

ಬೇಲೂರು: ಪೆಟ್ರೋಲ್, ಡೀಸೆಲ್ ಮೇಲೆ ತೆರಿಗೆ ಹೆಚ್ಚಳ ಮಾಡುವ ಮೂಲಕ ರಾಜ್ಯ ಸರ್ಕಾರ ಜನರ ಮೇಲೆ ಹೊರೆ ಹಾಕುತ್ತಿರುವುದನ್ನು ಖಂಡಿಸಿ ಜಯಕರ್ನಾಟಕ ಸಂಘಟನೆ ಮುಖಂಡರು ಮಂಗಳವಾರ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಬಳಿಕ ತಹಸೀಲ್ದಾರ್ ಗ್ರೇಡ್-2 ಅಶೋಕ್‌ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.
ಸಂಘಟನೆ ತಾಲೂಕು ಅಧ್ಯಕ್ಷ ಎಸ್.ಎಂ.ರಾಜು ಮಾತನಾಡಿ, ಸರ್ಕಾರ ಚುನಾವಣೆಯಲ್ಲಿ ಜನರಿಗೆ ಭರವಸೆ ನೀಡಿದಂತೆ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವ ಸಲುವಾಗಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿ ಬಡ ಮತ್ತು ಮಧ್ಯಮ ವರ್ಗದವರಿಗೆ ಬರೆ ಎಳೆಯುತ್ತಿದೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಸರಕು ಸಾಗಣೆ ವೆಚ್ಚ ಹೆಚ್ಚಾಗಿ ಅಗತ್ಯ ವಸ್ತುಗಳ ಬೆಲೆಯೂ ಹೆಚ್ಚಾಗಲಿದೆ. ಅಲ್ಲದೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಲ್ಲಿ ಬಡವರು ಮತ್ತು ಮಧ್ಯಮ ವರ್ಗದವರಿಗೆ ಮಾತ್ರ ಗ್ಯಾರಂಟಿ ಯೋಜನೆ ಸಿಗುವಂತೆ ಮಾಡಬೇಕು. ಜತೆಗೆ ಸರ್ಕಾರಿ ನೌಕರರು, ಶ್ರೀಮಂತರಿಗೂ ಯೋಜನೆ ವಿಸ್ತರಿಸಿರುವುದರಿಂದ ಬೊಕ್ಕಸಕ್ಕೆ ಹೊಡೆತ ಬೀಳುತ್ತಿರುವುದನ್ನು ತಪ್ಪಿಸಲು ಹೋಗಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿರುವುದು ಸರಿಯಲ್ಲ. ಆದ್ದರಿಂದ ರಾಜ್ಯ ಸರ್ಕಾರ ಪೆಟ್ರೋಲ್ ಡೀಸೆಲ್ ಬೆಲೆ ಇಳಿಸಿ ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಜಯ ಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಎಂ.ಕೆ.ಆರ್.ಸೋಮೇಶ್ ಮಾತನಾಡಿ, ಸರ್ಕಾರ ತಕ್ಷಣವೇ ಪೆಟ್ರೋಲ್, ಡೀಸೆಲ್ ಬೆಲೆ ಇಳಿಸಿ ರಾಜ್ಯದ ಜನರ ಹೊರೆಯನ್ನು ಇಳಿಸಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯಾದಾದ್ಯಂತ ಹೋರಾಟ ಮಾಡಲಾಗುವುದು ಎಂದರು.
ಜಯಕರ್ನಾಟಕ ಸಂಘಟನೆ ಗೌರವಾಧ್ಯಕ್ಷ ಐ.ಎನ್.ಅರುಣ್‌ಕುಮಾರ್, ಕಾರ್ಯಾಧ್ಯಕ್ಷ ಲಕ್ಷ್ಮಣ್, ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಯುವ ಘಟಕದ ಅಧ್ಯಕ್ಷ ಹೇಮಂತ್, ವಿದ್ಯಾರ್ಥಿ ಘಟಕದ ಅಧ್ಯಕ್ಷ ಶ್ರೇಯಸ್‌ಗೌಡ, ಆಟೋ ಘಟಕದ ಅಧ್ಯಕ್ಷ ಲಕ್ಷ್ಮಣ್, ಸಾಂಸ್ಕೃತಿಕ ಘಟಕದ ಅಧ್ಯಕ್ಷ ಬಂಡೆ ಮಂಜು, ಮುಖಂಡರಾದ ಎನ್.ಯೋಗೇಶ್, ಚಂದ್ರಪ್ಪ, ಜಗದೀಶ, ಉಮೇಶ್ ಸೇರಿದಂತೆ ಇತರರಿದ್ದರು.