

ಅರಸೀಕೆರೆ: ನಗರದ ಹಳೆಯ ಮಾಧ್ಯಮಿಕ ಶಾಲಾ ಆವರಣದಲ್ಲಿ ನ.01ರಂದು ಹಮ್ಮಿಕೊಂಡಿರುವ ಕನ್ನಡ ರಾಜ್ಯೋತ್ಸವ ಸಮಾರಂಭದ ಯಶಸಸ್ಸಿಗೆ ಎಲ್ಲರೂ ಕೈ ಜೋಡಿಸಬೇಕು ಎಂದು ಕರ್ನಾಟಕ ಗೃಹಮಂಡಳಿ ಅಧ್ಯಕ್ಷ ಹಾಗೂ ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು.
ತಾಲೂಕು ಕಚೇರಿ ಆವರಣದಲ್ಲಿರುವ ಕಂದಾಯ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ನಾಡು, ನುಡಿಯ ವಿಶೇಷತೆ ಪರಿಚಯಿಸುವ ಉದ್ದೇಶದಿಂದ ಆಕರ್ಷಕ ಹಾಗೂ ಜಾನಪದ ಕಲಾತಂಡಗಳೊಂದಿಗೆ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಶಿಕ್ಷಣ, ಕಲೆ, ಸಾಹಿತ್ಯ, ಜಾನಪದ ಸೇರಿದಂತೆ ಇತರ ರಂಗಗಳಲ್ಲಿ ಸಾಧನೆಗೈದ ಸಾಧಕರನ್ನು ಗೌರವಿಸಲು ನಿರ್ಧರಿಸಲಾಗಿದೆ. ಕನ್ನಡ ಭಾಷಾ ವಿಷಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 125 ಹಾಗೂ ಪಿಯುಸಿ ಪರೀಕ್ಷೆಯಲ್ಲಿ 100, ಪದವಿ ಹಾಗೂ ಐಚ್ಛಿಕ ಕನ್ನಡ ಭಾಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಪುರಸ್ಕರಿಲಾಗುವುದು. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದವರನ್ನು ಸನ್ಮಾನಿಸಿ ಪ್ರಶಸ್ತಿ ನೀಡಲಾಗುತ್ತಿದ್ದು, ಅ.28ರಂದು ಮಾಹಿತಿ ನೀಡಲು ಕಡೇ ದಿನವಾಗಿದೆ ಎಂದು ತಿಳಿಸಿದರು.
ತಹಸೀಲ್ದಾರ್ ಎಂ.ಜಿ.ಸಂತೋಷ್ ಕುಮಾರ್ ಮಾತನಾಡಿ, ಕೃಷಿ, ಕಂದಾಯ, ಶಿಕ್ಷಣ ಇಲಾಖೆ ಸೇರಿದಂತೆ ಎಲ್ಲರೂ ತಮ್ಮ ಕಚೇರಿಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಬೇಕು. ಜತೆಗೆ ನಗರದಲ್ಲಿ ಕನ್ನಡದ ಭಾವುಟಗಳನ್ನು ಅಳವಡಿಸಬೇಕು ಎಂದು ಹೇಳಿದರು.
ಬಿಇಒ ಮೋಹನ್‌ಕುಮಾರ್, ತಾಲೂಕು ಕಸಾಪ ಅಧ್ಯಕ್ಷ ಚಂದ್ರಶೇಖರ್ ಇತರರು ಇದ್ದರು.