ಅಕ್ಟೋಬರ್ ೨೩ ರಂದು ಜನಜಾಗೃತಿ ಮಾನವ ಸರಪಳಿ

N.U.NACHAPPA
Published on

ಮಡಿಕೇರಿ: ಕೊಡಗು ಜಿಲ್ಲಾ ವ್ಯಾಪಿ ಕರ್ನಾಟಕ ಭೂಸುಧಾರಣಾ ಕಾಯ್ದೆ ತಿದ್ದುಪಡಿ ೭೯ಎ, ೭೯ಬಿಯನ್ನು ದುರುಪಯೋಗಪಡಿಸಿಕೊಂಡು ನಡೆಸುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಅ.೨೩ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಭಾಗಮಂಡಲದಲ್ಲಿ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ ನಡೆಸಲಾಗುವುದು ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೊಡಗಿನಲ್ಲಿ ಕರ್ನಾಟಕ ಭೂಸುಧಾರಣಾ ಕಾಯ್ದೆ ವ್ಯಾಪಕವಾಗಿ ದುರುಪಯೋಗವಾಗುತ್ತಿದೆ. ಭಾಗಮಂಡಲ ತಲಕಾವೇರಿ ವ್ಯಾಪ್ತಿಯಲ್ಲಿ ಬರುವ ಪೇರೂರು ಬಲ್ಲಮಾವಟಿ ಪ್ರದೇಶದಲ್ಲಿ ಕಾವೇರಿಯ ಉಪನದಿ ಕಪ್ಪೊಳೆಯ ಜಲಮೂಲವನ್ನು ಧ್ವಂಸಗೊಳಿಸುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿದ್ದಾರೆ.

ಕಾವೇರಿಯ ಪುಣ್ಯ ಸ್ಥಳವು ಸುಪ್ರಸಿದ್ಧ ತೀರ್ಥಯಾತ್ರ ಕ್ಷೇತ್ರವಾಗಿದ್ದು, ಇದು ಪ್ರವಾಸಿತಾಣವಾಗುವ ಬದಲು ಆಧ್ಯಾತ್ಮಿಕ, ಪಾರಮಾರ್ಥಿಕ ನೆಲೆಯಾಗಿ ಉಳಿದು ಮುಂದುವರೆಯಬೇಕು. ಭೂಸುಧಾರಣಾ ತಿದ್ದುಪಡಿ ಕಾಯ್ದೆ ದುರ್ಬಳಕೆಯಾಗದಂತೆ ಸಾತ್ವಿಕ ಪ್ರತಿರೋಧವನ್ನು ಸಿಎನ್‌ಸಿ ಒಡ್ಡುತ್ತಾ ಬಂದಿದೆ. ಇದರ ಭಾಗವಾಗಿ ಭಾಗಮಂಡಲದಲ್ಲಿ ಸಿಎನ್‌ಸಿಯಿಂದ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದ್ದಾರೆ.

ಭಾಗಮಂಡಲದಲ್ಲಿ ನಡೆಯುವ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ವಿರುದ್ಧ ನಿರ್ಣಯ ಕೈಗೊಂಡು ಪ್ರತಿಜ್ಞಾವಿಧಿ ಸ್ವೀಕರಿಸಬೇಕೆಂದು ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net