ಜನರ ಮನೆ ಬಾಗಿಲಿಗೆ ಸರ್ಕಾರದ ಯೋಜನೆ

mkg
Published on

ಸಾಸ್ವೆಹಳ್ಳಿ: ಸರ್ಕಾರದ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಜನತಾ ದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಡಿ.ಜಿ. ಶಾಂತನಗೌಡ ತಿಳಿಸಿದರು.

ಹೋಬಳಿಯ ಹುಣಸಘಟ್ಟ ಗ್ರಾಮದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಾಂಗ್ರೆಸ್ ಸರ್ಕಾರ ಚುನಾವಣಾ ಪೂರ್ವ ನೀಡಿದ ಭರವಸೆಗಳಲ್ಲಿ ಸ್ತ್ರೀ ಶಕ್ತಿ ಯೋಜನೆಯನ್ನು ಇದುವರೆಗೂ 2 ಕೋಟಿ ಮಹಿಳೆಯರು ಸದ್ವಿನಿಯೋಗಿಸಿಕೊಂಡಿದ್ದಾರೆ. ಗೃಹ ಜ್ಯೋತಿ ಯೋಜನೆಯಡಿ ನೋಂದಣಿಯಾದವರೆಲ್ಲರಿಗೂ ಉಚಿತ ವಿದ್ಯುತ್ ಸೌಲಭ್ಯ ದೊರೆಯುತ್ತಿದೆ. ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ. ಅಕ್ಕಿ ಉಳಿದಂತೆ ಹಣ ಅವರವರ ಖಾತೆಗೆ ಜಮಾ ಮಾಡಲಾಗುತ್ತಿದೆ. ಗೃಹ ಲಕ್ಷ್ಮಿ ಯೋಜನೆಯಡಿಯಲ್ಲೂ ಆಯಾ ಕುಟುಂಬದ ಯಜಮಾನಿಗೆ ತಲಾ 2000 ರೂ. ಜಮೆಯಾಗುತ್ತಿದೆ ಎಂದು ಹೇಳಿದರು.

ಶೀಘ್ರ ಎಲ್ಲ ಇಲಾಖೆಗಳ ಸಭೆ ಕರೆದು ಜನಸಾಮಾನ್ಯರ ಕೆಲಸ ಕಾರ್ಯಗಳ ಬಗ್ಗೆ, ಅಭಿವೃದ್ಧಿ ಯೋಜನೆಗಳ ಬಗ್ಗೆ ಮತ್ತು ಬರಗಾಲ ಸಮರ್ಥವಾಗಿ ಎದುರಿಸುವ ವಿಚಾರವಾಗಿ ಸಭೆ ಕರೆಯಲಾಗುವುದು. ಉಪವಿಭಾಗಾಧಿಕಾರಿಗಳು ಜನತಾ ದರ್ಶನ ಕಾರ್ಯಕ್ರಮದಲ್ಲಿ ಬರುವ ಅರ್ಜಿಗಳನ್ನು ಸಕಾಲದಲ್ಲಿ ವಿಲೇವಾರಿಯಾಗುವಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ಹಳ್ಳಿಗಳಲ್ಲಿನ ಸಾಕಷ್ಟು ಸಮಸ್ಯೆಗಳಿಗೆ ಅಧಿಕಾರಿಗಳು ಸಿಗುತ್ತಿಲ್ಲ ಎಂಬ ದೂರುಗಳ ಹಿನ್ನೆಲೆಯಲ್ಲಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸುವ ನಿಟ್ಟಿನಲ್ಲಿ ಜನತಾ ದರ್ಶನ ಹಮ್ಮಿಕೊಳ್ಳಲಾಗುತ್ತಿದೆ. ರೈತ ಸಮುದಾಯ ಬರಗಾಲದ ಛಾಯೆಯಿಂದ ನಲುಗಿದ್ದು, ಅಧಿಕಾರಿಗಳು ತತ್‌ಕ್ಷಣ ಅವರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಅಧಿಕಾರಿ ವರ್ಗಕ್ಕೆ ಎಚ್ಚರಿಸಿದರು.

ಅಧಿಕಾರಿಗಳ ಕಾರ್ಯ ವೈಖರಿ ಪರಿಶೀಲಿಸಲು ಪ್ರತೀ 15 ದಿನಕ್ಕೊಮ್ಮೆ ಜಿಲ್ಲಾಧಿಕಾರಿಗಳು ತಾಲೂಕಿಗೆ ಭೇಟಿ ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು.
ಹೊನ್ನಾಳಿ-ಚನ್ನಗಿರಿ ಉಪವಿಭಾಗದ ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ ಮಾತನಾಡಿ, ಜನಸಾಮಾನ್ಯರ ಕೆಲಸಗಳನ್ನು ಅವರ ಮನೆ ಬಾಗಿಲಿಗೆ ತಲುಪಿಸುವ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯ ಯಶಸ್ವಿಗೆ ಎಲ್ಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಪ್ರಾಮಾಣಿಕವಾಗಿ ಪ್ರಯತ್ನ ಮಾಡಬೇಕೆಂದರು.

ತಹಸೀಲ್ದಾರ್ ಪಟ್ಟರಾಜೇಗೌಡ ಮಾತನಾಡಿ, ಜನತಾ ದರ್ಶನದಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಪಟ್ಟಂತೆ ಈ ದಿನ ಒಟ್ಟು 95 ಅರ್ಜಿಗಳು ಬಂದಿದ್ದು, ಅವುಗಳನ್ನು ಸಕಾಲದಲ್ಲಿ ವಿಲೇವಾರಿ ಮಾಡಲು ಅಗತ್ಯ ಕ್ರಮ ಜರುಗಿಸಲಾಗುವುದು. ಈ ಅರ್ಜಿಗಳನ್ನು ಐಟಿಜಿಆರ್‌ಎಸ್ ಸರ್ಕಾರದ ವೆಬ್‌ಸೈಟ್‌ನಲ್ಲಿ ಹಾಕಲಾಗುವುದು. ಅರ್ಜಿಗಳ ಬಗ್ಗೆ ಸಂಬಂಧಪಟ್ಟವರು ಮಾಹಿತಿಯನ್ನು ಈ ವೆಬ್‌ಸೈಟ್‌ನಲ್ಲಿ ಪಡೆದುಕೊಳ್ಳಬಹುದಾಗಿದೆ ಎಂದರು.

ವೇದಿಕೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಪೋಷಣ್ ಅಭಿಯಾನದಡಿ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮವನ್ನು ಸಿಡಿಪಿಒ ಮಹಾಂತಸ್ವಾಮಿ ಪೂಜಾರ್ ನಡೆಸಿಕೊಟ್ಟರು.

ತಾಪಂ ಇಒ ಎಚ್.ವಿ. ರಾಘವೇಂದ್ರ, ಸಮಾಜ ಕಲ್ಯಾಣಾಧಿಕಾರಿ ಎಚ್.ಎಲ್. ಉಮಾ, ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಪ್ರತಿಮಾ, ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕಿ ರೇಖಾ, ಬಿಇಒ ಎಸ್.ಸಿ. ನಂಜರಾಜ್, ಅರಣ್ಯಾಧಿಕಾರಿ ಷಣ್ಮುಖ, ಉಪತಹಸೀಲ್ದಾರ್ ಚಂದ್ರಪ್ಪ, ಯುಟಿಪಿ ಎಇಇ ಕೆ.ಎನ್. ಮಂಜುನಾಥ್, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಇಂಜಿನಿಯರ್ ಸೋಮ್ಲಾನಾಯ್ಕಾ, ಜಿಪಂ ಇಂಜಿನಿಯರ್ ಮೋತಿಲಾಲ್, ಜಿಪಂ ಮಾಜಿ ಅಧ್ಯಕ್ಷೆ ಶೀಲಾ ಗದ್ದಿಗೇಶ್, ಪಿಡಿಒ ಪರಮೇಶ್ ಕೊಳ್ಳೂರು, ಸ್ಥಳೀಯ ಗ್ರಾಪಂ ಅಧ್ಯಕ್ಷೆ ಶೃತಿ ವೀರೇಶ್, ಉಪಾಧ್ಯಕ್ಷೆ ರಹಮತ್ ಬೀ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net