ರಾಜೀವ್ ಕಾಂಗ್ರೆಸ್ ಸೇರ್ಪಡೆಯಿಂದ ಪಕ್ಷದ ಬಲ ಹೆಚ್ಚಾಗಿದೆ : ಸಿದ್ದರಾಮಯ್ಯ

congress
Published on

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ಎಚ್.ವಿ. ರಾಜೀವ್ ಕಾಂಗ್ರೆಸ್ ಸೇರ್ಪಡೆಯಿಂದ ಜಿಲ್ಲೆಯಲ್ಲಿ ಕಾಂಗ್ರೆಸ್ ಬಲ ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಗರದ ವಿದ್ಯಾರಣ್ಯಪುರಂನ ಭೂತಾಳೆ ಮೈದಾನದಲ್ಲಿ ಬುಧವಾರ ಮುಡಾ ಮಾಜಿ ಅಧ್ಯಕ್ಷ ಎಚ್.ವಿ. ರಾಜೀವ್ ಬೆಂಬಲಿಗರ ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಎಚ್.ವಿ. ರಾಜೀವ್, ಮಾಜಿ ಮೇಯರ್ ಬಿ.ಎಲ್. ಭೈರಪ್ಪ, ನಗರ ಪಾಲಿಕೆ ಸದಸ್ಯ ಕೆ.ವಿ. ಮಲ್ಲೇಶ್, ಮೈಮುಲ್ ಮಾಜಿ ಅಧ್ಯಕ್ಷ ಓಂಪ್ರಕಾಶ್ ಅವರೊಂದಿಗೆ ಸಾವಿರಾರು ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಪಕ್ಷ ತತ್ವ ಸಿದ್ಧಾಂತ ಒಪ್ಪಿ ಬಂದ ಇವರೆಲ್ಲರಿಗೂ ಆತ್ಮೀಯವಾದ ಸ್ವಾಗತ ಕೋರುತ್ತೇನೆ ಎಂದರು.

ವಿಧಾನಸಭೆ ಚುನಾವಣೆಗೂ ಮುನ್ನವೇ ನಾನು ರಾಜೀವ್ ಅವರಿಗೆ ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನ ನೀಡಿದ್ದೆ. ಆದರೆ, ಆ ಸಂದರ್ಭ ಅವರು ಮನಸ್ಸು ಮಾಡಲಿಲ್ಲ. ಆ ನಂತರ ನಾನು ಒತ್ತಾಯ ಮಾಡಲು ಹೋಗಲಿಲ್ಲ. ಇತ್ತೀಚೆಗೆ ಶಾಸಕ ಎಸ್.ಟಿ. ಸೋಮಶೇಖರ್ ಮೂಲಕ ರಾಜೀವ್ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ವಿಚಾರ ಪ್ರಸ್ತಾಪಿಸಿದರು. ಆ ಪ್ರಕಾರ ಇಂದು ಅವರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ ಎಂದರು.

ರಾಜೀವ್ ಅವರನ್ನು ಬಿಜೆಪಿ ಗೌರವಯುತವಾಗಿ ನಡೆಸಿಕೊಂಡಿಲ್ಲ ಎಂದು ಸ್ವತಃ ಅವರೇ ಹೇಳಿದ್ದಾರೆ. ಗೌರವಯುತವಾಗಿ ನಡೆಸಿಕೊಂಡಿಲ್ಲ ಎಂಬ ಹಿನ್ನೆಲೆ ಹಾಗೂ ಕಾಂಗ್ರೆಸ್ ಬಡವರ ಪರವಾಗಿದೆ ಕಾರಣಕ್ಕಾಗಿ ರಾಜೀವ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಮಾತ್ರ ಬಡವರ ಪರ ಯೋಜನೆ ರೂಪಿಸಿ ಜಾರಿಗೊಳಿಸಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಮಾಜಿ ಮೇಯರ್ ಬಿ.ಎಲ್. ಭೈರಪ್ಪ, ನಗರ ಪಾಲಿಕೆ ಮಾಜಿ ಸದಸ್ಯ ಕೆ.ವಿ.ಮಲ್ಲೇಶ್ ಹಾಗೂ ಮೈಮುಲ್ ಮಾಜಿ ಅಧ್ಯಕ್ಷ ಓಂಪ್ರಕಾಶ್ ತಮ್ಮ ಅಧಿಕಾರಾವಧಿಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಇವರು ಸಹ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತವನ್ನು ಒಪ್ಪಿ ಪಕ್ಷ ಸೇರ್ಪಡೆಗೊಂಡಿದ್ದಾರೆ ಎಂದು ಹೇಳಿದರು.

ರಾಜೀವ್ 2013ರ ವಿಧಾನಸಭಾ ಚುನಾವಣೆಯಲ್ಲಿ ಕೆಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಹಾಗಾಗಿ ಅವರು ಕಾಂಗ್ರೆಸ್ ಸೇರ್ಪಡೆಯಾದರೆ ಸಹಜವಾಗಿಯೇ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಆಕಾಂಕ್ಷಿಯಾಗುತ್ತಾರೆ. ಈ ಹಿನ್ನೆಲೆಯಲ್ಲಿ ಕೃಷ್ಣರಾಜ ಕ್ಷೇತ್ರದಲ್ಲಿ 2 ಬಾರಿ ಗೆಲುವು ಸಾಧಿಸಿದ್ದ ಎಂ.ಕೆ. ಸೋಮಶೇಖರ್ ಅವರನ್ನು ಸಂಪರ್ಕಿಸಿ ಮಾತುಕತೆ ನಡೆಸಿದೆ. ಸೋಮಶೇಖರ್ ಅವರಿಂದ ವಿರೋಧ ವ್ಯಕ್ತವಾಗಬಹುದು ಎಂಬ ನಿರೀಕ್ಷೆ ಇತ್ತು. ಆದರೆ, ಅವರು ಮುಕ್ತ ಮನಸ್ಸಿನಿಂದ ರಾಜೀವ್ ಕಾಂಗ್ರೆಸ್ ಸೇರ್ಪಡೆಗೆ ಸಮ್ಮತಿ ಸೂಚಿಸಿದ್ದಾರೆ. ಹಾಗಾಗಿ ಯಾರು ಸಹ ಭಿನ್ನಾಭಿಪ್ರಾಯ ಮಾಡದೆ ಒಟ್ಟಾಗಿ ಪಕ್ಷ ಸಂಘಟನೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ವೇದಿಕೆಯಲ್ಲಿ ಸಚಿವರಾದ ದಿನೇಶ್ ಗುಂಡೂರಾವ್, ಕೆ. ವೆಂಕಟೇಶ್, ಶಾಸಕರಾದ ಕೆ. ಹರೀಶ್ ಗೌಡ, ಅನಿಲ್ ಚಿಕ್ಕಮಾದು, ಗಣೇಶ್ ಪ್ರಸಾದ್, ವಿಧಾನ ಪರಿಷತ್ ಸದಸ್ಯ ಡಿ.ತಿಮ್ಮಯ್ಯ, ಮಾಜಿ ಶಾಸಕ ಎಂ.ಕೆ. ಸೋಮಶೇಖರ್, ಸುನೀತಾ ವೀರಪ್ಪಗೌಡ, ಡಾ.ಯತೀಂದ್ರ ಸಿದ್ದರಾಮಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯ ಸಂದೇಶ್ ನಾಗರಾಜ್, ಕೆಪಿಸಿಸಿ ಕಾರ್ಯಾಧ್ಯಕ್ಷ ತನ್ವೀರ್ ಸೇಠ್, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ. ಪುಷ್ಪಾ ಅಮರ್‌ನಾಥ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ. ಬಿ.ಜೆ. ವಿಜಯ ಕುಮಾರ್, ನಗರಾಧ್ಯಕ್ಷ ಆರ್. ಮೂರ್ತಿ, ಮುಡಾ ಅಧ್ಯಕ್ಷ ಕೆ. ಮರಿಗೌಡ, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ ಅಧ್ಯಕ್ಷ ಅಯೂಬ್ ಖಾನ್, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್, ಮಾಜಿ ಮೇಯರ್ ಬಿ.ಎಲ್. ಭೈರಪ್ಪ, ನಗರ ಪಾಲಿಕೆ ಮಾಜಿ ಸದಸ್ಯ ಕೆ.ವಿ. ಮಲ್ಲೇಶ್, ಮೈಮುಲ್ ಮಾಜಿ ಅಧ್ಯಕ್ಷ ಓಂಪ್ರಕಾಶ್ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net