ಡಿಸಿಎಂ ಸಮ್ಮುಖದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆ

Joined Congress
Joined Congress
Published on

ವಿಜಯವಾಣಿ ಸುದ್ದಿಜಾಲ ಆನೇಕಲ್
ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹುಲಿಮಂಗಲದಲ್ಲಿ ಜೆಡಿಎಸ್ ಮುಖಂಡ ರಾಜಗೋಪಾಲರೆಡ್ಡಿ ಮತ್ತು ಸುಷ್ಮಾರೆಡ್ಡಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು.
ಹುಲಿಮಂಗಲದ ಎಚ್.ಪಿ.ರಾಜಗೋಪಾಲರೆಡ್ಡಿ ನಿವಾಸಕ್ಕೆ ಆಗಮಿಸಿದ್ದ ಡಿ.ಕೆ.ಶಿವಕುಮಾರ್ ರಾಜಗೋಪಾಲರೆಡ್ಡಿ, ಪತ್ನಿ ಸುಮರಾಜು ಗೋಪಾಲ ರೆಡ್ಡಿ ಹಾಗೂ ಯುವ ಕಾಂಗ್ರೆಸ್ ನಾಯಕಿ ದೀಪಿಕಾರೆಡ್ಡಿ ಅವರನ್ನು ಕಾಂಗ್ರೆಸ್ ಶಾಲು ಹಾಕಿ ಪಕ್ಷಕ್ಕೆ ಬರಮಾಡಿಕೊಂಡರು.
ಹಲವು ವರ್ಷಗಳಿಂದ ಕಾಂಗ್ರೆಸ್‌ನಲ್ಲಿದ್ದ ರಾಜಗೋಪಾಲರೆಡ್ಡಿ ಅವರು 2023 ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಸಿಗದೆ ಜೆಡಿಎಸ್ ಸೇರ್ಪಡೆಗೊಂಡು ಚುನಾವಣೆಗೆ ಸ್ಪರ್ಧಿಸಿದ್ದರು. ಪುನಃ ಕಾಂಗ್ರೆಸ್ ಸೇರ್ಪಡೆಗೊಳ್ಳುವ ಮೂಲಕ ಮರಳಿ ಗೂಡಿಗೆ ಸೇರಿದ್ದಾರೆ.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಸಂಸದ ಡಿಕೆ ಸುರೇಶ್ ಸ್ಪರ್ಧೆ ಮಾಡಿ ಗೆಲುವು ಸಾಧಿಸಿದ್ದು ಮುಂದಿನ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ರಣತಂತ್ರ ರೂಪಿಸಿರುವ ಡಿಕೆ ಶಿವಕುಮಾರ್, ರಾಜ್ಯದಲ್ಲಿ ಈಗಾಗಲೇ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಮಾಡಿಕೊಂಡಿರುವುದರಿಂದ ಮೈತ್ರಿಯನ್ನು ಒಡೆದು ಕಾಂಗ್ರೆಸ್ ಗ್ರಾಮಾಂತರ ಕ್ಷೇತ್ರದಿಂದ ಮತ್ತೊಮ್ಮೆ ಗೆಲುವು ಸಾಧಿಸಬೇಕು ಎನ್ನುವ ನಿಟ್ಟಿನಲ್ಲಿ ರಾಜಗೋಪಾಲರೆಡ್ಡಿ ಅವರನ್ನು ಜೆಡಿಎಸ್‌ನಿಂದ ಮತ್ತೆ ವಾಪಸ್ ಕರೆ ತರುವ ಕೆಲಸ ಮಾಡಿದ್ದಾರೆ ಎನ್ನಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net