

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 5ನೇ ಜಿಲ್ಲಾ ಸಮ್ಮೇಳನ ಡಿ.5ರಂದು ಬೆಳಗ್ಗೆ 9ರಿಂದ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ.
ಸಮ್ಮೇಳನವನ್ನು ಮೂಡುಬಿದಿರೆ ಅಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಉದ್ಘಾಟಿಸಲಿದ್ದಾರೆ. ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ಹಿರಿಯ ಪತ್ರಕರ್ತ ಶಿವಸುಬ್ರಹ್ಮಣ್ಯ ಕೆ. ವಹಿಸಲಿದ್ದಾರೆ.ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸ್ಮರಣ ಸಂಚಿಕೆ ಬಿಡುಗಡೆ ಗೊಳಿಸಲಿದ್ದಾರೆ ಎಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಮ್ಮೇಳನದಲ್ಲಿ ‘ಮಾಧ್ಯಮ ಹಾಗೂ ಯುವಜನತೆ’ ವಿಚಾರಗೋಷ್ಠಿ ,ಅನ್ನಪೂರ್ಣೇಶ್ವರಿ ಅಂಧ ಕಲಾವಿದರಿಂದ ಸಂಗೀತ
ಕಾರ್ಯಕ್ರಮ. ಹಿರಿಯ ಪತ್ರಕರ್ತ ದಿ.ಮನೋಹರ ಪ್ರಸಾದ್ ಸಂಸ್ಮರಣೆ , ತಾಲೂಕು ಪತ್ರಕರ್ತರ ಸಂಘಗಳ ಅಧ್ಯಕ್ಷರೊಂದಿಗೆ ಸಂವಾದ, ಹಿರಿಯ ಪತ್ರಕರ್ತರಿಗೆ ಸನ್ಮಾನ ಕಾರ್ಯಕ್ರಮ ಹಾಗೂ ಸತೀಶ್ ಇರಾ ಮತ್ತು ರಿಷಿಕಾ ಕುಂದೇಶ್ವರ ಅವರಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದೆ. ಸಮಾರೋಪ ಸಮಾರಂಭದಲ್ಲಿ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಹಿರಿಯ ಪತ್ರಕರ್ತರನ್ನು ಸನ್ಮಾನಿಸಲಿದ್ದಾರೆ. ಮಂಗಳೂರು ವಿಶ್ವ ವಿದ್ಯಾ ನಿಲಯದ ಕುಲಪತಿ ಪ್ರೊ.ಪಿ.ಎಲ್.ಧರ್ಮ ಸಮಾರೋಪ ಭಾಷಣ ಮಾಡಲಿದ್ದಾರೆ ಎಂದು ಅವರು ತಿಳಿಸಿದರು.
ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಜಿಲ್ಲಾ ಸಂಘದ ಉಪಾಧ್ಯಕ್ಷ ಭಾಸ್ಕರೈ ಕಟ್ಟ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್. ಉಪಸ್ಥಿತರಿದ್ದರು.