ಸರ್ಕಾರಿ ಶಾಲೆಗಳ ಉಳಿವಿಗೆ ಕೈಜೋಡಿಸಿ

1001307380
ಆಲೂರು ಪಟ್ಟಣದ ಪಿ.ಎಂ.ಶ್ರೀ. ಸರ್ಕಾರಿ ನೂತನ ಹಿರಿಯ ಹಿರಿಯ ಪ್ರಾಥಮಿಕ ಶಾಲಾ ಅವರಣದಲ್ಲಿ ಆಯೋಜಿಸಿದ್ದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಸಿಮೆಂಟ್ ಮಂಜು ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದರು. ಕೃಷ್ಣೆಗೌಡ ಮಲ್ಲಿಕಾರ್ಜುನ್, ಸುಬ್ರಮಣ್ಯ ಶರ್ಮಾ, ಎ.ಡಿ. ಕೇಶವಮೂರ್ತಿ, ಸಿದ್ದೇಶ್ ಕುಮಾರ್ ಇದ್ದರು.
Published on

ಆಲೂರು : ಸರ್ಕಾರಿ ಶಾಲೆಗಳನ್ನು ಉಳಿಸುವ ಪ್ರಯತ್ನಕ್ಕೆ ಪ್ರತಿಯೊಬ್ಬ ಪಾಲಕರು ಕೈ ಜೋಡಿಸಬೇಕು ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.

ತಾಲ್ಲೂಕು ಕ್ಷೇತ್ರ ಶಿಕ್ಷಣಾದಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ಇವರ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಪಿ.ಎಂ.ಶ್ರೀ. ಸರ್ಕಾರಿ ನೂತನ ಹಿರಿಯ ಹಿರಿಯ ಪ್ರಾಥಮಿಕ ಶಾಲಾ ಅವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ಶಾಲಾ ಪ್ರಾರಂಭೋತ್ಸವ ಮತ್ತು ವಿಶೇಷ ದಾಖಲಾತಿ ಆಂದೋಲನ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿ ಮಾತನಾಡಿದರು.

ಇತ್ತೀಚಿಗೆ ಸರ್ಕಾರಿ ಶಾಲೆಗಳಲ್ಲಿ ನುರಿತ ಅನುಭವಿ ಗುರುಗಳ ಬಳಗವಿದೆ. ಸರ್ಕಾರದಿಂದ ಮಧ್ಯಾಹ್ನದ ಬಿಸಿಯೂಟ, ಸಮವಸ್ತ್ರ ,ಶಾಲಾ ಕಲಿಕಾ ಸಾಮಗ್ರಿ ಸೇರಿದಂತೆ ಹಲವಾರು ಯೋಜನೆಗಳ ಮೂಲಕ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಸಹಕಾರಿಯಾಗಿದೆ. ಸರ್ಕಾರಿ ಶಾಲೆಗಳಲ್ಲಿ ಓದಿದ ಎಷ್ಟೋ ವಿದ್ಯಾರ್ಥಿಗಳು ಇಂದು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಉನ್ನತ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಖಾಸಗಿ ಶಾಲೆಗಳ ಪೈಪೋಟಿ ನಡುವೆ ಸರ್ಕಾರಿ ಶಾಲೆಗಳು ಬಲಗೊಳ್ಳಬೇಕಿದೆ. ಸಮಾನ ಶಿಕ್ಷಣದ ಪರಿಕಲ್ಪನೆ ಉಳಿಯಲು ಪ್ರತಿಯೊಬ್ಬರಿಗೂ ಉಚಿತ ಶಿಕ್ಷಣ ಸಿಗಲು ಸರ್ಕಾರಿ ಶಾಲೆಗಳನ್ನು ಉಳಿಸಿ ಅಭಿವೃದ್ಧಿಪಡಿಸಬೇಕು. ಈ ಕಾರ್ಯಕ್ಕೆ ಸಮಾಜ ಮತ್ತು ಸಮುದಾಯದ ಸಹಕಾರ ಅಗತ್ಯ ಎಂದರು.

ಶೈಕ್ಷಣಿಕ ವರ್ಷ ಆರಂಭ ಆಗಿರುವುದರಿಂದ ಪಾಲಕರು ತಮ್ಮ ಮಕ್ಕಳನ್ನು ಶಾಲೆಗೆ ಸೇರಿಸಲು ಮುಂದಾಗಬೇಕು. ಯಾವ ಮಕ್ಕಳೂ ಶಾಲೆಯಿಂದ ಹೊರಗೆ ಉಳಿಯಬಾರದು. ಕಡ್ಡಾಯ ಶಿಕ್ಷಣ ಜಾರಿಯಲ್ಲಿ ಇರುವುದರಿಂದ ಪ್ರತಿಯೊಂದು ಮಗುವಿಗೂ ಶಿಕ್ಷಣ ಅವಶ್ಯಕವಾಗಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಆಲೂರು ಸಕಲೇಶಪುರ ತಾಲೂಕಿನ ಸರ್ಕಾರಿ ಶಾಲೆಗಳು ಉತ್ತಮ ಫಲಿತಾಂಶ ನೀಡಿದ್ದು ಸಕಲೇಶಪುರ ಪ್ರಥಮ ಹಾಗೂ ಆಲೂರು ದ್ವಿತೀಯ ಸ್ಥಾನ ಪಡೆದು ಜಿಲ್ಲೆಯ ಗೌರವವನ್ನು ಹೆಚ್ಚಿಸಿದ್ದು ನನಗೆ ಸಂತೋಷ ತಂದಿದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣೆಗೌಡ ಮಾತನಾಡಿ, ಪಾಲಕರು ಕಾನ್ವೆಂಟ್ ವ್ಯಾಮೋಹದಿಂದ ಹೊರಬರಬೇಕು. ಸರ್ಕಾರಿ ಶಾಲೆಗಳಲ್ಲಿ ಓದಿದ ಅನೇಕ ಮಹನೀಯರು ದೇಶದ ಉನ್ನತ ಹುದ್ದೆ ಅಲಂಕರಿಸಿದ್ದಾರೆ. ಇಲ್ಲಿ ನುರಿತ ಶಿಕ್ಷಕರಿದ್ದಾರೆ. ಪಾಲಕರು ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಕಳುಹಿಸಬೇಕು ಎಂದು ಸಲಹೆ ನೀಡಿದರು.

ಪಿ.ಎಂ.ಶ್ರೀ. ಸರ್ಕಾರಿ ನೂತನ ಹಿರಿಯ ಪ್ರಾಥಮಿಕ ಶಾಲೆ , ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸರ್ಕಾರಿ ಹೆಣ್ಣು ಮಕ್ಕಳ ಪ್ರೌಢಶಾಲೆ ಮಕ್ಕಳಿಗೆ ಸಮವಸ್ತ್ರ ಹಾಗೂ ಪುಸ್ತಕ ವಿತರಣೆ ಮಾಡಲಾಯಿತು.

ತಹಸೀಲ್ದಾರ್ ಮಲ್ಲಿಕಾರ್ಜುನ್, ತಾಲೂಕು ಪಂಚಾಯಿತಿ ಇ.ಒ.ಸುಬ್ರಮಣ್ಯ ಶರ್ಮಾ, ಎ.ಡಿ. ಕೇಶವಮೂರ್ತಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಸಿದ್ದೇಶ್ ಕುಮಾರ್, ದೈಹಿಕ ಟಿಪಿಒ ಗೋವಿಂದೇಗೌಡ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವರದರಾಜು, ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ಶಕುಂತಲಾಶೆಟ್ಟಿ, ಪಿ.ಎಂ.ಶ್ರೀ ಸರ್ಕಾರಿ ನೂತನ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಭೂಪಲಯ್ಯ, ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ದಾಕ್ಷಾಯಿಣಿ, ಶಿಕ್ಷಣ ಸಂಯೋಜಕರು, ಸಿಆರ್‌ಪಿ, ಬಿಆರ್‌ಪಿಗಳು ಸೇರಿದಂತೆ ಶಿಕ್ಷಕರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net