ಮಂಡ್ಯ ಕ್ಷೇತ್ರದಲ್ಲಿ ಯಾವುದೇ ಭಿನ್ನಮತವಿಲ್ಲ: ಮನ್‌ಮುಲ್ ಅಧ್ಯಕ್ಷ ಬಿ.ಆರ್.ರಾಮಚಂದ್ರು ಹೇಳಿಕೆ

31_10_Mdy_07(Ramachandru)
Published on

ಮಂಡ್ಯ: ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ಭಿನ್ನಮತ ಇಲ್ಲ. ಯಾರಿಗೆ ಅವಕಾಶ ಕೊಟ್ಟರೂ ಅವರ ಪರ ಕೆಲಸ ಮಾಡುತ್ತೇವೆ ಎಂದು ಮನ್‌ಮುಲ್ ಅಧ್ಯಕ್ಷ ಬಿ.ಆರ್.ರಾಮಚಂದ್ರು ಹೇಳಿದರು.

ತಾಲೂಕಿನ ಜಿ.ಹೊಸಹಳ್ಳಿ ಗ್ರಾಮದ ಶಂಭುಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ, ಪಕ್ಷ ಸಂಘಟನೆ ಕಾರ್ಯಕ್ರಮ ಹಾಗೂ ಕನ್ನಡ ಬಾವುಟ ವಿತರಿಸಿ ಮಾತನಾಡಿದರು. ಎಚ್.ಡಿ.ಕುಮಾರಸ್ವಾಮಿ ಅವರು ಮತ್ತೆ ಮುಖ್ಯಮಂತ್ರಿಯಾಗಲಿ ಎಂದು ವಿಶೇಷ ಪೂಜೆ ಸಲ್ಲಿಸಲಾಗಿದೆ. ಮಂಡ್ಯ ವಿಧಾನಸಭಾ ಕ್ಷೇತ್ರಕ್ಕೆ ನಾನು ಸ್ಪರ್ಧಾಂಕ್ಷಿಯಾಗಿದ್ದು, ಪಕ್ಷ ಸಂಘಟಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇನೆ ಎಂದರು.

ರಾಜ್ಯದ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸಲು ಪ್ರಾದೇಶಿಕ ಪಕ್ಷವೇ ಪರಿಹಾರವಾಗಿದೆ. ಈ ನಿಟ್ಟಿನಲ್ಲಿ ಮುಂದಿನ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕ್ಷೇತ್ರದ ಪ್ರತಿ ಮನೆಗೂ ಭೇಟಿ ನೀಡಿ ಎಚ್‌ಡಿಕೆ ಅವರು ರಾಜ್ಯದ ಜನರಿಗೆ ನೀಡಿದ ಕೊಡುಗೆಗಳನ್ನು ತಿಳಿಸುವ ಕೆಲಸ ಮಾಡಲಾಗುತ್ತಿದೆ ಎಂದರು.

ನ.1ರಂದು ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಮನೆ ಮನೆಗೆ ಕನ್ನಡ ಬಾವುಟ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಪ್ರತಿಯೊಬ್ಬರೂ ಮನೆಯಲ್ಲಿ ಕನ್ನಡ ಬಾವುಟ ಹಾರಿಸಬೇಕು ಎಂದು ಮನವಿ ಮಾಡಿದ ಅವರು, ಶಂಭು ಸೇವಾ ಟ್ರಸ್ಟ್ ವತಿಯಿಂದ ಈಗಾಗಲೇ ಸರ್ಕಾರಿ ಶಾಲಾ ಮಕ್ಕಳಿಗೆ ಬ್ಯಾಗ್ ಹಾಗೂ ಧರ್ಮಯಾತ್ರೆ ಮಾಡಲಾಗುತ್ತಿದೆ. ಅದು ಮುಂದುವರಿಯಲಿದೆ ಎಂದರು.

ಮನ್‌ಮುಲ್ ಉಪಾಧ್ಯಕ್ಷ ಎಂ.ಎಸ್.ರಘುನಂದನ್, ಬಾಲರಾಜು, ಕಲ್ಪನಾ ರಾಮಚಂದ್ರು, ಕೃಷ್ಣೇಗೌಡ, ಪುಟ್ಟಸ್ವಾಮಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net