ಜಿ.ಎಸ್.ಟಿ ಆದೇಶ ಖಂಡಿಸಿ ಜೆಡಿಎಸ್ ಪ್ರತಿಭಟನೆ

5adarshkdga4
Published on


ಮಡಿಕೇರಿ: ಕೇಂದ್ರ ಸರ್ಕಾರ ಪ್ರತಿಯೊಂದು ವಸ್ತುಗಳ ಮೇಲೆ ಹಾಕಿರುವ ಜಿ.ಎಸ್.ಟಿ ಆದೇಶವನ್ನು ಖಂಡಿಸಿ ಜಿಲ್ಲಾ ಜೆಡಿಎಸ್ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.


ನಗರದ ಗಾಂಧಿಮೈದಾನದಿಂದ ಜಿಲ್ಲಾಡಳಿತ ಭವನದವರೆಗೆ ಪ್ರತಿಭಟನಾ ಮೆರವಣಿಗೆ ಸಾಗಿದ ಪ್ರತಿಭಟನಾ ನಿರತರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.


ಈ ಸಂದರ್ಭ ಮಾತನಾಡಿದ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್, ಆಹಾರ, ದಿನಬಳಕೆ ಇತ್ಯಾದಿಗಳ ಮೇಲೆ ಜಿಎಸ್‌ಟಿ ವಿದಿಸುತ್ತಿದ್ದ ಸರ್ಕಾರ ಇಂದು ಪೆನ್ಸಿಲ್, ಪೇಪರ್‌ಗೂ ಜಿಎಸ್‌ಟಿ ಹಾಕಲಾಗಿದೆ. ಇದು ಖಂಡನೀಯ. ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಮೇಲೆ ಜಿಎಸ್‌ಟಿ ವಿಧಿಸಿರುವುದರಿಂದ ಜನಸಾಮಾನ್ಯರಿಗೆ ಸಮಸ್ಯೆಯಾಗಿದೆ. ತೆರಿಗೆ ಹೆಚ್ಚಳ ಮಾಡಿರುವುದರಿಂದ ಬಡ ಜನರು ದಿನನಿತ್ಯ ಬಳಕೆಯ ವಸ್ತುಗಳ ಖರೀದಿಯನ್ನು ಮಿತಗೊಳಿಸಿದ್ದಾರೆ. ಬೆಲೆ ಏರಿಕೆಯಿಂದ ಜನರು ಸಂಕಷ್ಟದಲ್ಲಿರುವಾಗ ತೆರಿಗೆ ಹೆಚ್ಚಳ ಮಾಡಿರುವುದು ಜನವಿರೋಧಿ ನೀತಿಯನ್ನು ತೋರಿಸುತ್ತದೆ. ಕೂಡಲೇ ಜಿಎಸ್‌ಟಿ ಆದೇಶವನ್ನು ಕೈಬಿಡುವಂತೆ ಆಗ್ರಹಿಸಿದರು.


ಪ್ರತಿಭಟನೆಯಲ್ಲಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ವಿಶ್ವ, ಮಡಿಕೇರಿ ಕ್ಷೇತ್ರ ಅಧ್ಯಕ್ಷ ಸುರೇಶ್, ರಾಜ್ಯ ಸಮಿತಿ ಸದಸ್ಯರಾದ ತಮ್ಮಯ್ಯ, ಶರೀಫ್, ಜಿಲ್ಲಾ ಖಜಾಂಚಿ ಡೆನ್ನಿ ಬರೋಸ್, ಜಿಲ್ಲಾ ಕಾರ್ಯದರ್ಶಿ ಸುನೀಲ್, ನಗರಸಭೆ ಸದಸ್ಯ ಮುಸ್ತಫಾ, ಮಹಿಳಾ ಜಿಲ್ಲಾಧ್ಯಕ್ಷೆ ಪುಷ್ಪಾವತಿ, ಕಾರ್ಯದರ್ಶಿ ಲೀಲಾ ಶೇಷಮ್ಮ ಮತ್ತಿತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net