

ನಾಗಮಂಗಲ: ಹೊಣಕೆರೆ ಮತ್ತು ಬಸರಾಳು ಭಾಗದ ಕೆರೆಗಳಿಗೆ ನೀರು ತುಂಬಿಸಲು ಒಂದು ಸಾವಿರ ಕೋಟಿ ರೂ ಅನುದಾನ ಕೋರಿ ರಾಜ್ಯಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.
ತಾಲೂಕಿನ ಭೀಮನಹಳ್ಳಿ ಮತ್ತು ದೇವಲಾಪುರ ಗ್ರಾಮ ಪಂಚಾಯಿತಿ ಆವರಣದಲ್ಲಿ ಆಯೋಜಿಸಿದ್ದ ಜನಸ್ಪಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು, ಜನರು ಮತ ಚಲಾಯಿಸುವಾಗ ಸರಿಯಾದ ನಿರ್ಧಾರ ತೆಗೆದುಕೊಂಡು ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡಿದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದರು.
ಅವಕಾಶ ಸಿಕ್ಕಾಗ ಪ್ರಾಮಾಣಿಕವಾಗಿ ಒಂದಷ್ಟು ಕೆಲಸ ಮಾಡಬೇಕೆಂಬುದು ನನ್ನ ಉದ್ದೇಶ. ರಾಜ್ಯ ಸರ್ಕಾರದಲ್ಲಿ ಅತ್ಯಂತ ಜವಾಬ್ದಾರಿ ಸ್ಥಾನದಲ್ಲಿರುವ ನನಗೆ ಬಹಳಷ್ಟು ಒತ್ತಡವಿದೆ. ಆದರೂ ಕೂಡ ಕ್ಷೇತ್ರದ ಜನರು ಸಮಸ್ಯೆಗಳ ಅರ್ಜಿ ಹಿಡಿದು ನನ್ನ ಬಳಿ ನಿಲ್ಲಬಾರದೆಂಬ ಉದ್ದೇಶದಿಂದ ಎಲ್ಲ ಅಧಿಕಾರಿಗಳನ್ನು ಗ್ರಾ.ಪಂ ಮಟ್ಟಕ್ಕೆ ಕರೆತಂದು ಜನರ ಸಮಸ್ಯೆಗೆ ಪರಿಹಾರ ಕಂಡುಹಿಡಿಯುವ ಕೆಲಸ ಮಾಡುತ್ತಿರುವುದಾಗಿ ತಿಳಿಸಿದರು.
ಯಾವುದೇ ಸಮಸ್ಯೆಗಳಿದ್ದಲ್ಲಿ ತಮ್ಮ ಹೆಸರು, ವಿಳಾಸ ಮೊಬೈಲ್ ಸಂಖ್ಯೆಯೊಂದಿಗೆ ಅರ್ಜಿ ಸಲ್ಲಿಸಿದರೆ ಆಯಾ ಇಲಾಖೆಯ ಅಧಿಕಾರಿಗಳಿಗೆ ವರ್ಗಾಯಿಸಿ ಕಾಲಮಿತಿಯೊಳಗೆ ಸಮಸ್ಯೆ ಬಗೆಹರಿಸುವಂತೆ ಸೂಚಿಸಲಾಗುವುದು ಎಂದ ಸಚಿವರು, ಜನಸ್ಪಂದನಾ ಕಾರ್ಯಕ್ರಮದಲ್ಲಿ ವಿವಿಧ ಸಮಸ್ಯೆಗಳಿಗೆ ಪರಿಹಾರ ಕೋರಿ ಭೀಮನಹಳ್ಳಿ ಗ್ರಾ.ಪಂ ವ್ಯಾಪ್ತಿಯ ಜನರಿಂದ 120 ಅರ್ಜಿ ಹಾಗೂ ದೇವಲಾಪುರ ಗ್ರಾ.ಪಂ. ವ್ಯಾಪ್ತಿಯ ಜನರಿಂದ 46 ಅರ್ಜಿ ಸಲ್ಲಿಕೆಯಾಗಿವೆ. ಈ ಎಲ್ಲ ಅರ್ಜಿಗಳನ್ನು ನಿಗದಿತ ಅವಧಿಯಲ್ಲಿ ವಿಲೇವಾರಿ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಡಾ.ಕುಮಾರ, ಜಿಪಂ ಉಪ ಕಾರ್ಯದರ್ಶಿಗಳಾದ ಲಕ್ಷ್ಮೀ, ಧನಂಜಯ, ತಹಸೀಲ್ದಾರ್ ಜಿ.ಆದರ್ಶ, ತಾಪಂ ಇಒ ಸತೀಶ್, ಡಿವೈಎಸ್ಪಿ ಬಿ.ಚಲುವರಾಜು, ಬಿಇಒ ಕೆ.ಯೋಗೇಶ್, ತಾಲೂಕು ಆರೋಗ್ಯಾಧಿಕಾರಿ ಡಾ.ನಾರಾಯಣ, ಸೆಸ್ಕ್ ಇಇ ಮಂಜುನಾಥ್, ಗ್ರಾಪಂ ಅಧ್ಯಕ್ಷ ಪ್ರಕಾಶ್, ಉಪಾಧ್ಯಕ್ಷ ಬಿ.ಸಿ.ಗಿರೀಶ್, ಸೊಸೈಟಿ ನಿರ್ದೇಶಕ ಸಚ್ಚಿನ್ ಚಲುವರಾಯಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜೆ.ರಾಜೇಶ್, ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮೂಡ್ಲಿಗೌಡ, ಮುಖಂಡರಾದ ಸುನಿಲ್ ಲಕ್ಷ್ಮೀಕಾಂತ್, ಮಾವಿನಕೆರೆ ಸುರೇಶ್, ಉದಯಕಿರಣ್, ಮರಿಸ್ವಾಮಿ, ಡಿ.ಕೆ.ಸುರೇಶ್, ಎಂ.ಹುಚ್ಚೇಗೌಡ ಇತರರಿದ್ದರು.
ಇದೇ ವೇಳೆ ಭೀಮನಹಳ್ಳಿ ಮತ್ತು ದೇವಲಾಪುರ ಗ್ರಾ.ಪಂ ವ್ಯಾಪ್ತಿಯ 25 ಜನ ಅರ್ಹ ಫಲಾನುಭವಿಗಳಿಗೆ ಮಾಶಾಸನ ಮಂಜೂರಾತಿ ಪತ್ರ ಹಾಗೂ 270 ಆರ್‌ಟಿಸಿ ತಿದ್ದುಪಡಿ ಮತ್ತು 125 ಪೌತಿ ಖಾತೆ ಆದೇಶ ಪ್ರತಿ ವಿತರಿಸಿದರು.