ರಾಷ್ಟ್ರೀಯ ಜಂತು ಹುಳ ನಿವಾರಣಾ ಕಾರ್ಯಕ್ರಮ

Janthu hulu
Published on

ಮಡಿಕೇರಿ:

ದೇಶದಾದ್ಯಂತ ಸೋಮವಾರ (ಡಿ09) “ರಾಷ್ಟ್ರೀಯ ಜಂತು ಹುಳ ನಿವಾರಣಾ ಕಾರ್ಯಕ್ರಮ” (ಎನ್‌ಡಿಡಿ) ಮತ್ತು ಡಿ.16 ರಂದು ಮಾಪ್ ಅಪ್ ಡೇ ಕಾರ್ಯಕ್ರಮ ನಡೆಯುತ್ತಿದ್ದು, 1-19 ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ ಆಲ್‌ಬೆಂಡಜೋಲ್- 400ಎಂಜಿ ಮಾತ್ರೆಗಳನ್ನು ನೀಡಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಸತೀಶ್ ಕುಮಾರ್ ತಿಳಿಸಿದ್ದಾರೆ. ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮವನ್ನು 2015ರ ಫೆ. 10 ರಲ್ಲಿ ಪ್ರಾರಂಭ ಮಾಡಲಾಗಿದ್ದು, ಮೊದಲಿಗೆ 11 ರಾಜ್ಯಗಳಲ್ಲಿ ಇದನ್ನು ಜಾರಿಗೆ ತರಲಾಯಿತು. 2018 ಫೆಬ್ರವರಿಯಲ್ಲಿ ಈ ಕಾರ್ಯಕ್ರಮವನ್ನು 34 ರಾಜ್ಯಗಳಿಗೆ ವಿಸ್ತರಣೆ ಮಾಡಲಾಗಿದ್ದು, ಇದೀಗ 17ನೇ ಸುತ್ತಿನ ಕಾರ್ಯಕ್ರಮವಾಗಿರುತ್ತದೆ.

ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮದಲ್ಲಿ 1-5 ವರ್ಷದ ಒಳಗಿನ ಮಕ್ಕಳಿಗೆ ಅಂಗನವಾಡಿಗಳಲ್ಲಿ ಮಾತ್ರೆಗಳನ್ನು ನೀಡಲಾಗುತ್ತದೆ. 6-19 ವರ್ಷದ ಮಕ್ಕಳಿಗೆ ಎಲ್ಲಾ ಸರಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆ ಕಾಲೇಜು ಹಾಗೂ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಮಾತ್ರೆಗಳನ್ನು ನೀಡಲಾಗುತ್ತದೆ.

ಆಶಾ ಕಾರ್ಯಕರ್ತೆಯರು 6-19 ವರ್ಷದ ಒಳಗಿನ ಶಾಲೆಯಿಂದ ಹೊರಗುಳಿದ ಫಲಾನುಭವಿಗಳ ಪಟ್ಟಿಯನ್ನು ತಯಾರಿಸಿ ಅವರಿಗೆ ಅಂಗನವಾಡಿಗಳಲ್ಲಿ ಮಾತ್ರೆಗಳನ್ನು ನೀಡಲಾಗುತ್ತದೆ. ಈ ಕಾರ್ಯಕ್ರಮದಲ್ಲಿ 1-2 ವರ್ಷದ ಮಕ್ಕಳಿಗೆ ಅರ್ಧ ಆಲ್‌ಬೆಂಡಜೋಲ್ ಮಾತ್ರೆ ಹಾಗೂ 2-19 ವರ್ಷದ ಮಕ್ಕಳಿಗೆ ಒಂದು ಆಲ್‌ಬೆಂಡಜೋಲ್ ಮಾತ್ರೆಯನ್ನು ನೀಡಬೇಕಾಗಿರುತ್ತದೆ.

ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಟಾನಗೊಳಿಸಲು ಅಂತರ್ ಇಲಾಖೆಗಳ ಸಹಭಾಗಿತ್ವ ಅವಶ್ಯವಾಗಿದ್ದು, ಇದರಲ್ಲಿ ಮುಖ್ಯವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಕಾಲೇಜು ಶಿಕ್ಷಣ ಇಲಾಖೆ, ತಾಂತ್ರಿಕ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ, ಸ್ವಚ್ಚ ಭಾರತ್ ಮಿಷನ್, ಪಂಚಾಯತ್ ರಾಜ್, ಮುನ್ಸಿಪಲ್ ಕಾರ್ಪೋರೇಷನ್, ಸ್ಕೌಟ್ಸ್ ಮತ್ತು ಗೈಡ್ಸ್ ಇಲಾಖೆಗಳ ಸಹಭಾಗಿತ್ವ ಅಗತ್ಯವಾಗಿರುತ್ತದೆ.

ಸೋಮವಾರ ನಡೆಯುವ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮಕ್ಕೆ ಕೊಡಗು ಜಿಲ್ಲೆಯಲ್ಲಿ 1-19 ವರ್ಷದೊಳಗಿನ ಮಕ್ಕಳ ಗುರಿ 1,33,794 ಹೊಂದಿದ್ದು, ಇದರಲ್ಲಿ ಅಂಗನವಾಡಿ ಮಕ್ಕಳು 31,558, ಅಂಗನವಾಡಿಯಿAದ ಹೊರಗುಳಿದ ಮಕ್ಕಳು 1,661, ಎಲ್ಲಾ ಸರಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಯಲ್ಲಿರುವ ಮಕ್ಕಳು 75,369 ಹಾಗೂ ಪದವಿ ಪೂರ್ವ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು 10,059, ಡಿಗ್ರಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು 8,330, ಐಟಿಐ ಮತ್ತು ತಾಂತ್ರಿಕ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು 1,746 ಹಾಗೂ ಶಾಲೆಯಿಂದ ಹೊರಗುಳಿದ ಮಕ್ಕಳು 5,071 ಇರುತ್ತಾರೆ.

ಎನ್‌ಡಿಡಿ ಕಾರ್ಯಕ್ರಮಕ್ಕೆ ಅವಶ್ಯಕತೆಯಿರುವ ಆಲ್‌ಬೆಂಡಜೋಲ್ 400 ಎಂಜಿ ಮಾತ್ರೆಗಳನ್ನು ಈಗಾಗಲೇ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮುಖಾಂತರ ಎಲ್ಲಾ ಶಾಲೆ, ಕಾಲೇಜು ಹಾಗೂ ಅಂಗನವಾಡಿ ಕೇಂದ್ರಗಳಿಗೆ ಸರಬರಾಜು ಮಾಡಲಾಗಿರುತ್ತದೆ. ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಎಲ್ಲಾ ಶಾಲೆ, ಕಾಲೇಜು ನೋಡಲ್ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಕಿ.ಮ.ಆ.ಸ ಹಾಗೂ ಆಶಾ ಕಾರ್ಯಕರ್ತೆಯರಿಗೆ ಎನ್‌ಡಿಡಿ ಕಾರ್ಯಕ್ರಮದ ಬಗ್ಗೆ ತರಬೇತಿ ನೀಡಲಾಗಿರುತ್ತದೆ.

2023-24ನೇ ಸಾಲಿನಲ್ಲಿ ಫೆಬ್ರವರಿ ಮತ್ತು ಮೇ ಎರಡು ಹಂತಗಳಲ್ಲಿ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮವನ್ನು ನಡೆಸಲಾಗಿದ್ದು, ಕೊಡಗು ಜಿಲ್ಲೆಯು 1,34,822 ಮಕ್ಕಳ ಗುರಿಯನ್ನು ಹೊಂದಿದ್ದು, 1,34,222 ಮಕ್ಕಳಿಗೆ ಆಲ್‌ಬೆಂಡಜೋಲ್ ಗುಳಿಗೆ ನೀಡಲಾಗಿದ್ದು, ಶೇ.99.55 ಪ್ರಗತಿ ಸಾಧಿಸಲಾಗಿದೆ.

ಸೋಮವಾರ ನಡೆಯುವ “ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ” ಹಾಗೂ ಡಿ 16 ರಂದು ನಡೆಯುವ ಮಾಪ್‌ಅಪ್ ಕಾರ್ಯಕ್ರಮಕ್ಕೆ ಎಲ್ಲಾ ಇಲಾಖೆಗಳು ಕೈಜೋಡಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕಾಗಿ ಮತ್ತು ಎಲ್ಲಾ ಪೋಷಕರು ತಮ್ಮ ಮಕ್ಕಳಿಗೆ ಈ ಗುಳಿಗೆಗಳನ್ನು ತೆಗೆದುಕೊಳ್ಳಲು ಪ್ರೋತ್ಸಾಹ ನೀಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net