ಡಿ.9, 10ರಂದು ಜಾನಪದ ಸಮ್ಮೇಳನ: ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಮಾಹಿತಿ

28_11_Mdy_01(Dc Meeting)
Published on

ಮಂಡ್ಯ: ಜಿಲ್ಲಾಡಳಿತ ಹಾಗೂ ಕರ್ನಾಟಕ ಜಾನಪದ ಪರಿಷತ್ ವತಿಯಿಂದ ಡಿ.9 ಮತ್ತು 10ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಅಖಿಲ ಕರ್ನಾಟಕ ಜಾನಪದ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಚ್.ಎನ್ ಗೋಪಾಲಕೃಷ್ಣ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ವಾತನಾಡಿ, ರಾಜ್ಯದ ಎಲ್ಲ ಜಿಲ್ಲೆಗಳಿಂದ ಜಾನಪದ ಕಲಾತಂಡಗಳು ಸಮ್ಮೇಳನಕ್ಕೆ ಆಗಮಿಸಲಿವೆ. ಇದಕ್ಕೆ ಬೇಕಿರುವ ವ್ಯವಸ್ಥೆಗಳನ್ನು ವಾಡಿಕೊಳ್ಳಲು ಸಮಿತಿ ರಚಿಸಲಾಗಿದೆ ಎಂದರು.

ಸ್ವಾಗತ ಸಮಿತಿಯಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಡಾ.ನಿರ್ಮಲಾನಂದ ಸ್ವಾಮೀಜಿ ಮಹಾ ಪೋಷಕರಾಗಿ, ಜಿಲ್ಲಾ ಉಸ್ತುವಾರಿ ಸಚಿವರು, ಯುವ ಸಬಲೀಕರಣ ಸಚಿವರು, ಸಂಸದರು, ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳ ಶಾಸಕರು, ವಿಧಾನ ಪರಿಷತ್ ಸದಸ್ಯರ ವಾರ್ಗದರ್ಶನದಲ್ಲಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲಾಗುವುದು ಎಂದರು.

ಸಮ್ಮೇಳನ ಉತ್ತಮ ರೀತಿಯಲ್ಲಿ ನಡೆಸಲು ವಿವಿಧ ಇಲಾಖೆ ಹಾಗೂ ಸರ್ಕಾರೇತರ ಸಂಸ್ಥೆಗಳಿಂದ ಸಿಗುವ ಸೌಲಭ್ಯಗಳು, ಸಂಪನ್ಮೂಲ ಕ್ರೋಡೀಕರಣ, ಖರ್ಚು-ವೆಚ್ಚಗಳು, ವಿವಿಧ ಉಪಸಮಿತಿಗಳ ರಚನೆ, ರೀಜನಲ್ ಕಲ್ಚರಲ್ ಸೆಂಟರ್‌ಗೆ ಬೇರೆ ರಾಜ್ಯಗಳಿಂದ ಕಲಾ ತಂಡಗಳ ಪ್ರದರ್ಶನ ನೀಡಲು ಮನವಿ ಕಳುಹಿಸಿಕೊಡುವ ಬಗ್ಗೆ ಕ್ರಮ ವಹಿಸಬೇಕು. ಮಂಡ್ಯ ಹೊರತುಪಡಿಸಿ ಬೇರೆ ಜಿಲ್ಲೆಗಳಿಂದ 300 ರಿಂದ 400 ಕಲಾವಿದರು ಭಾಗವಹಿಸಲಿದ್ದಾರೆ. ಇವರಿಗೆ ವಸತಿ ವ್ಯವಸ್ಥೆಯಾಗಬೇಕು. ಸಮ್ಮೇಳನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ 1500 ರಿಂದ 2000 ಜನರು ಭಾಗವಹಿಸಲಿದ್ದಾರೆ. ಅವರಿಗೆ ಊಟ, ಉಪಾಹಾರದ ವ್ಯವಸ್ಥೆಯಾಗಬೇಕಿದೆ ಎಂದು ವಿವರಿಸಿದರು.

ಎರಡು ದಿನಗಳ ನಡೆಯುವ ಕಾರ್ಯಕ್ರಮದಲ್ಲಿ ಮೆರವಣಿಗೆ, ಉದ್ಘಾಟನೆ, ವಿವಿಧ ಗಾಯನ ಮತ್ತು ನತ್ಯಗಳ ಬಗ್ಗೆ ವ್ಯವಸ್ಥಿತವಾಗಿ ವೇಳಾಪಟ್ಟಿಯಾಗಬೇಕು. ರಾಮನಗರದ ಜಾನಪದ ಲೋಕದ ಸಂಗ್ರಹಾಲಯದಲ್ಲಿರುವ ವಿವಿಧ ಗ್ರಾಮೀಣ ಬಳಕೆಯ ವಸ್ತುಗಳನ್ನು ಸಮ್ಮೇಳನ ನಡೆಯುವ 2 ದಿನಗಳ ಕಾಲ ಮಂಡ್ಯ ಜಿಲ್ಲೆಯಲ್ಲಿ ಪ್ರದರ್ಶನಕ್ಕೆ ಇಡಲು ಚಿಂತಿಸಲಾಗುತ್ತಿದೆ ಎಂದು ಹೇಳಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಜಿಪಂ ಉಪಕಾರ್ಯದರ್ಶಿ ಸಂಜೀವಪ್ಪ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಟಿ.ಎನ್.ಧನಂಜಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ನಾಗರಾಜು, ಡಿಡಿಪಿಐ ಎಸ್.ಟಿ.ಜವರೇಗೌಡ, ನಗರಸಭೆ ಆಯುಕ್ತ ಮಂಜುನಾಥ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉದಯ್ ಕುವಾರ್, ಜಿಲ್ಲಾ ಸವಾಜ ಕಲ್ಯಾಣಾಧಿಕಾರಿ ಬಿ.ರಂಗೇಗೌಡ, ಜಿಲ್ಲಾ ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿ ಶ್ರೀನಿವಾಸ್ , ಪ್ರಾದೇಶಿಕ ಸಾರಿಗೆ ಅಧಿಕಾರಿ ವಿವೇಕಾನಂದ, ಕರ್ನಾಟಕ ಜಾನಪದ ಪರಿಷತ್ ಅಧ್ಯಕ್ಷ ಡಿ.ಪಿ.ಸ್ವಾಮಿ, ಸ್ವಾಗತ ಸಮಿತಿಯ ಸಂಘಟನಾ ಕಾರ್ಯದರ್ಶಿ ಕೆ.ಎಂ.ಕೃಷ್ಣೇಗೌಡ ಕೀಲಾರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net