ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

22_01_Mdy_06(Protest)
Published on

ಮಂಡ್ಯ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಅವರ ಕುಟುಂಬದವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿನ ಎಸ್.ಡಿ. ಜಯರಾಂ ವೃತ್ತದಲ್ಲಿ ಜಮಾಯಿಸಿದ ಜಾ.ದಳ ಕಾರ್ಯಕರ್ತರು ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಜಿಪಂ ಮಾಜಿ ಸದಸ್ಯ ಎಚ್.ಎನ್.ಯೋಗೇಶ್ ಮಾತನಾಡಿ, ಮಾಜಿ ಪ್ರಧಾನಮಂತ್ರಿ ದೇವೇಗೌಡರ ಬಗ್ಗೆ ಅಗೌರವವಾಗಿ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಆ ಪಕ್ಷದ ರಾಷ್ಟ್ರೀಯ ವರಿಷ್ಠರು ಬುದ್ಧಿ ಹೇಳಲಿ. ಮಾಜಿ ಸಿಎಂ ಕುಮಾರಸ್ವಾಮಿ ಅವರು ಹೇಳಿರುವಂತೆ ದೇವೇಗೌಡರ ಧೂಳಿಗೂ ಸಮಾನರಲ್ಲ. ಎಚ್‌ಡಿಡಿ ಬಗ್ಗೆ ಗೊತ್ತಿಲ್ಲದಿದ್ದರೆ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಲಿ. ಎಚ್‌ಡಿಡಿ ಕುಟುಂಬದ ಬಗ್ಗೆ ಅಷ್ಟು ಲಘುವಾಗಿ ಮಾತನಾಡುವ ಅವಶ್ಯಕತೆ ಇಲ್ಲ ಎಂಬುದನ್ನು ತಿಳಿದುಕೊಳ್ಳಲಿ ಎಂದು ತಿರುಗೇಟು ನೀಡಿದರು.

ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್ ಮಾತನಾಡಿ, ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡುತ್ತಿದ್ದೇವೆ. ರಾಜ್ಯದಿಂದ ನಿಮ್ಮ ಟೆಂಟ್ ತೆಗೆದುಕೊಂಡು ಹೋಗುವ ಕಾಲ ಬಂದಿದೆ. ನಿಮ್ಮ ಯೋಗ್ಯತೆಗೆ 8 ವರ್ಷ ಆಡಳಿತ ನಡೆಸಿದ್ದೀರಿ. ಆದರೆ ಯಾವ ಯೋಜನೆಗಳೂ ಬಡವರನ್ನು ಉದ್ಧಾರ ಮಾಡಿಲ್ಲ. ರೈತರನ್ನು ಸಂಕಷ್ಟದಲ್ಲೇ ಇರಿಸಿವೆ. ಬೆಲೆ ಏರಿಕೆಯೇ ನಿಮ್ಮ ಕೊಡುಗೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ನಗರಸಭಾ ಸದಸ್ಯ ನಾಗೇಶ್, ಮೋಹನ್ ಕುಮಾರ್, ವಿಶಾಲ್ ರಘು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net