

ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಹಕಾರದಲ್ಲಿ ಜಂತುಹುಳು ನಿವಾರಣಾ ಕಾರ್ಯಕ್ರಮಕ್ಕೆ ನಗರದ ಸಂತ ಜೋಸೆಫರ ವಿದ್ಯಾಸಂಸ್ಥೆಯಲ್ಲಿ ಸೋಮವಾರ ಚಾಲನೆ ದೊರೆಯಿತು.
ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ.ರಂಗಧಾಮಪ್ಪ ಅವರು ೧-೧೯ ವರ್ಷದೊಳಗಿನ ಮಕ್ಕಳಿಗೆ ಆಲ್‌ಬೆಂಡಜೋಲ್-೪೦೦ ಎಂಜಿ ಮಾತ್ರೆಯನ್ನು ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಶಾಲಾ ಮಕ್ಕಳ ಆರೋಗ್ಯ ಕಾರ್ಯಕ್ರಮದಲ್ಲಿ ಸರ್ಕಾರವು ಜಂತುಹುಳು ನಿವಾರಣಾ ಕಾರ್ಯಕ್ರಮ ಹಮ್ಮಿಕೊಂಡಿದೆ. ಆರೋಗ್ಯ ಇಲಾಖೆ ವತಿಯಿಂದ ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಂಜುಳ ಮಾತನಾಡಿ, ಜಂತುಹುಳು ನಿವಾರಣಾ ಮಾತ್ರೆಯನ್ನು ೧೯ ವರ್ಷದೊಳಗಿನ ಮಕ್ಕಳು ಪಡೆದುಕೊಳ್ಳಬೇಕು. ಇದರಿಂದ ಹೊಟ್ಟೆನೋವು ಕಡಿಮೆಯಾಗುತ್ತದೆ. ಜತೆಗೆ ಜೀರ್ಣಶಕ್ತಿ ಹೆಚ್ಚಿಸುತ್ತದೆ. ಹಾಗೆಯೇ ರಕ್ತಹೀನತೆ ತಡೆಯಬಹುದು ಎಂದು ಹೇಳಿದರು.
ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಮಧುಸೂದನ್ ಮಾತನಾಡಿ, ರಾಷ್ಟ್ರದಾದ್ಯಂತ ಜಂತು ಹುಳು ನಿವಾರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ೧೯ ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಆಲ್‌ಬೆಂಡಜೋಲ್-೪೦೦ ಎಂಜಿ ಮಾತ್ರೆ ನೀಡಲಾಗುತ್ತದೆ. ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮದಲ್ಲಿ ೧-೫ ವ?ರ್ದ ಒಳಗಿನ ಮಕ್ಕಳಿಗೆ ಅಂಗನವಾಡಿಗಳಲ್ಲಿ ಮಾತ್ರೆ ನೀಡಲಾಗುತ್ತದೆ. ೬-೧೯ ವ?ರ್ದ ಮಕ್ಕಳಿಗೆ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆ ಕಾಲೇಜು ಹಾಗೂ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಮಾತ್ರೆಗಳನ್ನು ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.
೨೦೨೩-೨೪ ನೇ ಸಾಲಿನಲ್ಲಿ ಫೆಬ್ರವರಿ ಮತ್ತು ಮೇ ಎರಡು ಹಂತಗಳಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ ನಡೆಸಲಾಗಿದೆ. ಕೊಡಗು ಜಿಲ್ಲೆಯು ೧,೩೪,೮೨೨ ಮಕ್ಕಳ ಗುರಿಯನ್ನು ಹೊಂದಿದ್ದು, ೧,೩೪,೨೨೨ ಮಕ್ಕಳಿಗೆ ಆಲ್‌ಬೆಂಡಜೋಲ್ ಗುಳಿಗೆಯನ್ನು ನೀಡಲಾಗಿದ್ದು, ಶೇ.೯೯.೫೫ ಪ್ರಗತಿಯನ್ನು ಸಾಧಿಸಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಟರಾಜ್, ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ, ಜಿಲ್ಲಾ ಶಿಕ್ಷಣಾಧಿಕಾರಿ ಸೌಮ್ಯ ಪೊನ್ನಪ್ಪ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಗಾಯತ್ರಿ, ಇಸಿಒ ಜಾನೆಟ್, ಕೃಷ್ಣಪ್ರಸಾದ್, ಬಿಆರ್‌ಸಿ ಗುರುರಾಜ್, ಸಂತ ಜೋಸೆಫರ ವಿದ್ಯಾ ಸಂಸ್ಥೆಯ ಮುಖ್ಯೋಪಾಧ್ಯಾಯ ಸಿಸ್ಟರ್ ರೋಜಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ, ಜಿಲ್ಲಾ ಶುಶ್ರೂಷಣಾಧಿಕಾರಿ ಭವಾನಿ, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ದೇವರಾಜು ಮತ್ತು ಆರೋಗ್ಯ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಇತರರು ಇದ್ದರು.