕೀಯ ಜೀವನದಲ್ಲಿ ಹೊಸ ಅನುಭವ: ತಳ ಮಟ್ಟದಿಂದ ಸಂಘಟನೆ ಮಾಡುವುದು, ಸಭೆ-ಸಮಾರಂಭ ನಡೆಸಲು ವಿಶೇಷ ಜವಾಬ್ದಾರಿ ವಹಿಸಿಕೊಳ್ಳುವ ವ್ಯವಸ್ಥೆ ಬಿಜೆಪಿಯಲ್ಲಿ ಬಿಟ್ಟರೆ ಬೇರೆ ಯಾವುದೇ ಪಕ್ಷದಲ್ಲಿ ಇಲ್ಲ. ಕಾಂಗ್ರೆಸ್‌ನಲ್ಲಿ ಯಾವುದೇ ಸಭೆ, ಸಮಾರಂಭ ಆಯೋಜಿಸಬೇಕಾದರೆ ಮುಖಂಡರೇ ಎಲ್ಲ ಜವಾಬ್ದಾರಿ ತೆಗೆದುಕೊಂಡು ಕೆಲಸ ಮಾಡಬೇಕು. ಆದರೆ, ಬಿಜೆಪಿಯಲ್ಲಿ ಎಲ್ಲರೂ ಒಂದೊಂದು ಜವಾಬ್ದಾರಿ ತೆಗೆದುಕೊಳ್ಳುತ್ತಿರುವುದನ್ನು ಕಂಡು ನನ್ನ ರಾಜಕೀಯ ಜೀವನದಲ್ಲಿ ಇದೊಂದು ಹೊಸ ಅನುಭವಾಗಿದೆ. ಉತ್ತಮ ವ್ಯವಸ್ಥೆ ಇಲ್ಲಿರುವುದರಿಂದ ಪಕ್ಷ ಸಂಘಟನೆ, ಸಮಾರಂಭ ಜರುಗಿಸಲು ಮತ್ತಷ್ಟು ಶಕ್ತಿ ಬರುತ್ತದೆ ಎಂದು ಸಚಿವ ರಮೇಶ ಹೇಳಿದರು.