

ತುಮಕೂರು: ಸಿದ್ಧಗಂಗೆಯ ಆರಾಧ್ಯ ದೈವ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ಮಹಾರಥೋತ್ಸವ ಶುಕ್ರವಾರ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವೈಭವಯುತವಾಗಿ ನಡೆಯಿತು.
ಮಠಾಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿ ರಥದ ಗಾಲಿಗೆ ತೆಂಗಿನಕಾಯಿ ಒಡೆದು, ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಮಧ್ಯಾಹ್ನ 12.30ಕ್ಕೆ ಚಾಲನೆ ನೀಡಿದರು.
ರಥೋತ್ಸವದಲ್ಲಿ ಸಂಸದ ಜಿ.ಎಸ್.ಬಸವರಾಜು, ಶಾಸಕ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಜೆ.ಉದೇಶ್, ಜಿಪಂ ಸಿಇಒ ಜಿ.ಎಂ.ಗಂಗಾಧರಸ್ವಾಮಿ ಹಾಗೂ ವಿವಿಧ ಮಠಾಧೀಶರು ರಥ ಎಳೆದರು. ಇದಕ್ಕೂ ಮುನ್ನ ರಥಕ್ಕೆ ವಿವಿಧ ಪೂಜೆ ಸಲ್ಲಿಸಿ ಸಿದ್ದಲಿಂಗೇಶ್ವರಸ್ವಾಮಿಯನ್ನು ರಥದಲ್ಲಿ ಕೂರಿಸಿ ರಾಜೋಪಚಾರ ಮತ್ತು ಅಷ್ಟೋತ್ತರ ಪೂಜೆ ನೆರವೇರಿಸಲಾಯಿತು. ನಂತರ ರಥೋತ್ಸವಕ್ಕೆ ಚಾಲನೆ ದೊರೆಯಿತು, ರಥವನ್ನು ವಸ ಹಾಗೂ ಸುವರ್ಣ ಕಲಶಗಳಿಂದ ಧಾರ್ಮಿಕ ಲಾಂಛನಗಳಾದ ಮಕರ, ತೋರಣ, ಕಲಶ, ಕನ್ನಡಿ ವಿವಿಧ ಬಗೆಯ ಪುಷ್ಪ ಮಾಲೆಗಳಿಂದ ಅಲಂಕರಿಸಲಾಗಿತ್ತು.
ರಥ ಸಾಗಿದ ದಾರಿಯುದ್ದಕ್ಕೂ ನಂದಿಧ್ವಜ, ಕರಡಿ ಮಜಲು, ನಾಗಸ್ವರ, ವೀರಗಾಸೆ, ಪಟಕುಣಿತ, ಡೋಲು ಕುಣಿತ ಸೇರಿ ವಿವಿಧ ಜಾನಪದ ಕಲಾ ತಂಡಗಳ ಪ್ರದರ್ಶನ ನೆರೆದಿದ್ದ ಭಕ್ತ ಸಮೂಹವನ್ನು ಆಕರ್ಷಿಸಿದವು.
ನಾಡಿನ ವಿವಿಧೆಡೆಯಿಂದ ಆಗಮಿಸಿದ್ದ ಸಾವಿರಾರು ಭಕ್ತರು ರಥಕ್ಕೆ ಬಾಳೆಹಣ್ಣು, ಹೂವು, ದವನ ಎಸೆದು ಭಕ್ತಿ ಸಮರ್ಪಿಸಿದರು.
ಶಿವರಾತ್ರಿ ಪ್ರಯುಕ್ತ ಜಾಗರಣೆಗಾಗಿ ನಾಡಿನಾದ್ಯಂತ ಸಹಸ್ರಾರು ಭಕ್ತರು ರಾತ್ರಿಯೇ ಮಠಕ್ಕೆ ಆಗಮಿಸಿದ್ದರು. ಭಕ್ತಾದಿಗಳಿಗೆ ಹಲವು ಸಂಘ ಸಂಸ್ಥೆಗಳಿಂದ ಪಾನಕ, ಮಜ್ಜಿಗೆ ವಿತರಣೆ ಹಾಗೂ ವಿಶೇಷ ಪ್ರಸಾದ, ದಾಸೋಹ ವ್ಯವಸ್ಥೆ ಮಾಡಲಾಗಿತ್ತು.