ಕೇಂದ್ರ ಸರ್ಕಾರದ ವಿರುದ್ಧ ಜೆಸಿಟಿಯು ಆಕ್ರೋಶ

21
Published on

ಮೈಸೂರು: ಕಾರ್ಮಿಕರು ಹಾಗೂ ಅವರ ಬೇಡಿಕೆಯನ್ನು ಕೇಂದ್ರ ಸರ್ಕಾರ ನಿರ್ಲಕ್ಷಿಸಿದೆ ಎಂದು ಆರೋಪಿಸಿ ಸಿಐಟಿಯು ನೇತೃತ್ವದಲ್ಲಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು)ನಿಂದ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಯಿತು.

ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರ ವಿವರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಮಂಡಿಸಿದ ಬಜೆಟ್‌ನಲ್ಲಿ ಕಾರ್ಮಿಕ ಸಂಘಟನೆಗಳನ್ನು ನಿರ್ಲಕ್ಷಿಸಿದೆ. ಅಲ್ಲದೆ ದೇಶದ ಬೆನ್ನೆಲುಬಾದ ಕಾರ್ಮಿಕರಿಗೆ ಯಾವುದೇ ಹೊಸ ಯೋಜನೆ ನೀಡದೆ ಕಡೆಗಣಿಸಿದೆ ಎಂದು ದೂರಿದರು.

ಜನವಿರೋಧಿ ಕಾರ್ಮಿಕ ಹಾಗೂ ರೈತ ವಿರೋಧಿ ಬಜೆಟ್ ಇದಾಗಿದ್ದು, ಕಾರ್ಮಿಕ ಸಂಘಟನೆಗಳ ಬೇಡಿಕೆ ಈಡೇರಿಸಲು ಗಮನ ನೀಡಿಲ್ಲ. ಕಾರ್ಪೊರೇಟ್ ಕಂಪನಿಗಳನ್ನು ಓಲೈಸಲು ಬಜೆಟ್ ಮಂಡಿಸಲಾಗಿದೆ. ಕೇಂದ್ರ ಸರ್ಕಾರಕ್ಕೆ ಜನಹಿತ ಇಲ್ಲ ಎಂದು ಟೀಕಿಸಿದರು.

ಕಾರ್ಮಿಕರ ಕನಿಷ್ಠ ಕೂಲಿಯನ್ನು 21 ಸಾವಿರಕ್ಕೆ ಏರಿಕೆ ಮಾಡಬೇಕು. ಗುತ್ತಿಗೆ ಪದ್ಧತಿ ರದ್ದು ಮಾಡಿ ಕಾಯಂಗೊಳಿಸಬೇಕು. ಸ್ವಾಮಿನಾಥನ್ ಆಯೋಗದ ವರದಿಯನ್ನು ಶೀಘ್ರ ಜಾರಿಗೊಳಿಸಬೇಕು. ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳನ್ನು ಘೋಷಣೆ ಮಾಡಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು. ಮುಖಂಡರಾದ ಜಗನ್ನಾಥ್, ಬಸವರಾಜು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net