ಸಾರ್ವಜನಿಕರಿಗೆ ನೆರವಾಗಲಿರುವ ಜನತಾದರ್ಶನ: ಶಾಸಕ ರವಿಕುಮಾರ್ ಗಣಿಗ ಹೇಳಿಕೆ

Janatadarshan in Upparakanahalli village Mandya
Published on

ಮಂಡ್ಯ: ಹಂಪಾಪುರ ಗ್ರಾಮದಲ್ಲಿ 600 ಕೋಟಿ ರೂ ವೆಚ್ಚದಲ್ಲಿ 400/220 ಕೆ.ವಿ ಸಾಮರ್ಥ್ಯದ ವಿದ್ಯುತ್ ಕೇಂದ್ರವಾಗಲಿದೆ. ಇದರಿಂದ ಐಪಿ ಸೆಟ್‌ಗಳಿಗೆ ಸಮಸ್ಯೆಯಾಗುವುದಿಲ್ಲ. ಪರಿಣಾಮ ರೈತರಿಗೆ ಅನುಕೂಲವಾಗಲಿದೆ ಎಂದು ಶಾಸಕ ರವಿಕುಮಾರ್ ಗಣಿಗ ಹೇಳಿದರು.

ತಾಲೂಕಿನ ಉಪ್ಪರಕನಹಳ್ಳಿ ಗ್ರಾಮದಲ್ಲಿ ತಾಲೂಕು ಆಡಳಿತದಿಂದ ಆಯೋಜಿಸಿದ್ದ ಜನತಾದರ್ಶನದಲ್ಲಿ ಮಾತನಾಡಿದ ಅವರು, ಕಾವೇರಿ ನೀರಾವರಿ ನಿಗಮದಿಂದ 100 ಕೋಟಿ ರೂ ವೆಚ್ಚದಲ್ಲಿ ನಾಲೆಗಳ ಆಧುನೀಕರಣ ಕೆಲಸವಾಗುತ್ತಿದೆ. ಈ ವರ್ಷ 120 ಕೋಟಿ ರೂ ಅನುದಾನ ಘೋಷಣೆಯಾಗಿದೆ. ಇದಕ್ಕೆ ಸಂಬಂಧಿಸಿದಂತೆ ಶೀಘ್ರವೇ ಟೆಂಡರ್ ಆಗಲಿದೆ ಎಂದರು.

ಒಂದೆಡೆ ಅಭಿವೃದ್ಧಿ ಕೆಲಸ ನಿರಂತರವಾಗಿ ನಡೆಯುತ್ತಿದೆ. ಮತ್ತೊಂದೆಡೆ ಗ್ಯಾರಂಟಿ ಯೋಜನೆಗಳಿಂದಲೂ ಸಾರ್ವಜನಿಕರಿಗೆ ಸೌಲಭ್ಯ ಸಿಗುತ್ತಿದೆ. ಒಂದು ವೇಳೆ ಗ್ಯಾರಂಟಿ ಯೋಜನೆಗೆ ಸಂಬಂಧಿಸಿದಂತೆ ಸಮಸ್ಯೆಗಳಿದ್ದರೆ ಬಗೆಹರಿಸಿಕೊಳ್ಳಲು ಜನತಾದರ್ಶನದಲ್ಲಿ ಅವಕಾಶ ಕಲ್ಪಿಸಲಾಗಿದೆ. ಉಪ್ಪರಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎರಡು ವರ್ಷದ ಅವಧಿಯಲ್ಲಿ 10 ಕೋಟಿ ರೂ ವೆಚ್ಚದ ಅಭಿವೃದ್ಧಿ ಕೆಲಸ ನಡೆಯುತ್ತಿದೆ. ಉಪ್ಪರಕನಹಳ್ಳಿಯಿಂದ ಗಂಟಗೌಡನಹಳ್ಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಎರಡೂವರೆ ಕೋಟಿ ರೂ ವೆಚ್ಚದಲ್ಲಿ ಮಾಡಲಾಗುತ್ತಿದೆ. ಇದರ ಮುಂದುವರೆದ ಭಾಗವಾಗಿ ದ್ಯಾಪಸಂದ್ರ ಗ್ರಾಮದವರೆಗೂ ಕೆಲಸ ನಡೆಯಲಿದೆ. ಅದೇ ರೀತಿ ಮಲ್ಲಾಘಟ್ಟ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಎರಡೂವರೆ ಕೋಟಿ ರೂ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ವಿವರಿಸಿದರು.

ಅಧಿಕಾರ ಕೊಟ್ಟಿರುವ ಜನರಿಗೆ ಅನುಕೂಲ ಕಲ್ಪಿಸುವುದು ನಮ್ಮ ಗುರಿ. ಅಂತೆಯೇ ಜನರು ಕೆಲಸ ಮಾಡಿಸಿಕೊಳ್ಳಲು ಕಚೇರಿಗೆ ಅಲೆದಾಡಬಾರದೆನ್ನುವ ಕಾರಣಕ್ಕೆ ನಿಮ್ಮ ಬಳಿಗೆ ಸರ್ಕಾರವನ್ನು ತರಲಾಗುತ್ತಿದೆ. ಅಂದರೆ ಸಾರ್ವಜನಿಕರಿಗೆ ನೆರವಾಗಲಿರುವ ಜನತಾದರ್ಶನ ಆಯೋಜಿಸಲಾಗುತ್ತಿದೆ. ಎಲ್ಲ ಇಲಾಖೆ ಅಧಿಕಾರಿಗಳು ಪಾಲ್ಗೊಂಡು ಸಾರ್ವಜನಿಕರ ಸಮಸ್ಯೆಯನ್ನು ಬಗೆಹರಿಸಲಿದ್ದಾರೆ ಎಂದರು.

ಮಂಡ್ಯ ಉಪವಿಭಾಗಾಧಿಕಾರಿ ಶಿವಮೂರ್ತಿ, ತಹಸೀಲ್ದಾರ್ ಡಾ.ಶಿವಕುಮಾರ್ ಬಿರಾದರ್, ಉಪ್ಪರಕನಹಳ್ಳಿ ಗ್ರಾಪಂ ಅಧ್ಯಕ್ಷ ಕರೀಗೌಡ, ಉಪಾಧ್ಯಕ್ಷೆ ದೊಡ್ಡಮ್ಮ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ರುದ್ರಪ್ಪ ಇತರರಿದ್ದರು. ಇದೇ ವೇಳೆ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು. ಕಣ್ಣಿನ ಸಮಸ್ಯೆ ಇರುವವರಿಗೆ ಉಚಿತವಾಗಿ ಕನ್ನಡಕ ವಿತರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net