ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕೈಜೋಡಿಸಿ: ವೆಂಕಟ್ ರಾಜಾ

dc sabhe
Published on

ಮಡಿಕೇರಿ: ಬಾಲ್ಯ ವಿವಾಹ ಹಾಗೂ ಬಾಲ ಕಾರ್ಮಿಕ ಪ್ರಕರಣಗಳು ಕಂಡು ಬರದಂತೆ ಗಮನಹರಿಸಬೇಕು. ಈ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳು ಹಾಗೂ ಪ್ರಗತಿ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿ, ಬಾಲ್ಯ ವಿವಾಹ ಹಾಗೂ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡಲು ಎಲ್ಲರೂ ಕೈಜೋಡಿಸಬೇಕು. ಇಂತಹ ಪ್ರಕರಣಗಳು ಕಂಡು ಬರದಂತೆ ಹೆಚ್ಚಿನ ಜಾಗೃತಿ ವಹಿಸಬೇಕು ಎಂದು ನಿರ್ದೇಶನ ನೀಡಿದರು.

ಸಮಾಜ ಕಲ್ಯಾಣ, ಸಮಗ್ರ ಗಿರಿಜನ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ವಸತಿ ಶಾಲೆಗಳು ಸೇರಿದಂತೆ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡಬೇಕು. ಆಹಾರ ಗುಣಮಟ್ಟವನ್ನು ಪ್ರತೀನಿತ್ಯ ಕಾಯ್ದುಕೊಳ್ಳಬೇಕು. ವಿದ್ಯಾರ್ಥಿ ನಿಲಯಗಳಲ್ಲಿ ಉತ್ತಮ ಬೆಡ್‌ಶೀಟ್ ಒದಗಿಸಬೇಕು ಎಂದರು.

ಅಂಗನವಾಡಿ, ಶಾಲಾ ಹಾಗೂ ಕಾಲೇಜುಗಳ ಕಟ್ಟಡ ಬಗ್ಗೆ ವಿಶೇಷ ಗಮನಹರಿಸಬೇಕು. ಸಮಸ್ಯೆಗಳಿದ್ದಲ್ಲಿ ಮಾಹಿತಿ ನೀಡುವಂತಾಗಬೇಕು. ಜಿಲ್ಲೆಯಲ್ಲಿ ಕೆರೆಗಳ ಸಂರಕ್ಷಣೆ ಮಾಡಬೇಕು. ಕೆರೆ ಸಂರಕ್ಷಣೆಯಿಂದ ಕಾಲ ಕಾಲಕ್ಕೆ ಮಳೆ ಆಗಲಿದೆ. ಜೊತೆಗೆ ಅಂತರ್ಜಲ ಮಟ್ಟ ಹೆಚ್ಚಲಿದೆ ಎಂದು ತಿಳಿಸಿದರು.

ಮಳೆಗಾಲ ಸಂದರ್ಭದಲ್ಲಿ ಅಧಿಕಾರಿಗಳು ರಜೆ ಇದೆ ಎಂದು ಕೇಂದ್ರ ಸ್ಥಾನ ಬಿಟ್ಟು ಹೋಗುವಂತಿಲ್ಲ. ಪ್ರಾಕೃತಿಕ ವಿಕೋಪ ನಿರ್ವಹಣೆಗೆ ನಿಯೋಜಿಸಿರುವ ಎಲ್ಲಾ ಹಂತದ ಅಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸಬೇಕು. ಸರ್ಕಾರ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿದೆ. ಆ ನಿಟ್ಟಿನಲ್ಲಿ ಶಾಲೆಗಳಲ್ಲಿ ಆಟದ ಮೈದಾನ, ಶೌಚಾಲಯ, ಕಡ್ಡಾಯವಾಗಿ ಇರಬೇಕು ಎಂದರು.

ಗ್ರಾಮ ಸಭೆಗಳಿಗೆ ನೋಡಲ್ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಿ ಸಭೆ ನಡೆಸಿ ಪ್ರಗತಿಯತ್ತ ಗಮನ ಹರಿಸಬೇಕು. ಗ್ರಾಮದ ಆಡಳಿತ ಅಭಿವೃದ್ಧಿಯಲ್ಲಿ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಮತ್ತಷ್ಟು ಹೆಚ್ಚಿನ ಕೆಲಸ ನಿರ್ವಹಣೆ ಮಾಡಬೇಕು ಎಂದರು.

ಇದೇ ಜೂ.೧೨ ರಂದು ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ, ಹಾಗೂ ಜೂ.೨೧ ರಂದು ಅಂತರರಾಷ್ಟ್ರೀಯ ೧೧ ನೇ ಯೋಗ ದಿನಾಚರಣೆ ಬಗ್ಗೆ ಜಿಲ್ಲಾಧಿಕಾರಿ ಮಾಹಿತಿ ಪಡೆದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆ ಕಾರ್ಯಕ್ರಮ ಅನುಷ್ಠಾನ ಸಂಬಂಧ ಮಾಹಿತಿ ಪಡೆದರು.

ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಮಾತನಾಡಿ, ಪಂಚಾಯತ್ ರಾಜ್ ಇಲಾಖೆ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕೆಲಸ ಹಾಗೂ ಕುಡಿಯುವ ನೀರು, ಗ್ರಾಮೀಣ ರಸ್ತೆ ಅಭಿವೃದ್ಧಿ, ಮಹಾತ್ಮ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮತ್ತಿತರ ಬಗ್ಗೆ ವಿವರಿಸಿದರು.

ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಸಿ.ರಂಗಧಾಮಪ್ಪ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ನಟರಾಜ, ಪಶುಪಾಲನೆ ಇಲಾಖೆ ಉಪನಿರ್ದೇಶಕರಾದ ಲಿಂಗರಾಜ ದೊಡ್ಡಮನಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಎಸ್.ಹೊನ್ನೇಗೌಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ತಿಪ್ಪಣ್ಣ ಪಿ.ಸಿರಸಗಿ ಇತರರು ತಮ್ಮ ಇಲಾಖೆಗೆ ಸಂಬಂಧಿಸಿದಂತೆ ಮಾಹಿತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net