ಡಿಸಿಎಂ ವಜಾಕ್ಕೆ ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ

6
Published on

ಮೈಸೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಕ್ಕೆ ಚ್ಯುತಿ ತರಲು ಮುಂದಾಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹಿಸಿ ಜೆಡಿಎಸ್‌ನಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಬನ್ನೂರು ರಸ್ತೆಯಲ್ಲಿರುವ ಸಿದ್ಧಾರ್ಥನಗರದ ನೂತನ ಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆಯಲ್ಲಿ ತೆರಳಿದ ಕಾರ್ಯಕರ್ತರು, ಸಂಸದ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಪೆನ್‌ಡ್ರೈನ್ ವಿಡಿಯೋ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿದರು.
ಪೆನ್‌ಡ್ರೈವ್ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜ್ಯಾದ್ಯಂತ ಹಂಚಿದ್ದಾರೆ ಎಂದು ಬಿಜೆಪಿ ಮುಖಂಡರೂ ಆದ ವಕೀಲ ದೇವರಾಜೇಗೌಡ ಜಗಜಾಹೀರು ಮಾಡಿದ್ದಾರೆ. ಈ ಇಬ್ಬರು ನಾಯಕರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಕ್ಕೆ ಚ್ಯುತಿ ತರಲು ಮುಂದಾಗಿದ್ದಾರೆ ಎಂದು ಆರೋಪಿಸಿದರು.
ಮಹಿಳೆಯ ಅಶ್ಲೀಲ ಚಿತ್ರಗಳನ್ನು ಒಳಗೊಂಡ ಪೆನ್‌ಡ್ರೈವ್ ಹಂಚುವ ಆರೋಪಕ್ಕೆ ಒಳಗಾಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು ಎಂದು ವಿವಿಧ ಘೋಷಣೆಗಳನ್ನು ಕೂಗಿದರು.
ಹಾಸನ ವಿಡಿಯೋ ಪ್ರಕರಣದಲ್ಲಿ ಮಹಿಳೆಯರ ಮೇಲೆ ನಡೆದಿದೆ ಎನ್ನಲಾದ ದೌರ್ಜನ್ಯದ ಬಗ್ಗೆ ರಾಜ್ಯ ಸರ್ಕಾರ ಈಗಾಗಲೇ ವಿಶೇಷ ತನಿಖಾ ದಳ(ಎಸ್‌ಐಟಿ) ವಹಿಸಿರುವುದನ್ನು ಜೆಡಿಎಸ್ ಸ್ವಾಗತಿಸುತ್ತದೆ. ಆದರೆ ಎಸ್‌ಐಟಿ ತನಿಖೆಯಲ್ಲಿ ರಾಜ್ಯ ಸರ್ಕಾರ ಹಸ್ತಕ್ಷೇಪ ಮಾಡುತ್ತಿದೆ. ಇದರಿಂದ ನಿಷ್ಪಕ್ಷಪಾತವಾಗಿ ತನಿಖೆ ನಡೆಯುವ ಕುರಿತು ಸಂಶಯ ಮೂಡಿದೆ ಎಂದು ದೂರಿದರು. ಬಳಿಕ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಶಾಸಕ ಜಿ.ಟಿ.ದೇವೇಗೌಡ ಮಾತನಾಡಿ, ಪ್ರಕರಣದಲ್ಲಿ ತಪ್ಪು ಮಾಡಿದ್ದಾನೆ ಎಂದು ಹೇಳುವವರೇ ಪೆನ್‌ಡ್ರೈವ್ ಹಂಚಿಕೆ ಮಾಡಿದ್ದಾರೆ. ತಪ್ಪು ಮಾಡಿದವರ ವಿರುದ್ಧ ಆರೋಪ ಮಾಡಿದಷ್ಟೇ ಪೆನ್‌ಡ್ರೈವ್ ಹಂಚಿಕೆ ಮಾಡಿದವರೂ ಅಪರಾಧಿಗಳೇ ಆಗುತ್ತಾರೆ ಎಂದು ಪರೋಕ್ಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಹರಿಹಾಯ್ದರು.
ಶಾಸಕ ಎಚ್.ಡಿ.ರೇವಣ್ಣ ಅವರನ್ನು ಬಂಧಿಸಿರುವ ಎಸ್‌ಇಐ ತಂಡ, ವಿಡಿಯೋ ಹಂಚಿದವರನ್ನು ವಿಚಾರಣೆ ನಡೆಸಿಲ್ಲ. ಇವರ ವಿರುದ್ಧ ಸರ್ಕಾರ ಇನ್ನೂ ಯಾಕೆ ಕ್ರಮ ಕೈಗೊಂಡಿಲ್ಲ. ಚೆನ್ನೈ ಕಂಪನಿ ಒಂದರಲ್ಲಿ ಕೋಟ್ಯಂತರ ರೂ. ಖರ್ಚು ಮಾಡಿ ಪೆನ್‌ಡ್ರೈವ್ ಖರೀದಿಸಿದ್ದಾರೆ. ಬೇರೆಡೆ ಅದಕ್ಕೆ ವಿಡಿಯೋ ಅಪ್‌ಲೋಡ್ ಮಾಡುವ ಕೆಲಸ ಆಗಿದೆ. ಪ್ರಾದೇಶಿಕ ಪಕ್ಷ ಜೆಡಿಎಸ್ ಅನ್ನು ಮುಗಿಸಲು ವ್ಯವಸ್ಥಿತ ಪಿತೂರಿಯಿಂದ ಇಂತಹ ನೀಚ ರಾಜಕಾರಣ ಮಾಡಲಾಗಿದೆ ಎಂದು ಕಿಡಿಕಾರಿದರು.
ಎಸ್‌ಐಟಿಯನ್ನು ರಾಜ್ಯದ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ತಮಗೆ ಬೇಕಾದಂತೆ ಬಳಸಿಕೊಳ್ಳುತ್ತಿದ್ದಾರೆ. ಪೆನ್‌ಡ್ರೈವ್‌ನಲ್ಲಿ ಮಹಿಳೆಯರ ಅಶ್ಲೀಲ ಚಿತ್ರಗಳನ್ನು ಬಿತ್ತರಿಸುವ ಮೂಲಕ ಮಹಿಳೆಯರ ಮಾನ ಹರಾಜು ಮಾಡಲಾಗಿದೆ. ಕೂಡಲೇ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಸರ್ಕಾರ ಎಸ್‌ಐಟಿಗೆ ವಹಿಸದಿದ್ದರೆ ಸುಪ್ರೀಂಕೋರ್ಟ್ ಮೆಟ್ಟಿಲು ಏರಿಯಾದರೂ ಸಿಬಿಐಗೆ ವಹಿಸುವಂತೆ ಮಾಡುತ್ತೇವೆ ಎಂದು ಹೇಳಿದರು.
ಮಾಜಿ ಸಚಿವ ಸಾ.ರಾ.ಮಹೇಶ ಮಾತನಾಡಿ, ವಕೀಲ ದೇವರಾಜೇಗೌಡ ಹೇಳಿರುವಂತೆ ವಿಶೇಷ ತನಿಖಾ ದಳ ನಡೆಸುತ್ತಿರುವ ತನಿಖಾ ವಿಧಾನ ಗಮನಿಸಿದರೆ, ಈ ವಿಡಿಯೋ ಪ್ರಕರಣದಲ್ಲಿ ರಾಜ್ಯದ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ನೇರವಾದ ಹಸ್ತ ಕ್ಷೇಪವಿರುವುದು ಎದ್ದು ಕಾಣುತ್ತದೆ. ಈ ಕಾರಣಗಳಿಂದ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ದಳದಿಂದ ಸೂಕ್ತ ತನಿಖೆ ಅಸಾಧ್ಯ ಎಂದರು.
ಮಾಜಿ ಶಾಸಕರಾದ ಕೆ.ಮಹದೇವು, ಅಶ್ವಿನ್ ಕುಮಾರ್, ಶಾಸಕ ಜಿ.ಡಿ.ಹರೀಶ್‌ಗೌಡ, ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ಜೆಡಿಎಸ್ ನಗರಾಧ್ಯಕ್ಷ ಚೆಲುವೇಗೌಡ, ಮಾಜಿ ಮೇಯರ್‌ಗಳಾದ ಆರ್.ಲಿಂಗಪ್ಪ, ಎಂ.ಜೆ.ರವಿಕುಮಾರ್, ನಗರಪಾಲಿಕೆ ಮಾಜಿ ಸದಸ್ಯ ಕೆ.ವಿ.ಶ್ರೀಧರ್, ಪ್ರೇಮಾಶಂಕರೇಗೌಡ, ಮುಖಂಡರಾದ ರವಿಚಂದ್ರೇಗೌಡ, ಸೋಮು, ರಾಮು, ಲಕ್ಷ್ಮೀ ಶಿವರಾಜ್, ಗಂಗಾಧರ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net