ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಖಚಿತ: ಜಿಪಂ ಮಾಜಿ ಅಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್ ಸ್ಪಷ್ಟನೆ

13_02_Mdy_05(Jds Bandaya Sabe)
Published on

ಮಂಡ್ಯ: ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಸ್ಪರ್ಧೆ ಮಾಡಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತೇನೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್ ಹೇಳಿದರು.

ತಾಲೂಕಿನ ಸಂತೆಕಸಲಗೆರೆ ಗ್ರಾಮದ ಭೂಮಿಸಿದ್ದೇಶ್ವರಸ್ವಾಮಿ ದೇವಾಲಯದ ಸಮುದಾಯ ಭವನದ ಆವರಣದಲ್ಲಿ ಏರ್ಪಡಿಸಿದ್ದ ಹಿತೈಷಿಗಳು ಹಾಗೂ ಬೆಂಬಲಿಗರ ಸಭೆಯಲ್ಲಿ ಮಾತನಾಡಿದ ಅವರು, ನಾನು ಕೊನೇ ಗಳಿಗೆಯವರೆಗೂ ಕಾಯುತ್ತೇನೆ ಎಂದು ಮನವಿ ಮಾಡಿದ್ದರೂ ಕೊಡಲಿಲ್ಲ. ಆದ್ದರಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ. ನನ್ನ ಕೈಬಿಡಬೇಡಿ ಎಂದು ಮನವಿ ಮಾಡಿಕೊಂಡರು.

ಜೆಡಿಎಸ್‌ನಲ್ಲಿ 30 ವರ್ಷ ಸಾಮಾನ್ಯ ಕಾರ್ಯಕರ್ತನಾಗಿ ದುಡಿದಿದ್ದೇನೆ. ಆದರೆ ಆ ಪ್ರಾಮಾಣಿಕತೆಗೆ ಬೆಲೆ ಇಲ್ಲದಾಯಿತು. ಆದ್ದರಿಂದ ಸ್ಪರ್ಧೆ ಮಾಡುವುದು ಖಚಿತ. ಹಾಲಿ ಹಾಗೂ ಮಾಜಿ ಶಾಸಕರ ಬೆಂಬಲಿಗರು ಹರಡುತ್ತಿರುವ ಅಪಪ್ರಚಾರಗಳಿಗೆ ಕಿವಿಗೊಡಬೇಡಿ. ನನ್ನ ಬಳಿ ಹಣವಿಲ್ಲದಿದ್ದರೂ ಜನರ ಪ್ರೀತಿ, ವಿಶ್ವಾಸ ಗಳಿಸಿದ್ದೇನೆ. ಶಾಸಕ ರವೀಂದ್ರ ಶ್ರೀಕಂಠಯ್ಯ ಜೆಡಿಎಸ್ ಕಾರ್ಯಕರ್ತರು, ಮುಖಂಡರಿಗೆ ಬೆಲೆ ನೀಡುತ್ತಿಲ್ಲ. ಅವರ ಕಷ್ಟಸುಖಗಳಿಗೆ ಸ್ಪಂದಿಸುತ್ತಿಲ್ಲವೆಂದು ಅನೇಕರು ನನ್ನ ಬಳಿ ಹೇಳಿದ್ದಾರೆ. ಇನ್ನು ಮಾಜಿ ಶಾಸಕ ರಮೇಶ ಬಂಡಿಸಿದ್ದೇಗೌಡಗೆ ಅಕ್ರಮಗಳೇ ಸುತ್ತುವರೆದಿವೆ. ಅವರು ಮಾಡಿರುವ ಅಕ್ರಮಗಳು ಒಂದೊಂದಾಗಿ ಹೊರಗೆ ಬರುತ್ತಿವೆ. ಯಾವಾಗ ಬೇಕಾದರೂ ಜೈಲಿಗೆ ಹೋಗಬಹುದು. ಅವರು ಸಹ ನನ್ನ ವಿರುದ್ಧ ಇಲ್ಲಸಲ್ಲದ ಅಪಪ್ರಚಾರಗಳನ್ನು ಮಾಡುತ್ತಿದ್ದಾರೆ. ಇದನ್ನೆಲ್ಲ ನಂಬಬೇಡಿ ಎಂದರು.

ರೈತ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಸ್.ಸಿ.ಮಧುಚಂದನ್ ಮಾತನಾಡಿ, ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ತಗ್ಗಹಳ್ಳಿ ವೆಂಕಟೇಶ್ ಅವರ ಚುನಾವಣೆ ಖರ್ಚಿಗೆ ಒಂದು ಲಕ್ಷ ರೂ ನೀಡುತ್ತೇನೆ ಎಂದು ಘೋಷಣೆ ಮಾಡಿದರು.

ರೈತ ಮುಖಂಡರಾದ ಪ್ರಸನ್ನ ಎನ್.ಗೌಡ, ವಿಕ್ರಾಂತ್ ಲೋಕೇಶ್, ತಗ್ಗಹಳ್ಳಿ ಪ್ರಸನ್ನ, ಮಂಜುನಾಥ್, ಗ್ರಾಪಂ ಅಧ್ಯಕ್ಷರಾದ ಲಕ್ಷ್ಮಮ್ಮ, ಲಿಖಿತ, ಲಂಕೇಶ್ ಮಂಗಲ, ಅರೆಕೆರೆ ಸಿದ್ದೇಗೌಡ, ಮುಕುಂದ, ಎಂ.ಬಿ.ಲೋಕೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net